ಶಾಲಾ-ಕಾಲೇಜು ಸುತ್ತ ತಂಬಾಕು ವಹಿವಾಟು ಅಕ್ಷಮ್ಯ: ಡೀಸಿ

KannadaprabhaNewsNetwork |  
Published : Jan 15, 2026, 01:30 AM IST
ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನೆ, ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. | Kannada Prabha

ಸಾರಾಂಶ

2025ರ ಜನವರಿ ಮಾಹೆಯಿಂದ ಡಿಸೆಂಬರ್ ಅಂತ್ಯಕ್ಕೆ 9,967 ನಾಯಿ ಕಡಿತದ ವರದಿ ಆಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಂಖ್ಯೆ ಹೆಚ್ಚಾಗಿದೆ. ನಾಯಿ ಹಾವಳಿ ನಿಯಂತ್ರಣಕ್ಕೆ ಸಂತಾನಹರಣ ಚಿಕಿತ್ಸೆ ಮಾಡಿಸಬೇಕು, ಸಂಬಂಧಪಟ್ಟ ಅಧಿಕಾರಿಗಳು ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಿ, ನಾಯಿಗಳನ್ನು ಅಲ್ಲಿಗೆ ಸ್ಥಳಾಂತರಿಸಲು ಸೂಕ್ತ ಜಾಗ ಗುರುತಿಸಿ , ಜೊತೆಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಕಾರ್ಯಾರಂಭ ಮಾಡುವಂತೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ/ ದೇವನಹಳ್ಳಿ

ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳ ಸುತ್ತ 100 ಗಜ ಅಂತರದಲ್ಲಿ ತಂಬಾಕು ಮಾರಾಟ ನಿಷೇಧ ಮಾಡಲಾಗಿದ್ದು, ತಂಬಾಕು ಮಾರಾಟ ಮಾಡುತ್ತಿದ್ದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಹೇಳಿದರು.

ಬೆಂ.ಗ್ರಾ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆ ಮತ್ತು ಜಿಲ್ಲಾ ಕಣ್ಗಾವಲು ಸಮಿತಿ ಮತ್ತು ಜಿಲ್ಲಾ ಕಾರ್ಯಕಾರಿ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿರುವ ಎಲ್ಲಾ ಶಾಲಾ ಕಾಲೇಜು, ವಿಶ್ವವಿದ್ಯಾಲಯಗಳನ್ನು ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಗಳೆಂದು ಘೋಷಿಸಲು ಹಾಗೂ ಕೋಟ್ಪಾವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು. ಶೈಕ್ಷಣಿಕ ಸಂಸ್ಥೆಗಳ ಸುತ್ತಲೂ ಯಾರಾದರೂ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಸಾರ್ವಜನಿಕರು ನಮಗೆ ದೂರು ನೀಡಬಹುದು ಎಂದರು.

ಶೈಕ್ಷಣಿಕ ಸಂಸ್ಥೆಗಳ ಹತ್ತಿರ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದಾರೆ ಎಂದು ಸಂಘಟನೆಗಳು ದೂರು ನೀಡಿದ್ದಾರೆ. ಅಧಿಕಾರಿಗಳು ಅನಿರೀಕ್ಷಿತ ದಾಳಿ ಕೈಗೊಂಡು ಕೂಡಲೇ ಎಲ್ಲಾ ಶಾಲಾ ಕಾಲೇಜುಗಳ ಬಳಿ ಪರಿಶೀಲನೆ ನಡೆಸಿ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.

18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮಾರಾಟ ಮಾಡುವಂತಿಲ್ಲ. ಬೀಡಿ, ಸಿಗರೇಟು ಗುಟ್ಕಾವನ್ನು ಮಕ್ಕಳಿಗೆ ಮಾರಾಟ ಮಾಡಬಾರದೆಂಬ ನಿಯಮಗಳಿದ್ದರೂ ವ್ಯಾಪಾರಿಗಳು ಪಾಲಿಸುತ್ತಿಲ್ಲ. ನಿಷೇಧಿತ ಸ್ಥಳಗಳಲ್ಲಿ ತಂಬಾಕು ಮಾರಾಟ ಮತ್ತು ಸೇವನೆ ಹಾಗೂ ತಂಬಾಕು ಮಾರಾಟ ಪರವಾನಗಿ ಇಲ್ಲದೇ ಮಾರಾಟ ಮಾಡಿದವರಿಗೆ ದಂಡ ವಿಧಿಸಲಾಗಿತ್ತದೆ ಜೊತೆಗೆ ಶಿಕ್ಷೆಗೆ ಗುರಿಯಾಗಬಹುದು. ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ, ಶೈಕ್ಷಣಿಕ ಸಂಸ್ಥೆಗಳಲ್ಲಿ ತಂಬಾಕು ಉತ್ಪನ್ನಗಳ ಬಗ್ಗೆ ಅರಿವು ಮೂಡಿಸಿ ಎಂದರು.

156 ದಾಳಿಗಳು, ₹69,241 ದಂಡ:

ಜಿಲ್ಲಾ ತಂಬಾಕು ನಿಯಂತ್ರಣ ಘಟಕದಿಂದ ಕೋಟ್ಪಾ-2003 ಕಾಯ್ದೆ ಅನ್ವಯ ಏಪ್ರಿಲ್ 2025 ರಿಂದ ಅಕ್ಟೋಬರ್ ವರೆಗೆ ಜಿಲ್ಲೆಯಾದ್ಯಂತ ವಿವಿಧ ಅಂಗಡಿ ಮುಂಗಟ್ಟುಗಳ ಮೇಲೆ 156 ದಾಳಿ ನಡೆಸಿದ್ದು, ನಿಯಮಗಳ ಉಲ್ಲಂಘನೆ ಮಾಡಿದವರ ವಿರುದ್ಧ ಸೆಕ್ಷನ್ 4 ರ ಅಡಿಯಲ್ಲಿ 538 ಪ್ರಕರಣ ದಾಖಲಿಸಿ 69,241 ರುಪಾಯಿ ದಂಡವನ್ನು ಸಂಗ್ರಹಿಸಲಾಗಿದೆ ಎಂದು ತಂಬಾಕು ನಿಯಂತ್ರಣಾಧಿಕಾರಿಗಳು ಮಾಹಿತಿ ನೀಡಿದರು.

ವರ್ಷದಲ್ಲಿ 9,967 ನಾಯಿ ಕಡಿತ ವರದಿ:

2025ರ ಜನವರಿ ಮಾಹೆಯಿಂದ ಡಿಸೆಂಬರ್ ಅಂತ್ಯಕ್ಕೆ 9,967 ನಾಯಿ ಕಡಿತದ ವರದಿ ಆಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಂಖ್ಯೆ ಹೆಚ್ಚಾಗಿದೆ. ನಾಯಿ ಹಾವಳಿ ನಿಯಂತ್ರಣಕ್ಕೆ ಸಂತಾನಹರಣ ಚಿಕಿತ್ಸೆ ಮಾಡಿಸಬೇಕು, ಸಂಬಂಧಪಟ್ಟ ಅಧಿಕಾರಿಗಳು ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಿ, ನಾಯಿಗಳನ್ನು ಅಲ್ಲಿಗೆ ಸ್ಥಳಾಂತರಿಸಲು ಸೂಕ್ತ ಜಾಗ ಗುರುತಿಸಿ , ಜೊತೆಗೆ ಸಂತಾನಹರಣ ಶಸ್ತ್ರಚಿಕಿತ್ಸೆ ಕಾರ್ಯಾರಂಭ ಮಾಡುವಂತೆ ಸೂಚಿಸಿದರು.

ಸಾರ್ವಜನಿಕರು ಕೂಡ ನಾಯಿ, ಹಾವು ಕಡಿತದ ಬಗ್ಗೆ ನಿರ್ಲಕ್ಷ್ಯ ತೋರದೇ ತಕ್ಷಣವೇ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಲಕ್ಕಾ ಕೃಷ್ಣಾ ರೆಡ್ಡಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಹೇಮಾವತಿ ಎ.ವಿ, ತಂಬಾಕು ನಿಯಂತ್ರಣಾಧಿಕಾರಿ ಡಾ.ವಿದ್ಯಾರಾಣಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಲ್ಲಿ ಲಾಲ್‌ಬಾಗ್‌ ಮಾದರಿಯಲ್ಲಿ ಮತ್ತೆರಡು ಪಾರ್ಕ್‌ ನಿರ್ಮಾಣ: ಡಿ.ಕೆ.ಶಿವಕುಮಾರ್
ಸಂಕ್ರಾಂತಿ: ಇಂದು ಗವಿಗಂಗಾಧರನಿಗೆ ಸೂರ್ಯರಶ್ಮಿ ಸ್ಪರ್ಶ