ಇಂದು ರೈತರ ಜಮೀನಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಿಂದ ಭತ್ತದ ನಾಟಿ

KannadaprabhaNewsNetwork | Published : Mar 4, 2025 12:30 AM

ಸಾರಾಂಶ

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಮೊದಲ ಬಾರಿಗೆ ಪ್ರತ್ಯೇಕವಾಗಿ ಕೃಷಿ ಬಜೆಟ್ ಮಂಡಿಸಿದ್ದರು. ಆದರೆ, ಈಗ ಕಾಂಗ್ರೆಸ್ ಸರ್ಕಾರ ಬಿಜೆಪಿಯ ರೈತ ಪರ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕುವ ಜೊತೆಗೆ ಆರ್ಥಿಕ ನಷ್ಟಕ್ಕೂ ಒಳಗಾಗುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ರೈತರಿಗೆ ಆತ್ಮಸ್ಥೈರ್ಯ ತುಂಬಲು, ಕೃಷಿಯಿಂದ ದೂರ ಸರಿಯುತ್ತಿರುವ ರೈತರನ್ನು ಮತ್ತೆ ಕೃಷಿಯತ್ತ ಮರಳುವಂತೆ ಪ್ರೇರೇಪಿಸಲು ತಾಲೂಕಿನ ಕೊತ್ತತ್ತಿ ಗ್ರಾಮದ ರೈತರ ಜಮೀನಿನಲ್ಲಿ ಮಾ.4ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಭತ್ತ ನಾಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಯುವ ಮುಖಂಡ ಎಸ್. ಸಚ್ಚಿದಾನಂದ ಇಂಡುವಾಳು ತಿಳಿಸಿದರು.

ಗ್ರಾಮದ ಹೊರವಲಯದ ರೈತರಾದ ಸುಖೇಂದ್ರ ಮತ್ತು ಶಿವಬಸಪ್ಪ ಅವರ ಜಮೀನಿನಲ್ಲಿ ಭತ್ತದ ನಾಟಿ ಕುರಿತು ಸಿದ್ಧತಾ ಕಾರ್ಯಗಳನ್ನು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಪರಿಶೀಲನೆ ನಡೆಸಿದರು.

ಈ ಹಿಂದೆ ಬಿಜೆಪಿ ಸರ್ಕಾರ ರೈತರಿಗಾಗಿ ಹತ್ತಾರು ಕಾರ್ಯಕ್ರಮಗಳನ್ನು ರೂಪಿಸಿತ್ತು. ಕೇಂದ್ರ ಸರ್ಕಾರದ ಮಾದರಿಯಲ್ಲೇ ರೈತರಿಗೆ ಕೃಷಿ ಸಮ್ಮಾನ್ ಯೋಜನೆಯಡಿ 4000 ರು. ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ರೈತರ ಮಕ್ಕಳಿಗಾಗಿ ವಿದ್ಯಾಸಿರಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು ಎಂದರು.

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಮೊದಲ ಬಾರಿಗೆ ಪ್ರತ್ಯೇಕವಾಗಿ ಕೃಷಿ ಬಜೆಟ್ ಮಂಡಿಸಿದ್ದರು. ಆದರೆ, ಈಗ ಕಾಂಗ್ರೆಸ್ ಸರ್ಕಾರ ಬಿಜೆಪಿಯ ರೈತ ಪರ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕುವ ಜೊತೆಗೆ ಆರ್ಥಿಕ ನಷ್ಟಕ್ಕೂ ಒಳಗಾಗುತ್ತಿದ್ದಾರೆ ಎಂದು ವಿಷಾದಿಸಿದರು.

ಈಗಾಗಲೇ ಹಲವು ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ವರನ್ನು ಮತ್ತೆ ಕೃಷಿಗೆ ಮರಳಿ ಕರೆ ತರುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಜಿಲ್ಲೆಯಲ್ಲಿ ಭತ್ತ ನಾಟಿ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿದ್ದಾರೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷರ ಜೊತೆಗೆ ಪಕ್ಷದ ಹಲವಾರು ನಾಯಕರು, ಮುಖಂಡರು ಭತ್ತ ನಾಟಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 6 -7 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಕೊತ್ತತ್ತಿ ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ವಿಶೇಷವಾಗಿ ಊಟದ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ. ಎಲ್ಲರಿಗೂ ರಾಗಿ ಮುದ್ದೆ -ಅವರೆಕಾಳು ಕೂಟು, ಅನ್ನ -ಸಾಂಬಾರ್ ಊಟದ ವ್ಯವಸ್ಥೆ ಇದೆ ಎಂದು ವಿವರಿಸಿದರು.

ಒಂದೂವರೆಯಿಂದ ಎರಡು ಎಕರೆ ಪ್ರದೇಶದಲ್ಲಿ ಅಂದು ಭತ್ತ ನಾಟಿ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಸ್ಥಳೀಯ ರೈತರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಪಕ್ಷದ ನಾಯಕರು ಕೃಷಿ ಸಂಬಂಧ ಸಮಾಲೋಚನೆ ನಡೆಸಲಿದ್ದಾರೆ. ಮಾರ್ಚ್ 4ರಂದು ನಾಟಿಯಾದ ನಂತರ ಭತ್ತವು ಕೊಯ್ಲಿಗೆ ಬಂದಾಗ ಪುನಃ ನಮ್ಮ ನಾಯಕರು ಕೊಯ್ಲು ಪ್ರಕ್ರಿಯೆಯಲ್ಲೂ ಭಾಗವಹಿಸುವರು ಎಂದು ವಿವರಿಸಿದರು.

ಈ ವೇಳೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಡಾ.ಸಿದ್ದರಾಮಯ್ಯ, ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ಎನ್.ಎಸ್. ಇಂದ್ರೇಶ್, ಶ್ರೀರಂಗಪಟ್ಟಣ ಮಂಡಲ ಅಧ್ಯಕ್ಷ ಪೀಹಳ್ಳಿ ರಮೇಶ್, ಶ್ರೀರಂಗಪಟ್ಟಣ ತಾಪಂ ಮಾಜಿ ಅಧ್ಯಕ್ಷ ಶ್ರೀಧರ್, ಬೇವಿನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಮಹೇಶ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

Share this article