ಉಳ್ಳಾಲ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಷ್ಟ್ರೀಯ ಹೆದ್ದಾರಿ 66ರ ಸರ್ವೀಸ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಗುರುವಾರ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ ಆರಂಭಿಸಲಾಯಿತು.
ಈ ವೇಳೆ ವ್ಯಾಪಾರಸ್ಥರು ಒಂದು ವಾರದ ಗಡುವು ನೀಡುವಂತೆ ಮನವಿ ಮಾಡಿದರು. ಆದರೆ ಎನ್‌ಎಚ್‌ನ ಜನರಲ್ ಮ್ಯಾನೇಜರ್ (ತಾಂತ್ರಿಕ) ಹಾಗೂ ಪ್ರಾಜೆಕ್ಟ್ ಡೈರೆಕ್ಟರ್ ಅಬ್ದುಲ್ಲಾ ಜಾವೇದ್ ಅಜ್ಮಿ ಅವರು, ಹಲವು ಬಾರಿ ನೋಟಿಸ್ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ತೆರವು ಕಾರ್ಯಾಚರಣೆ ಅನಿವಾರ್ಯವಾಗಿದೆ ಎಂದು ತಿಳಿಸಿದರು. ಬಳಿಕ ವ್ಯಾಪಾರಸ್ಥರ ಮನವಿಯ ಮೇರೆಗೆ ಎರಡು ಗಂಟೆಗಳ ಕಾಲಾವಕಾಶ ನೀಡಲಾಯಿತು.
ನಂತರ ಅಂಗಡಿ ಮಾಲೀಕರು ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ತೆರವುಗೊಳಿಸಲು ಮುಂದಾದರು. ಎನ್‌ಎಚ್-66 ಸರ್ವೀಸ್ ರಸ್ತೆ ಕಾಮಗಾರಿಗೆ ಅಡ್ಡಿಯಾಗಿರುವ ಅನಧಿಕೃತ ನಿರ್ಮಾಣಗಳ ವಿರುದ್ಧ ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.