ಈ ವರ್ಷವೇ ನೇರ ರೈಲು ಮಾರ್ಗ ಕಾಮಗಾರಿ ಪ್ರಾರಂಭ

KannadaprabhaNewsNetwork |  
Published : Oct 03, 2024, 01:26 AM IST
ಕ್ಯಾಪ್ಷನಃ2ಕೆಡಿವಿಜಿ56, 57ಃ ದಾವಣಗೆರೆಯ ಜಿಲ್ಲಾಡಳಿತ ಭವನದಲ್ಲಿಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.  | Kannada Prabha

ಸಾರಾಂಶ

ತುಮಕೂರು- ಚಿತ್ರದುರ್ಗ- ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದೆ. ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ದಾವಣಗೆರೆಯಲ್ಲಿ ಹೇಳಿದ್ದಾರೆ.

- 2027ರ ಜನವರಿಯೊಳಗೆ ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರಕ್ಕೆ ಕ್ರಮ: ಸಚಿವ ವಿ.ಸೋಮಣ್ಣ ಹೇಳಿಕೆ - ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ

- - - ಕನ್ನಡಪ್ರಭ ವಾರ್ತೆ ದಾವಣಗೆರೆ

ತುಮಕೂರು- ಚಿತ್ರದುರ್ಗ- ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದೆ. ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.

ಬುಧವಾರ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

287.54 ಎಕರೆ ಸ್ವಾಧೀನ ಬಾಕಿ:

ನೇರ ರೈಲು ಮಾರ್ಗವು ನಿಧಾನಗತಿಯಲ್ಲಿ ಸಾಗುತ್ತಿದ್ದು, ಕಳೆದ ಎರಡೂವರೆ ತಿಂಗಳಿಂದ ಪ್ರಗತಿ ವೇಗ ಹೆಚ್ಚಿಸಲಾಗಿದೆ. ಒಟ್ಟು ಈ ಯೋಜನೆಗೆ 2406.73 ಎಕರೆ ಭೂಮಿ ಬೇಕಾಗಿದೆ. ಈಗಾಗಲೇ 2119.16 ಎಕರೆ ಸ್ವಾಧೀನಪಡಿಸಿಕೊಳ್ಳಲಾಗಿದೆ. 287.54 ಎಕರೆ ಸ್ವಾಧೀನ ಮಾಡಿಕೊಳ್ಳಬೇಕಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಹಾದುಹೋಗುವ 263.78 ಎಕರೆ ಜಮೀನಿನಲ್ಲಿ 246.20 ಎಕರೆ ಸ್ವಾಧೀನ ಪಡಿಸಿಕೊಂಡಿದ್ದು, 17.58 ಎಕರೆ ಸ್ವಾಧೀನ ಪ್ರಕ್ರಿಯೆ ವಿವಿಧ ಹಂತದಲ್ಲಿದ್ದು ಕೆಲವೇ ದಿನಗಳಲ್ಲಿ ಪೂರ್ಣವಾಗಲಿದೆ ಎಂದರು.

ಜನವರಿಯೊಳಗೆ ಉದ್ಘಾಟನೆ ಉದ್ದೇಶ:

ತುಮಕೂರು- ಚಿತ್ರದುರ್ಗ- ದಾವಣಗೆರೆ ನೇರ ರೈಲು ಯೋಜನೆಯನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸುವ ಗುರಿ ಹೊಂದಲಾಗಿದೆ. 2027ರ ಜನವರಿಯೊಳಗೆ ಪೂರ್ಣಗೊಳಿಸಿ ಉದ್ಘಾಟನೆ ಮಾಡಲು ಉದ್ದೇಶಿಸಲಾಗಿದೆ. ರೈಲ್ವೆ ಕಾಮಗಾರಿಯನ್ನು ಸಂಪೂರ್ಣವಾಗಿ ಕೇಂದ್ರ ಸರ್ಕಾರದಿಂದ ಅಭಿವೃದ್ಧಿ ಮಾಡಲಾಗುತ್ತದೆ. ಇದೇ ಆರ್ಥಿಕ ವರ್ಷದ ಕೊನೆಯಾಗುವ ವೇಳೆಗೆ ಕನಿಷ್ಠ 4 ರಿಂದ 5 ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ 21 ರೈಲ್ವೆ ಯೋಜನೆಗಳು:

ರಾಜ್ಯದಲ್ಲಿ ಒಟ್ಟು 21 ರೈಲ್ವೆ ಯೋಜನೆಗಳು ನಡೆಯುತ್ತಿದ್ದು, ಇದಕ್ಕಾಗಿ ₹43 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತದೆ. ಈ ಎಲ್ಲ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ, ರಾಜ್ಯವನ್ನು ರೈಲ್ವೆ ಸೌಕರ್ಯ ಹೊಂದಿದ ರಾಜ್ಯವನ್ನಾಗಿ ಮಾಡುವ ಗುರಿ ಹೊಂದಲಾಗಿದೆ. ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ಹೊಸ ರೈಲ್ವೆ ಯೋಜನೆಗೆ ಈಗಾಗಲೇ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 115.11.08 ಎಕರೆ ಜಮೀನು ಸ್ವಾಧೀನ ಮಾಡಲಾಗಿದೆ ಎಂದು ತಿಳಿಸಿದರು.

ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ನಿರ್ಮಾಣ:

ಸಾರ್ವಜನಿಕರಿಗೆ ಅನಾನುಕೂಲ ಆಗುತ್ತಿರುವ ಕಡೆ ರೈಲ್ವೆ ಇಲಾಖೆಯಿಂದಲೇ ಮೇಲ್ಸೇತುವೆ ಹಾಗೂ ಕೆಳಸೇತುವೆಗಳನ್ನು ನಿರ್ಮಿಸಲಾಗುತ್ತಿದೆ. ದಾವಣಗೆರೆ ನಗರದ ಅಶೋಕ ಟಾಕೀಸ್ ಹತ್ತಿರ ರೈಲ್ವೆ ಲೈನ್ ಕೆಳಸೇತುವೆಗೆ ಸಂಪರ್ಕ ರಸ್ತೆ ನಿರ್ಮಾಣದ ಭೂ ನೇರ ಖರೀದಿಗೆ ₹23.09 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಆದಷ್ಟು ಬೇಗ ಈ ಕಾಮಗಾರಿ ಮಾಡಲು ಅನುವು ಮಾಡಿಕೊಡಲಾಗುತ್ತದೆ ಎಂದರು.

ರೈಲ್ವೆ ವೇಗ ಹೆಚ್ಚಿಸಲು ಕ್ರಮ:

ರೈಲ್ವೆ ಎಂಜಿನ್‌ಗಳು ಬಹುತೇಕ ಶೇ.98ರಷ್ಟು ವಿದ್ಯುತ್ ಚಾಲಿತವಾಗಿವೆ. ಶೇ.2ರಷ್ಟು ಮಾತ್ರ ಡೀಸೆಲ್ ಎಂಜಿನ್‌ಗಳಿವೆ. ರೈಲ್ವೆ ಪ್ರಯಾಣದ ವೇಗ ಪ್ರಸ್ತುತ 110 ಕಿ.ಮೀ. ಇದ್ದು ಇದನ್ನು 135 ಕಿ.ಮೀ.ವರೆಗೆ ವೇಗ ಹೆಚ್ಚಿಸುವ ಗುರಿಯೊಂದಿಗೆ ಮೂಲಸೌಕರ್ಯಗಳ ಅಭಿವೃದ್ಧಿ ಮಾಡಲಾಗುತ್ತಿದೆ. ವಂದೇ ಭಾರತ್ ರೈಲು ಬಡವರು, ಮಧ್ಯಮ ವರ್ಗದವರಿಗೆ ತುರ್ತು ಪ್ರಯಾಣಕ್ಕಾಗಿ ಕೈಗೆಟಕುವ ದರದಲ್ಲಿ ಟಿಕೆಟ್ ನಿಗದಿಪಡಿಸಲಾಗಿದೆ. ಇದರಲ್ಲಿ ನೀಡಲಾಗಿರುವ ಸೌಲಭ್ಯಗಳ ಬಗ್ಗೆ ಅರಿಯಲು ಪ್ರಯಾಣಿಸಬೇಕು ಎಂದರು.

ಕನ್ನಡದಲ್ಲೆ ರೈಲ್ವೆ ಪರೀಕ್ಷೆ:

ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು 15 ಲಕ್ಷ ಜನರು ಪಿಂಚಣಿ ಪಡೆಯುತ್ತಿದ್ದಾರೆ. ಖಾಲಿ ಇರುವ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು, ನಮ್ಮ ರಾಜ್ಯದ ಯುವಕರು ಉಪಯೋಗ ಪಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಖಾಲಿ ಇರುವ 46 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದರು.

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ, ದಾವಣಗೆರೆ ನಗರದಲ್ಲಿನ ಮೀನು ಮಾರುಕಟ್ಟೆ ಬಳಿ ರೈಲ್ವೆ ಮೇಲ್ಸೇತುವೆ ಅಥವಾ ಕೆಳಸೇತುವೆ ಅಗತ್ಯವಾಗಿದೆ. ಅಶೋಕ ಟಾಕೀಸ್ ಹತ್ತಿರ ರಸ್ತೆ ಕಿರಿದಾಗಿದ್ದು, ಸಂಪರ್ಕ ರಸ್ತೆ ನಿರ್ಮಾಣ ಮಾಡಬೇಕು. ಲಿಂಗೇಶ್ವರ ದೇವಸ್ಥಾನದ ಹತ್ತಿರ ಪಾದಚಾರಿ ಮಾರ್ಗ ನಿರ್ಮಿಸಲು, ಶಿವಮೊಗ್ಗ- ಶಿಕಾರಿಪುರ- ರಾಣೇಬೆನ್ನೂರು ಹೊಸ ಮಾರ್ಗದಲ್ಲಿ ಸೂರಗೊಂಡನಕೊಪ್ಪ ಅಥವಾ ನ್ಯಾಮತಿಯಲ್ಲಿ ರೈಲ್ವೆ ನಿಲ್ದಾಣಕ್ಕೆ ಅವಕಾಶ ಮಾಡಲು, ಹರಿಹರದಲ್ಲಿನ ರೈಲ್ವೆ ಆಸ್ಪತ್ರೆ, ಸ್ಕೂಲ್ ಮೇಲ್ದರ್ಜೆಗೇರಿಸಲು ರೈಲ್ವೆ ಸಚಿವರಲ್ಲಿ ಮನವಿ ಮಾಡಿದರು.

ಹರಿಹರ ಶಾಸಕ ಬಿ.ಪಿ.ಹರೀಶ್ ಮಾತನಾಡಿ, ಹೊಸಪೇಟೆಗೆ ಹೋಗುವ ಹೆದ್ದಾರಿಯಲ್ಲಿ ಒಂದೇ ರೈಲ್ವೆ ಸೇತುವೆ ಇದೆ. ಮತ್ತೊಂದು ಬ್ರಿಡ್ಜ್ ನಿರ್ಮಾಣ ಮಾಡಬೇಕು. ಮಳೆ ಬಂದಾಗ ಈ ಮಾರ್ಗದ ವಾಹನಗಳಿಗೆ ತೊಂದರೆ ಆಗುವುದರಿಂದ ರೈಲ್ವೆ ಸೇತುವೆಯ ಅವಶ್ಯಕತೆ ಹೆಚ್ಚಿದೆ ಎಂದರು.

ಸಭೆಯಲ್ಲಿ ಮೇಯರ್ ಕೆ.ಚಮನ್ ಸಾಬ್, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಬಿ. ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ರೈಲ್ವೆ ಹಿರಿಯ ಅಧಿಕಾರಿ ಶರ್ಮಾ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

- - - -2ಕೆಡಿವಿಜಿ56, 57ಃ:

ದಾವಣಗೆರೆಯ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಕೇಂದ್ರ ರೈಲ್ವೆ, ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮತದಾರರ ಕರಡುಪಟ್ಟಿ ಪ್ರಕಟ ಗ್ರೇಟರ್‌ ಬೆಂಗಳೂರಲ್ಲಿ 89 ಲಕ್ಷ ಮತದಾರರು
ಬೆಂಗಳೂರಿನ ಅರ್ಧದಷ್ಟು ಕಸ ಮರುಬಳಕೆ: ಜಿಬಿಎ-ರಾಜ್ಯ ನಿರ್ವಹಣೆಯಲ್ಲಿ ಶೀಘ್ರ ಭಾರಿ ಬದಲಾವಣೆ