ಜಿಲ್ಲೆಯಲ್ಲಿ ಈ ಬಾರಿ 4 ತಿಂಗಳಿಗೆ 180 ಡೆಂಘೀ ಪ್ರಕರಣ ಪತ್ತೆ: ಡಾ.ನಟರಾಜ್

KannadaprabhaNewsNetwork |  
Published : May 18, 2024, 12:33 AM IST
ಪೋಟೋ: 16ಎಸ್‌ಎಂಜಿಕೆಪಿ01ಶಿವಮೊಗ್ಗ ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಮತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಡೆಂಗ್ಯೂ ದಿನ ಡೆಂಗ್ಯೂ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಚಾಲನೆ ನೀಡಿದರು. | Kannada Prabha

ಸಾರಾಂಶ

ಡೆಂಘೀ ಮತ್ತು ಇತರೆ ಕೀಟಜನ್ಯ ಸೋಂಕುಗಳ ಕುರಿತು ಸಮಾಜದಲ್ಲಿ ವ್ಯಾಪಕವಾಗಿ ಅರಿವು ಮೂಡಿಸಬೇಕು. ಆರೋಗ್ಯ ಇಲಾಖೆಯು ಇತರೆ ಇಲಾಖೆಗಳ ಸಹಯೋಗದಲ್ಲಿ ಅರಿವು ಮತ್ತು ನಿಯಂತ್ರಣ ಕ್ರಮಗಳ ಕೈಗೊಳ್ಳುತ್ತಿದೆ. ಮುಖ್ಯವಾಗಿ ವಿದ್ಯಾರ್ಥಿಗಳು ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಸೊಳ್ಳೆಗಳು ಆಗದಂತೆ ಮುನ್ನಚ್ಚರಿಕೆ ಕ್ರಮ ಹಾಗೂ ಸೊಳ್ಳೆ ಕಚ್ಚದಂತೆ ಸ್ವಯಂ ರಕ್ಷಣಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಕಳೆದ ಇಡೀ ವರ್ಷದಲ್ಲಿ ದಾಖಲಾದಷ್ಟು ಡೆಂಘೀ ಪ್ರಕರಣಗಳು ಈ ವರ್ಷ ಕೇವಲ ನಾಲ್ಕೇ ತಿಂಗಳಿನಲ್ಲಿ ದಾಖಲಾಗಿದೆ. ಜನವರಿಯಿಂದ ಇಲ್ಲಿಯವರೆಗೆ 180 ಡೆಂಘೀ ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಟರಾಜ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಡೆಂಘೀ ದಿನ ಕಾರ್ಯಕ್ರಮದಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಈ ವರ್ಷ ಈವರೆಗೆ 133 ಚಿಕೂನ್ ಗುನ್ಯಾ ಪ್ರಕರಣಗಳು ದಾಖಲಾಗಿವೆ. ಹೆಚ್ಚಿನ ತಾಪಮಾನ ಕೂಡ ಪ್ರಕರಣಗಳು ಹೆಚ್ಚಲು ಕಾರಣವಾಗಿದ್ದು, ಎಲ್ಲರೂ ಸೊಳ್ಳೆ ನಿಯಂತ್ರಣ ಕ್ರಮಗಳನ್ನು ಅನುಸರಿಸಬೇಕು ಎಂದು ಸಲಹೆ ನೀಡಿದರು.

ಜಿ.ಪಂ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ ಮಾತನಾಡಿ, ಡೆಂಘೀ ಮತ್ತು ಇತರೆ ಕೀಟಜನ್ಯ ಸೋಂಕುಗಳ ಕುರಿತು ಸಮಾಜದಲ್ಲಿ ವ್ಯಾಪಕವಾಗಿ ಅರಿವು ಮೂಡಿಸಬೇಕು. ಆರೋಗ್ಯ ಇಲಾಖೆಯು ಇತರೆ ಇಲಾಖೆಗಳ ಸಹಯೋಗದಲ್ಲಿ ಅರಿವು ಮತ್ತು ನಿಯಂತ್ರಣ ಕ್ರಮಗಳ ಕೈಗೊಳ್ಳುತ್ತಿದೆ. ಮುಖ್ಯವಾಗಿ ವಿದ್ಯಾರ್ಥಿಗಳು ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಸೊಳ್ಳೆಗಳು ಆಗದಂತೆ ಮುನ್ನಚ್ಚರಿಕೆ ಕ್ರಮ ಹಾಗೂ ಸೊಳ್ಳೆ ಕಚ್ಚದಂತೆ ಸ್ವಯಂ ರಕ್ಷಣಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡುದಪ್ಪ ಕಸಬಿ ಮಾತನಾಡಿ, ಜೂನ್ ಮತ್ತು ಜುಲೈನಲ್ಲಿ ಡೆಂಘೀ ಮತ್ತು ಇತರೆ ಕೀಟಜನ್ಯ ಸೋಂಕುಗಳು ಹೆಚ್ಚಾಗಲಿದ್ದು ಮೇ ತಿಂಗಳಿನಲ್ಲೇ ಈ ಕುರಿತು ಅರಿವು ಮತ್ತು ನಿಯಂತ್ರಣಕ್ಕೆ ಅಗತ್ಯವಾದ ಕ್ರಮ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾಡಳಿತ ಕಚೇರಿಯಿಂದ ಆಯೋಜಿಸಿದ್ದ ಡೆಂಘೀ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ಕಾರ್ಯಕ್ರಮಗಳ ಅನುಷ್ಠಾನಾಧಿಕಾರಿಗಳಾದ ಡಾ.ನಾಗರಾಜನಾಯ್ಕ, ಡಾ.ಮಲ್ಲಪ್ಪ ಓ, ಡಾ.ಕಿರಣ್ ಎಸ್.ಕೆ, ಡಾ.ವೆಂಕಟೇಶ್, ಡಾ.ಚಂದ್ರಶೇಖರ್, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಚ್.ಬಿ.ಆದಿಮೂರ್ತಿ, ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಜೆ.ಮಧು, ರೋಟರಿ ಸಂಸ್ಥೆಯ ವಿಜಯಕುಮಾರ್ ಇತರೆ ಅಧಿಕಾರಿ, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

---------------

ಡೆಂಘೀ ನಿಯಂತ್ರಣಕ್ಕೆ ಜನರ ಸಹಕಾರ ಅಗತ್ಯ: ಡಿಸಿ

ಪ್ರತಿ ವರ್ಷಕ್ಕಿಂತ ಈ ಬಾರಿ ಅತಿ ಹೆಚ್ಚು ಡೆಂಘೀ ಪ್ರಕರಣಗಳು ಕಂಡು ಬಂದಿದೆ. ಅದರಲ್ಲೂ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿದ್ದು ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳು ಈ ಕುರಿತಂತೆ ಮುನ್ನೆಚ್ಚರಿಕೆ ಕ್ರಮಗಳ ಕೈಗೊಳ್ಳಲು ಈಗಾಗಲೇ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಡೆಂಘೀ ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ತಮ್ಮ ಸುತ್ತಮುತ್ತಲಿನ ಪರಿಸರ ಶುದ್ಧವಾಗಿಡಬೇಕು, ಸೊಳ್ಳೆಗಳು ಸುಳಿಯದ ರೀತಿಯಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಪ್ರತಿಯೊಬ್ಬರೂ ಡೆಂಘೀ ಬಗ್ಗೆ ಎಚ್ಚರ ವಹಿಸಿ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ ಎಂದರು.

------------------------

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ