ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಬಿಜೆಪಿಯವರ ಬಣ್ಣ ಬಯಲಿಗೆಳೆಯಲು ಆ. 9 ರಂದು ಮೈಸೂರಿನಲ್ಲಿ ನಡೆಯುವ ಜನಾಂದೋಲನಾ ಸಮಾವೇಶಕ್ಕೆ ಜಿಲ್ಲೆ ಯಿಂದ ಸಾವಿರಾರು ಜನರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಹೇಳಿದ್ದಾರೆ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿನಲ್ಲಿ ನಡೆಯುವ ಜನಾಂದೋಲನಾ ಸಮಾವೇಶದಲ್ಲಿ ಭಾಗವಹಿಸಲು ಎಲ್ಲಾ ತಯಾರಿ ನಡೆಸಲಾಗಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕ್ಷೇತ್ರದ ಶಾಸಕರು ಈ ಬಗ್ಗೆ ನಿಗಾ ವಹಿಸಲಿದ್ದಾರೆ ಎಂದು ಹೇಳಿದರು.ಕಳೆದ 4 ದಶಕಗಳಿಂದ ಸಚ್ಚಾರಿತ್ರ್ಯ ರಾಜಕಾರಣ ಮಾಡುತ್ತಾ ಬಂದಿರುವ ಒಳ್ಳೆಯ ಆಡಳಿತಗಾರ, ಭಾಗ್ಯಗಳ ಸರದಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಗತಿ ಮತ್ತು ಕಾಂಗ್ರೆಸ್ ಪಕ್ಷದ ಗೆಲುವು ಸಹಿಸದ ಬಿಜೆಪಿಯವರು ಅವರ ಮೇಲೆ ಆರೋಪ ಹೊರಿಸಿ ಕೇಂದ್ರ ಸರ್ಕಾರವನ್ನು ಬಳಸಿಕೊಂಡು ನೊಟೀಸು ನೀಡಿದ್ದು, ಇದು ಒಪ್ಪುವಂತದ್ದು ಅಲ್ಲ ಎಂದರು.ಕೆಪಿಸಿಸಿ ರಾಜ್ಯಾಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಜೆಪಿಯವರ ಬಣ್ಣ ಬಯಲು ಮಾಡುವ ಜನಾಂದೋಲನ ಆರಂಭ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಆ. 9 ರಂದು ನಡೆಯುವ ಮೈಸೂರಿನ ಜನಾಂದೋಲನ ಕಾರ್ಯಕ್ರಮ ಯಶಸ್ವಿಯಾಗಲಿದೆ ಎಂದು ಹೇಳಿದರು.ಇಂದಿನ ಯುವಕರು ನಾಯಕತ್ವ ಮತ್ತು ದೇಶದ ಏಳಿಗೆಗೆ ಯುವ ಕಾಂಗ್ರೆಸ್ ಚುನಾವಣೆ ಬಹಳ ಮಹತ್ವದ್ದಾಗಿದೆ. ಯುವಕರಲ್ಲಿ ಕಾಂಗ್ರೆಸ್ ಬಗ್ಗೆ ತಿಳುವಳಿಕೆ ನೀಡಿ ಹೆಚ್ಚು ಹೆಚ್ಚು ಸದಸ್ಯರನ್ನು ನೋಂದಣಿ ಮಾಡಿಸುವಂತೆ ತಿಳಿಸಿದರು.ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿ ಗೊಳಿಸಲು ಯುವ ನಾಯಕತ್ವ ದೇಶಕ್ಕೆ ಬೇಕಾಗಿದೆ. ಈ ನಿಟ್ಟಿನಲ್ಲಿ ಯುವಕರೆಲ್ಲರೂ ಸಕ್ರಿಯವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ಮನವಿ ಮಾಡಿದರು.ರಾಜ್ಯದಲ್ಲಿ ಯುವ ಕಾಂಗ್ರೆಸ್ ಚುನಾವಣೆ ಬಹಳ ಮಹತ್ವದ್ದಾಗಿದ್ದು, ಯುವಕರೆಲ್ಲರೂ ಸಕ್ರಿಯವಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಶಾಂತಿಯುತವಾಗಿ ಚುನಾವಣೆ ನಡೆಸುವ ಸಂಬಂಧ ಜಿಲ್ಲಾ ಕಾಂಗ್ರೆಸ್ ತಮ್ಮೆಲ್ಲರಿಗೂ ಶುಭ ಹಾರೈಸುತ್ತದೆ ಎಂದು ತಿಳಿಸಿದರು.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ.ಸಂತೋಷ್ ಮಾತನಾಡಿ, ನಾನು ಕೂಡ ಮಧ್ಯಮ ವರ್ಗದವನಾಗಿದ್ದು, ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ಸೇವೆ ಮಾಡಲು ಅವಕಾಶ ಸಿಕ್ಕಿದ್ದು, ಅದೇ ರೀತಿ ಮುಂದಿನ ದಿನಗಳಲ್ಲಿ ಎಲ್ಲರಿಗೂ ಅವಕಾಶ ಸಿಗಲಿದೆ ಎಂದು ಹೇಳಿದರು.ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮಹಮದ್ ಅಕ್ಬರ್, ನಗರ ಕಾಂಗ್ರೆಸ್ ಅಧ್ಯಕ್ಷ ಪಿ.ತನೋಜ್ ಕುಮಾರ್ ನಾಯ್ಡು, ನಗರ ಆಶ್ರಯ ಸಮಿತಿ ಸದಸ್ಯೆ ಯಶೋಧ ಉಪಸ್ಥಿತರಿದ್ದರು.
5 ಕೆಸಿಕೆಎಂ 4ಮೈಸೂರಿನಲ್ಲಿ ನಡೆಯುವ ಜನಾಂದೋಲನಾ ಸಮಾವೇಶದ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಡಾ.ಅಂಶುಮಂತ್ ಮಾತನಾಡಿದರು. ಎಂ.ಸಿ. ಶಿವಾನಂದಸ್ವಾಮಿ, ತನೋಜ್‌ಕುಮಾರ್ ನಾಯ್ಡು ಇದ್ದರು.