
ನಗರದ ಕುವೆಂಪು ಕಲಾಮಂದಿರದಲ್ಲಿ ಸಂತ ಕವಿ ಸರ್ವಜ್ಞ ಜಯಂತಿ ಉದ್ಘಾಟನೆ
ಸಂತ ಕವಿ ಸರ್ವಜ್ಞರ ತ್ರಿಪದಿಗಳನ್ನು ಪಾಲಿಸಿದರೆ ಸಮಾಜದಲ್ಲಿ ಜಾತಿ ವ್ಯವಸ್ಥೆಯೇ ಇರುವುದಿಲ್ಲ ಎಂದು ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್.ಮಹೇಶ್ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತದಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿ ಎಂದರು.16ನೇ ಶತಮಾನದಲ್ಲಿ ಸಮಾಜದಲ್ಲಿದ್ದ ವರ್ಗ ಸಂಘರ್ಷ, ಮೇಲು-ಕೀಳು ಹಾಗೂ ಜಾತಿ ಪದ್ಧತಿ ವಿರುದ್ಧ ಸರ್ವಜ್ಞ ಸಾಹಿತ್ಯದ ಮೂಲಕ ದೊಡ್ಡ ಹೋರಾಟವನ್ನೇ ಮಾಡಿದ್ದರು. ವೇಗದ ಯುಗದಲ್ಲಿ ಜನರು ಸುದೀರ್ಘ ಕಾವ್ಯಗಳನ್ನು ಓದಲು ಸಮಯವಿಲ್ಲ ದಿದ್ದರೂ, ಸರ್ವಜ್ಞರ ಮೂರೇ ಸಾಲಿನ ತ್ರಿಪದಿಗಳು ವಾಟ್ಸಾಪ್ ಮತ್ತು ಸಾಮಾಜಿಕ ಜಾಲತಾಣಕ್ಕೂ ಅತ್ಯಂತ ಪ್ರಸ್ತುತವಾಗಿವೆ.
ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ಮೂಲಕ ಅವರನ್ನು ಎಂಜಿನಿಯರ್, ವಕೀಲರು, ಐಎಎಸ್ ಮತ್ತು ಕೆಎಎಸ್ ಅಧಿಕಾರಿಗಳನ್ನಾಗಿ ಮಾಡುವಂತೆ ಪೋಷಕರಿಗೆ ಕರೆ ನೀಡಿದರು.
ನಗರದ ಕುವೆಂಪು ಕಲಾಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಂತ ಕವಿ ಸರ್ವಜ್ಞ ಜಯಂತಿಯಲ್ಲಿ ಸರ್ವಜ್ಞರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್.ಮಹೇಶ್, ಉಪನ್ಯಾಸಕ ಕೆ.ಸಿ.ನಾಗಪ್ಪ ಶೆಟ್ಟಿ ಉಪನ್ಯಾಸ ನೀಡಿದರು. ಉಪ ತಹಸೀಲ್ದಾರ್ ರಾಮರಾವ್ ದೇಸಾಯಿ, ಜಿಲ್ಲಾ ಕುಂಬಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಎಂ.ಗಂಗಾಧರ್, ತಾಲೂಕು ಕುಂಬಾರರ ಸಂಘದ ಅಧ್ಯಕ್ಷ ಬಿ.ಆರ್.ಜಯಪ್ರಕಾಶ್ಇ ದ್ದರು.