ರಾಣಿಬೆನ್ನೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ತಾಲೂಕಿನ ಚಳಗೇರಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.
ಕಾರಿನಲ್ಲಿದ್ದ ಸೌಂದರ್ಯ (26), ಸಿಂಧು (24) ಹಾಗೂ ಒಂದು ವರ್ಷದ ಮಗು ಕಶ್ವಶ್ರೀ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇವರು ಆ. 18ರಂದು ದಾವಣಗೆರೆಯ ಮನೆಯಲ್ಲಿ ಕಶ್ವಶ್ರೀಯ ಜನ್ಮದಿನ ಆಚರಿಸಿದ್ದಾರೆ. ಆ. 19ರಂದು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ತಮ್ಮ ಮನೆ ದೇವರಿಗೆ ತೆರಳಿ ಪೂಜೆ ಸಲ್ಲಿಸಿ ಸಂಜೆಯವರೆಗೆ ಕಾಲ ಕಳೆದಿದ್ದಾರೆ. ರಾತ್ರಿ ಊಟ ಮುಗಿಸಿ ವಾಪಸ್ ದಾವಣಗೆರೆಗೆ ಬರುತ್ತಿದ್ದ ಸಮಯದಲ್ಲಿ ಚಳಗೇರಿ ಟೋಲ್‌ನಾಕಾ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಮೂವರು ಸ್ಥಳದಲ್ಲಿಯೆ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಅಪಘಾತದ ಮಾಹಿತಿ ತಿಳಿದು ರಾಣಿಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.