ಪೌಷ್ಟಿಕ ಆಹಾರ ಪೂರೈಕೆಯಲ್ಲಿ ಪ್ರಗತಿ ಸಾಧಿಸಲು ದ.ಕ. ಜಿ.ಪಂ ಸಿಇಒ ಸೂಚನೆ

KannadaprabhaNewsNetwork |  
Published : Jun 28, 2025, 12:18 AM IST
ದ.ಕ.ಜಿ.ಪಂ. ಸಿಇಒ ಡಾ.ಆನಂದ್‌ ಸಭೆ ನಡೆಸುತ್ತಿರುವುದು  | Kannada Prabha

ಸಾರಾಂಶ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಗುರುವಾರ ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಆನಂದ್ ಅಧ್ಯಕ್ಷತೆಯಲ್ಲಿ ಇಲ್ಲಿನ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಗುರುವಾರ ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಆನಂದ್ ಅಧ್ಯಕ್ಷತೆಯಲ್ಲಿ ಇಲ್ಲಿನ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆಯಿತು.ಈ ಸಂದರ್ಭ ಮಾತನಾಡಿದ ಅವರು, ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಯೋಜನೆಯ ಪ್ರಗತಿ ಪರಿಶೀಲಿಸಿ, ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿ ತೀರಾ ಕಡಿಮೆ ಇದೆ. ಶೀಘ್ರವಾಗಿ ಪೌಷ್ಟಿಕ ಆಹಾರ ಪೂರೈಸುವ ಕಾರ್ಯಕ್ರಮದಲ್ಲಿ ಪ್ರಗತಿ ಸಾಧಿಸುವ ಕಡೆಗೆ ಹೆಚ್ಚು ಗಮನ ಕೊಡಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಒಟ್ಟು 20 ತೀವ್ರ ಅಪೌಷ್ಟಿಕತೆ ಹೊಂದಿರುವ ಮಕ್ಕಳಿದ್ದು, ಅವರ ಉತ್ತಮ ಆರೈಕೆಗಾಗಿ ಪೌಷ್ಟಿಕಾಂಶ ಪುನರ್ವಸತಿ ಕೇಂದ್ರ (ಎನ್.ಆರ್.ಸಿ) ಕ್ಕೆ ದಾಖಲಿಸಬೇಕು. ಮಕ್ಕಳಿಗೆ ಸೂಕ್ತವಾದ ಪೌಷ್ಟಿಕ ಆಹಾರ, ಆರೈಕೆ ಜೊತೆಗೆ ಕೇಂದ್ರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ದಕ್ಷಿಣ ಕನ್ನಡ ಜಿಲ್ಲೆಯನ್ನು ಅಪೌಷ್ಟಿಕತೆ ಮುಕ್ತ ಜಿಲ್ಲೆಯನ್ನಾಗಿಬೇಕು ಎಂದು ಅವರು ಹೇಳಿದರು.3 ರಿಂದ 5 ವರ್ಷದ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಬೇಕು. ಶಾಲೆಗೆ ಹೋಗದಿರುವ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣ ದೊರಕಿಸುವ ಬಗ್ಗೆ ಮಹಿಳಾ ಸಭೆ, ಗ್ರಾಮ ಸಭೆಗಳಲ್ಲಿ ಚರ್ಚಿಸಬೇಕು ಎಂದು ಅವರು ಹೇಳಿದರು.

ಅಂಗನವಾಡಿ ಕಟ್ಟಡಗಳ ನಿರ್ವಹಣೆ ಯೋಜನೆ ಅಡಿಯಲ್ಲಿ ಅಂಗನವಾಡಿ ಕೇಂದ್ರಗಳ ದುರಸ್ತಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅವರು ಕರ್ನಾಟಕ ರಾಜ್ಯ ಹ್ಯಾಬಿಟೇಟ್ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದರು. ಅಂಗನವಾಡಿ ಕಟ್ಟಡ ಕಾಮಗಾರಿಯನ್ನು ಆಗಾಗ ಪರಿಶೀಲಿಸುತ್ತಿರಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಒಟ್ಟು 2024 ರ ಜುಲೈನಿಂದ ಡಿಸೆಂಬರ್‌ ವರೆಗೆ 2 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು, ಅವರ ವಿರುದ್ಧ ಕೇಸು ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಕಂಡುಬರುವ ಬಾಲ್ಯ ವಿವಾಹ, ಬಾಲ ಗರ್ಭಿಣಿಯರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ವಹಿಸಲು ಅವರು ಸೂಚಿಸಿದರು.

ಜಿಲ್ಲೆಯಲ್ಲಿ ಒಟ್ಟು 13 ವರದಕ್ಷಿಣೆ ಪ್ರಕರಣಗಳು ದಾಖಲಾಗಿದ್ದು ಒಟ್ಟು 11 ಪ್ರಕರಣಗಳು ತನಿಖೆ ಹಂತದಲ್ಲಿದೆ. ತಾಯಂದಿರ ಸಭೆ ಸ್ತ್ರೀ ಶಕ್ತಿ ಸಭೆ ಹಾಗೂ ಮಕ್ಕಳ ರಕ್ಷಣಾ ಸಮಿತಿ ಸಭೆಗಳಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ದಕ್ಷಿಣ ಕನ್ನಡ ಜಿಲ್ಲಾ ಬಾಲಭವನ ಕಟ್ಟಡದ ದುರಸ್ತಿ ಕಾರ್ಯವನ್ನು ಕೈಗೊಳ್ಳುವಂತೆ ಅವರ ಸೂಚಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನಿಸಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಉಸ್ಮಾನ್, ಪ್ರಜ್ಞಾ ಕೌನ್ಸಿಲಿಂಗ್ ಸೆಂಟರ್‌ನ ಹಿಲ್ಡಾ ರಾಯಪ್ಪನ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಂಧ್ಯಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ ಉಳೆಪಾಡಿ, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇದ್ದರು.

ಬಾಲ್ಯ ವಿವಾಹ ಕಂಡುಬಂದರೆ 1098ಕ್ಕೆ ಕರೆ ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಕಾವಲು ಸಮಿತಿ ಸಭೆ ನಡೆಸಿ ಬಾಲ್ಯ ವಿವಾಹ ಮತ್ತು ಹದಿಹರೆಯದ ಗರ್ಭಧಾರಣೆ ಬಗ್ಗೆ ಚರ್ಚಿಸಿ ಅವುಗಳನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು. ಬಾಲ್ಯ ವಿವಾಹ ಕಂಡು ಬಂದರೆ 1098 ಸಹಾಯವಾಣಿಗೆ ದೂರು ನೀಡಬೇಕು. ಬಾಲ್ಯ ವಿವಾಹ, ಹದಿಹರೆಯದ ಗರ್ಭಧಾರಣೆ ತಡೆಯಲು ಅರಿವು ಕಾರ್ಯಗಾರವನ್ನು ಮಾಡಬೇಕು ಎಂದು ಜಿ.ಪಂ. ಸಿಇಒ ಡಾ.ಆನಂದ್‌ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ-ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯ