ಕನ್ನಡಪ್ರಭ ವಾರ್ತೆ ಪುತ್ತೂರು
ರಸ್ತೆ ಅಪಘಾತ: ಗಾಯಾಳು ಯುವಕ ಸಾವು
ಪುತ್ತೂರು: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಕಲ್ಲರ್ಪೆ ಎಂಬಲ್ಲಿ ಬುಧವಾರ ರಾತ್ರಿ ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾನೆ.ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಮುಕ್ವೆ ನಿವಾಸಿ ಅಬ್ದುಲ್ಲಾ ಎಂಬವರ ಪುತ್ರ ಸಫ್ವಾನ್(೨೩) ಮೃತಪಟ್ಟ ಯುವಕ. ಸಫ್ವಾನ್ ಪ್ರಯಾಣಿಸುತ್ತಿದ್ದ ಬೈಕ್ ಮತ್ತು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟಿಪ್ಪರ್ ಲಾರಿ ನಡುವೆ ಡಿಕ್ಕಿಯಾಗಿತ್ತು. ಈ ಸಂದರ್ಭದಲ್ಲಿ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಸಫ್ವಾನ್ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅಸುನೀಗಿದರು. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ನಗರ ಅಪರಾಧ ಪತ್ತೆದಳ ಪೊಲೀಸರು ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.
ಮೊಹಮ್ಮದ್ ಅಬ್ದುಲ್ ಫಯಾನ್ ವಿರುದ್ಧ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು, ಕೊಲೆಯತ್ನ, ಕಾರಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಸುಮಾರು 23 ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ. ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆಗಳಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಉಪ್ಪಿನಂಗಡಿ, ಕಡಬ ಪೊಲೀಸ್ ಠಾಣೆಗಳಲ್ಲಿನ ವಿವಿಧ ಕಡೆಗಳಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್, ಪಿಎಸ್‌ಐ ಶರಣಪ್ಪ ಭಂಡಾರಿ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.