ಹಾವೇರಿ: ಜಿಲ್ಲೆಯ ಕಬ್ಬು ಬೆಳೆಗಾರರ ಹೋರಾಟಕ್ಕೆ ಕೊನೆಗೂ ಸ್ಪಂದನೆ ದೊರೆತಿದ್ದು, ಸತತ 14 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಜಿಲ್ಲೆಯ ಮೂರು ಸಕ್ಕರೆ ಕಾರ್ಖಾನೆಗಳ ಮಾಲೀಕರು ಪ್ರತಿ ಟನ್ ಕಬ್ಬಿಗೆ ₹3,225 ದರ ನೀಡಲು ಒಪ್ಪಿಗೆ ನೀಡಿದ್ದಾರೆ ಎಂದು ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ತಿಳಿಸಿದರು.
ರೈತರು ಪ್ರತಿ ಟನ್ ಕಬ್ಬಿಗೆ ₹3,500 ರಿಂದ ₹3,600 ದರ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಆದರೆ, ಕಬ್ಬಿನ ರಿಕವರಿ ಪ್ರಮಾಣದ ಆಧಾರದ ಮೇಲೆ ಅಂತಿಮವಾಗಿ ₹3,225 ದರ ನಿಗದಿಪಡಿಸಲಾಗಿದೆ. ಜಿಲ್ಲೆಯಲ್ಲಿ ಬರಗಾಲದ ಪರಿಸ್ಥಿತಿ ಇದ್ದು, ರೈತರು ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರು ಹೆಚ್ಚಿನ ದರ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಚಿವರು ಹೇಳಿದರು.
ರಿಕವರಿ ಲ್ಯಾಬ್ ಸ್ಥಾಪನೆಗೆ ಪ್ರಯತ್ನ: ಕಬ್ಬಿನ ರಿಕವರಿ ಪ್ರಮಾಣದ ಕುರಿತು ರೈತರು ವ್ಯಕ್ತಪಡಿಸಿರುವ ಅನುಮಾನ ಹಾಗೂ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಲಾಗುವುದು. ಹಾವೇರಿ ಜಿಲ್ಲೆಯಲ್ಲಿ ರಿಕವರಿ ಲ್ಯಾಬ್ ಸ್ಥಾಪಿಸಲು ಕ್ರಮ ಕೈಗೊಳ್ಳುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಸಚಿವ ರುದ್ರಪ್ಪ ಲಮಾಣಿ ತಿಳಿಸಿದರು.