ಕನ್ನಡಪ್ರಭ ವಾರ್ತೆ ತುಮಕೂರು
ನಗರ ಕೇಂದ್ರ ಗ್ರಂಥಾಲಯದಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಸಚಿವರು, ವಿದ್ಯಾರ್ಥಿಗಳು ಉದ್ಯೋಗ ಪಡೆಯಲು ಶಿಕ್ಷಣದ ಜೊತೆಗೆ ಕೌಶಲ್ಯಗಳನ್ನು ಕಲಿಯುವುದು ಅನಿವಾರ್ಯವಾಗಿದೆ. ಜಿಲ್ಲೆಯಲ್ಲಿರುವ ಮೆಡಿಕಲ್ ಕಾಲೇಜು ಹಾಗೂ ಇಂಜಿನಿಯರ್ ಕಾಲೇಜುಗಳಿಂದ ಉತ್ತೀರ್ಣರಾಗಿ ಹೊರಬರುವ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾಭಿವೃದ್ಧಿ ತರಬೇತಿ ನೀಡಿ ಅವರ ಕೌಶಲ್ಯವನ್ನು ಅಭಿವೃದ್ಧಿಪಡಿಸಿ ಉದ್ಯೋಗ ಪಡೆಯಲು ಅನುವು ಮಾಡಿಕೊಡಬೇಕೆಂಬ ಸದುದ್ದೇಶದಿಂದ ಕೌಶಲ್ಯ ತರಬೇತಿ ಕೇಂದ್ರವನ್ನು ತೆರೆಯಲು ಸರ್ಕಾರ ಉದ್ದೇಶಿಸಿದೆ ಎಂದು ತಿಳಿಸಿದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಸ್ಮಾರ್ಟ್ ಸಿಟಿ ಯೋಜನೆಯಡಿ ಕೇಂದ್ರ ಗ್ರಂಥಾಲಯದ 3ನೇ ಮಹಡಿಯಲ್ಲಿ ಸುಮಾರು 11,00 ಚದರ ಅಡಿ ವಿಸ್ತೀರ್ಣದ ಸುಸಜ್ಜಿತ ಕಟ್ಟಡದಲ್ಲಿ ಯುವ ಉದ್ಯೋಗಾಕಾಂಕ್ಷಿಗಳಿಗಾಗಿ ಕೌಶಲ್ಯ ತರಬೇತಿ ಕೇಂದ್ರವನ್ನು ತೆರೆಯುವ ಬಗ್ಗೆ ಸ್ಥಳೀಯ ಶೈಕ್ಷಣಿಕ ಸಂಸ್ಥೆಗಳು, ಕೈಗಾರಿಕೆಗಳೊಂದಿಗೆ ಚರ್ಚಿಸಿದ ನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.ಕೌಶಲ್ಯ ತರಬೇತಿ ಕೇಂದ್ರದಲ್ಲಿ ಪ್ರಮುಖವಾಗಿ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನದಲ್ಲಿ ಕೌಶಲ್ಯ ಹೆಚ್ಚಿಸುವ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವವರಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆಯಲ್ಲದೇ, 10ನೇ ತರಗತಿ/ ಪಿಯುಸಿ/ಐಟಿಐ ಅನುತ್ತೀರ್ಣರಾದವರಿಗೂ ತರಬೇತಿ ನೀಡಲು ಯೋಜಿಸಲಾಗಿದೆ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಹೆಚ್ಚಿಸಲು ಈ ಕೇಂದ್ರ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಗ್ರಂಥಾಲಯದ ವಾತಾವರಣದಲ್ಲಿ ತರಬೇತಿಯಂತಹ ಇನ್ನಾವುದೇ ಚಟುವಟಿಕೆಗಳಿಗೆ ಅವಕಾಶ ನೀಡಿದರೆ ವಿದ್ಯಾರ್ಥಿಗಳ ಓದಿಗೆ ತೊಂದರೆಯಾಗುವುದಿಲ್ಲವೇ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಿರುದ್ಯೋಗಿ ವಿದ್ಯಾರ್ಥಿಗಳ ಉದ್ಯೋಗಾವಕಾಶಕ್ಕಾಗಿಯೇ ತರಬೇತಿ ಕೇಂದ್ರ ತೆರೆಯಲು ಉದ್ದೇಶಿಸಲಾಗಿದೆಯೇ ಹೊರತು, ವಾಣಿಜ್ಯ ಉದ್ದೇಶಕ್ಕಾಗಿ ಅಲ್ಲ. ಜಿಲ್ಲಾ ಸಚಿವರು, ಶೈಕ್ಷಣಿಕ ಸಂಸ್ಥೆಗಳು, ಕೈಗಾರಿಕೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದೆಂದು ತಿಳಿಸಿದರು. ಶಾಸಕ ಜ್ಯೋತಿ ಗಣೇಶ್, ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ದರ್ಶನ್, ಮಹಾ ನಗರ ಪಾಲಿಕೆ ಆಯುಕ್ತ ಬಿ.ವಿ. ಆಶ್ವಿಜ, ಜಿಲ್ಲಾ ಪಂಚಾಯತ್ ಸಿಇಒ ಜಿ. ಪ್ರಭು, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ರವೀಶ್, ಗ್ರಂಥಾಲಯ ಇಲಾಖೆ ಉಪನಿರ್ದೇಶಕ ಸರೋಜಮ್ಮ ಸೇರಿ ಮತ್ತಿತರರು ಉಪಸ್ಥಿತರಿದ್ದರು.
ತರಬೇತಿ ಕೇಂದ್ರ ತೆರೆಯುವುದು ಹೇಳಿಕೆಯಾಗಿಯೇ ಉಳಿಯಬಾರದು. ಕಾರ್ಯರೂಪಕ್ಕೆ ತರಬೇಕೆಂಬ ಹಿನ್ನೆಲೆಯಲ್ಲಿ ಗೃಹ ಸಚಿವರ ಸಲಹೆ ಮೇರೆಗೆ ಈ ಭೇಟಿ ನೀಡಿದ್ದೇನೆ, ಅಲ್ಲದೇ ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ನೀರಿನ ಘಟಕ ಕೆಟ್ಟು ನಿಂತಿವೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶುದ್ಧ ನೀರಿನ ಘಟಕದ ನಿರ್ವಹಣೆಯನ್ನು ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಲಾಗಿದ್ದು, ಇನ್ನು ಮುಂದೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಎಲ್ಲ ಶುದ್ಧ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿಡಲು ಈಗಾಗಲೇ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ಮುಂದಿನ ಐದಾರು ತಿಂಗಳೊಳಗಾಗಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.