ಕನ್ನಡಪ್ರಭ ವಾರ್ತೆ ತುಮಕೂರು
ಜಿಲ್ಲಾಡಳಿತ ವತಿಯಿಂದ ನಗರದ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ೬೯ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು- ನುಡಿ ಕುರಿತು ಶುಕ್ರವಾರ ಆಯೋಜಿಸಿದ್ದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಸಾಹಿತಿಗಳು, ವಿಚಾರವಾದಿಗಳು, ಚಿಂತಕರು, ವಿಮರ್ಶಕರು, ವಿಶ್ಲೇಷಕರು ಒಂದೆಡೆ ಸೇರಿ ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು. ಸಾಹಿತ್ಯ ಕ್ಷೇತ್ರ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಚಿಂತನೆ, ಚರ್ಚೆ, ವಿಮರ್ಶೆ, ಟೀಕೆ- ಟಿಪ್ಪಣಿಗಳು ನಡೆಯಬೇಕು ಎಂದರು.
ಶಿಕ್ಷಣ ಕ್ಷೇತ್ರದಲ್ಲಿರುವ ಸಮಸ್ಯೆಗಳ ಬಗ್ಗೆ ಸುದೀರ್ಘ ಚರ್ಚೆಗಳಾಗಬೇಕು ಎಂದು ತಿಳಿಸಿದರಲ್ಲದೆ, ನಮ್ಮ ಕಾಲದಲ್ಲಿ ಶಾಲಾ- ಕಾಲೇಜು, ವಿಶ್ವವಿದ್ಯಾನಿಲಯಗಳಿಂದ ಚರ್ಚಾ ಸ್ಪರ್ಧೆಗಳನ್ನು ಏರ್ಪಡಿಸಿ, ಗಂಭೀರ ವಿಷಯಗಳ ಬಗ್ಗೆ ಪರ- ವಿರೋಧದ ಚರ್ಚೆಗಳಾಗುತ್ತಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ವಿಶ್ವವಿದ್ಯಾನಿಲಯಗಳಲ್ಲಿಯೂ ಚರ್ಚೆಗಳು ನಡೆಯದಿರುವುದು ಉತ್ತಮ ಬೆಳವಣಿಗೆಯಲ್ಲ ಎಂದು ಅಭಿಪ್ರಾಯಪಟ್ಟರು.ಇತ್ತೀಚೆಗಷ್ಟೇ ದಸರಾ ಸಂದರ್ಭದಲ್ಲಿ ಆಯೋಜಿಸಿದ್ದ ಕವಿಗೋಷ್ಠಿಯಲ್ಲಿ ಹಲವಾರು ವಿಷಯ, ಸಮಸ್ಯೆಗಳ ಬಗ್ಗೆ ಚರ್ಚೆಯಾಗಿದೆ. ಬರಗೂರು ರಾಮಚಂದ್ರಪ್ಪ ಅವರೂ ಸಹ ಈ ಕವಿಗೋಷ್ಠಿಯಲ್ಲಿ ಶೈಕ್ಷಣಿಕ, ಸಾಹಿತ್ಯಿಕ, ಸಾಮಾಜಿಕ ವಿಷಯಗಳನ್ನು ಮಂಡಿಸಿರುವುದು ಸ್ತುತ್ಯಾರ್ಹ. ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡ-ನುಡಿ, ಸಾಮಾಜಿಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಲು ವಿಚಾರ ಗೋಷ್ಠಿಗಳನ್ನು ಏರ್ಪಡಿಸಿರುವುದು ನಿಜವಾಗಿಯೂ ಅರ್ಥಪೂರ್ಣವಾಗಿದೆ ಎಂದರು.ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ವಂಚನೆ:
ಕನ್ನಡಿಗರನ್ನು ಒಗ್ಗೂಡಿಸಲು ಚಿಂತನೆಗಳು ನಡೆಯಲಿ:
ಕಾರ್ಯಕ್ರಮದಲ್ಲಿ ದಿಬ್ಬೂರು ಎಲ್.ಮಂಜಣ್ಣ ಮತ್ತು ತಂಡದಿಂದ ಕನ್ನಡಪರ ಗೀತೆಗಳ ಗಾಯನ ಏರ್ಪಡಿಸಲಾಗಿತ್ತು.ನಂತರ ನಡೆದ ವಿಚಾರ ಗೋಷ್ಠಿಯಲ್ಲಿ ‘ಕರ್ನಾಟಕದ ಏಕೀಕರಣ ಹೋರಾಟದ ಹಾದಿ’ ಕುರಿತು ತುಮಕೂರಿನ ಸಂಶೋಧಕ ಡಾ. ಡಿ.ಎನ್. ಯೋಗೀಶ್ವರಪ್ಪ, ‘ವರ್ತಮಾನದ ಸವಾಲುಗಳು’ ಕುರಿತು ಲೇಖಕ ಹಾಗೂ ಚಿಂತಕ ಕೆ.ಪಿ.ನಟರಾಜು, ‘ಸಿನಿಮಾ ಕ್ಷೇತ್ರಕ್ಕೆ ತುಮಕೂರು ಜಿಲ್ಲೆಯ ಕೊಡುಗೆ’ ಕುರಿತು ಸುಧಾ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಮತ್ತು ಲೇಖಕ ಚ.ಹ.ರಘುನಾಥ್, ‘ಸಾಹಿತ್ಯ ಕ್ಷೇತ್ರಕ್ಕೆ ತುಮಕೂರು ಜಿಲ್ಲೆಯ ಕೊಡುಗೆ’ ಕುರಿತು ಸಾಹಿತಿ ಬಾ.ಹ.ರಮಾಕುಮಾರಿ ಹಾಗೂ ‘ರಂಗಭೂಮಿ ಕ್ಷೇತ್ರಕ್ಕೆ ಜಿಲ್ಲೆಯ ಕೊಡುಗೆ’ ಕುರಿತು ಡಾ. ರಾಜಪ್ಪ ದಳವಾಯಿ ಅವರು ವಿಚಾರ ಮಂಡನೆ ಮಾಡಿದರು. ಜಿಪಂ ಸಿಇಒ ಜಿ.ಪ್ರಭು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ತಹಸೀಲ್ದಾರ್ ರಾಜೇಶ್ವರಿ, ಪದವಿ ಪೂರ್ವ ಕಾಲೇಜು ಉಪ ನಿರ್ದೇಶಕ ಡಾ. ಬಾಲಗುರುಮೂರ್ತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ, ಪ್ರಸಿದ್ಧ ಸಾಹಿತಿ ಡಾ. ಕರೀಗೌಡ ಬೀಚನಹಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಿಂತಕ ಹಾಗೂ ಲೇಖಕ ನಾಡೋಜ ಬರಗೂರು ರಾಮಚಂದ್ರಪ್ಪ ಮಾತನಾಡಿ, ಹಿಂದಿ ಭಾಷೆಗೆ ದೊರೆಯುತ್ತಿರುವ ವಿಶೇಷ ಪ್ರಾಶಸ್ತ್ಯ ಇತರೆ ಭಾಷೆಗಳಿಗೆ ಸಿಗದಿರುವುದು ವಿಪರ್ಯಾಸ. ಹಿಂದಿ ಭಾಷೆ ರಾಷ್ಟ್ರ ಭಾಷೆಯಲ್ಲ. ಹಿಂದಿಯಂತೆ ಕನ್ನಡಕ್ಕೂ ಪ್ರಾಶಸ್ತ್ಯ ದೊರೆಯಬೇಕು. ಕನ್ನಡಕಷ್ಟೆ ಅಲ್ಲದೆ, ದೇಶದ ಇತರೆ ರಾಜ್ಯಗಳ ಭಾಷೆಗಳಿಗೂ ಪ್ರಾಶಸ್ತ್ಯ ದೊರೆಯಬೇಕೆಂದು ನಮ್ಮ ಆಗ್ರಹವಿದೆ. ರಾಷ್ಟ್ರದ ಎಲ್ಲಾ ರಾಜ್ಯಗಳ ಭಾಷೆಗಳು ಸಮಾನವೆನ್ನಲು ರಾಷ್ಟ್ರೀಯ ಭಾಷಾ ನೀತಿ ರಚನೆಯಾಗಬೇಕೆಂಬ ಹೋರಾಟ ನಮ್ಮದು ಎಂದು ತಿಳಿಸಿದರು.
ಕನ್ನಡಕ್ಕೆ 2008 ರ ನವೆಂಬರ್ 1 ರಂದು ಶಾಸ್ತ್ರೀಯ ಸ್ಥಾನಮಾನ ನೀಡಿದ್ದರೂ ಸಹ ಶಾಸ್ತ್ರೀಯ ಭಾಷೆಗೆ ಸಂಬಂಧಿಸಿದ ಪ್ರತ್ಯೇಕ ಸಂಸ್ಥೆಯನ್ನು ಸ್ಥಾಪಿಸಲು ಕರ್ನಾಟಕಕ್ಕೆ ಈವರೆಗೂ ಸಾಧ್ಯವಾಗಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕು. ತಮಿಳು ನಾಡಿನಲ್ಲಿ ಇಂತಹದೊಂದು ಪ್ರತ್ಯೇಕ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಕೇಂದ್ರದ ಮಾನವ ಸಂಪನ್ಮೂಲ ಇಲಾಖೆಯಿಂದ ಅನುಮತಿ ಪಡೆದು ಕನ್ನಡದ ಪ್ರತ್ಯೇಕ ಶಾಸ್ತ್ರೀಯ ಭಾಷಾ ಸಂಸ್ಥೆ ಸ್ಥಾಪನೆಗೆ ಮುಂದಾಗಬೇಕೆಂದು ಗೃಹ ಸಚಿವರಲ್ಲಿ ಅವರು ಮನವಿ ಮಾಡಿದರಲ್ಲದೆ, ಪ್ರತ್ಯೇಕ ಶಾಸ್ತ್ರೀಯ ಭಾಷಾ ಸಂಸ್ಥೆ ಸ್ಥಾಪನೆಯಿಂದ ರಾಜ್ಯದ ಭಾಷೆಗಳು ಮತ್ತಷ್ಟು ಬಲಗೊಳ್ಳಲು ಸಾಧ್ಯವೆಂದು ತಿಳಿಸಿದರು.