ಇಂದು ಸಾಂಕೇತಿಕ ಕರ್ನಾಟಕ ಬಂದ್‌

KannadaprabhaNewsNetwork |  
Published : Aug 13, 2026, 02:00 AM IST
ಕಾವೇರಿ  | Kannada Prabha

ಸಾರಾಂಶ

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶದ ವಿರುದ್ಧ ಇಂದು ಸಾಂಕೇತಿಕ ಕರ್ನಾಟಕ ಬಂದ್‌

ಕನ್ನಡಪ್ರಭ ವಾರ್ತೆ ಬೆಂಗಳೂರು:

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶದ ವಿರುದ್ಧ ಕನ್ನಡ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್‌ಗೆ ಸಂಘಟನೆಗಳಲ್ಲಿ ತೀವ್ರ ಭಿನ್ನಾಭಿಪ್ರಾಯ ಮತ್ತು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಾಗಿ ಗುರುವಾರದ ಬಂದ್‌ ಪರಿಣಾಮ ಬೀರುವ ಸಾಧ್ಯತೆ ಇಲ್ಲ.

ನೀರು ಬಿಡುಗಡೆ ಮಾಡುವಂತೆ ನೀಡಿರುವ ಆದೇಶಗಳ ಬಗ್ಗೆ ಕನ್ನಡಪರ ಹೋರಾಟಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಂದ್‌ ನಡೆಸಬೇಕೇ, ಬೇಡವೇ ಎನ್ನುವ ಗೊಂದಲ ಸಂಘಟನೆಗಳಲ್ಲಿ ಕಾಣಿಸಿಕೊಂಡಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ಇದೆ. ಮುಂದಿನ ದಿನಗಳಲ್ಲಿ ರಾಜ್ಯದ ರೈತರಿಗೆ ನೀರಿನ ಅಭಾವ ಎದುರಾಗಲಿದೆ. ಇಂತಹ ಸಂಕಷ್ಟದ ಸಮಯದಲ್ಲಿ ತಮಿಳುನಾಡಿಗೆ ನೀರು ಹರಿಸುವುದು ರಾಜ್ಯದ ರೈತರಿಗೆ ಎಸಗುವ ಅನ್ಯಾಯವಾಗುತ್ತದೆ. ಆದ್ದರಿಂದ ಗುರುವಾರ ಅಖಂಡ ಕರ್ನಾಟಕ ಬಂದ್‌ ನಡೆಸುವುದು ಖಚಿತ ಎಂದು ವಾಟಾಳ್‌ ನಾಗರಾಜ್‌ ಪ್ರತಿಪಾದಿಸಿದ್ದಾರೆ. ಈ ಹೋರಾಟಕ್ಕೆ ಕನ್ನಡ ಸೇನೆ ಮತ್ತು ಕನ್ನಡ ಜಾಗೃತಿ ವೇದಿಕೆ ಸೇರಿದಂತೆ ಕೆಲ ಸಂಘಟನೆಗಳು ಬೆಂಬಲಿಸಿವೆ.

ವಿವಿಧ ಸಂಘಟನೆಗಳಿಂದ ನೈತಿಕ ಬೆಂಬಲ:

ಇದೇ ವೇಳೆ ಕರ್ನಾಟಕ ಬಂದ್‌ಗೆ ಬೆಂಬಲ ನೀಡುವುದಿಲ್ಲ. ಈಗಿನ ಪರಿಸ್ಥಿತಿಯಲ್ಲಿ ಬಂದ್‌ ಅನಾವಶ್ಯಕ. ಆದ್ದರಿಂದ ವಾಟಾಳ್‌ ಅವರು ನಡೆಸಲು ಉದ್ದೇಶಿಸಿರುವ ಬಂದ್‌ಗೆ ನೈತಿಕ ಬೆಂಬಲ ಮಾತ್ರ ನೀಡುತ್ತೇವೆ. ಬಂದ್‌ನಲ್ಲಿ ಭಾಗವಹಿಸುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್‌ ಶೆಟ್ಟಿ ಬಣ, ಶಿವರಾಮೇಗೌಡ ಬಣ ಮತ್ತು ಡಾ.ರಾಜಕುಮಾರ್‌ ಅಭಿಮಾನಿಗಳ ಸಂಘ, ಆದರ್ಶ ಆಟೋ, ಟ್ಯಾಕ್ಸಿ ಡ್ರೈವರ್ಸ್‌ ಅಸೋಸಿಯೇಷನ್‌ ಸೇರಿದಂತೆ ಇತರ ಸಂಘಟನೆಗಳ ಮುಖಂಡರು ‘ಕನ್ನಡಪ್ರಭ’ಕ್ಕೆ ಸ್ಪಷ್ಟಪಡಿಸಿದ್ದಾರೆ.

ಸೇವೆ ಅಬಾಧಿತ:

ಬಂದ್‌ನಿಂದ ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮೇಲೆ ಯಾವುದೇ ವ್ಯತ್ಯಯವಾಗುವುದಿಲ್ಲ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ಸು, ಮೆಟ್ರೋ ರೈಲುಗಳು ಎಂದಿನಂತೆ ಸಂಚರಿಸಲಿವೆ. ಆಸ್ಪತ್ರೆಗಳು, ಮೆಡಿಕಲ್ ಶಾಪ್‌ಗಳು, ಹೋಟೆಲ್‌ಗಳು, ಬಟ್ಟೆ ಅಂಗಡಿಗಳು ಮತ್ತು ದಿನಬಳಕೆಯ ವಸ್ತುಗಳ ಅಂಗಡಿಗಳು ಕಾರ್ಯನಿರ್ವಹಿಸಲಿವೆ ಎಂದು ಹೋಟೆಲ್ ಮಾಲೀಕರ ಸಂಘ ಹಾಗೂ ವ್ಯಾಪಾರಿ ಸಂಘಗಳು ತಿಳಿಸಿವೆ.

ಶಾಲೆ-ಕಾಲೇಜುಗಳು, ಸರ್ಕಾರಿ ಮತ್ತು ಸ್ಥಳೀಯ ಆಡಳಿತ ಕಚೇರಿಗಳು, ಕೈಗಾರಿಕಾ ವಲಯಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಹೋಟೆಲ್ ಮಾಲೀಕರು ಮತ್ತು ಶಾಲಾ ಸಂಘಟನೆಗಳು (ರುಪ್ಸಾ ಮತ್ತು ಕ್ಯಾಮ್ಸ್) ನೈತಿಕ ಬೆಂಬಲ ಸೂಚಿಸಿವೆ. ಹೀಗಾಗಿ ಬಂದ್‌ ಪರಿಣಾಮ ಬೀರುವ ಸಾಧ್ಯತೆಗಳಿಲ್ಲ. ಬೆಂಬಲ ಇಲ್ಲ- ಪ್ರವೀಣ್‌ ಶೆಟ್ಟಿ:

‘ಕನ್ನಡಪ್ರಭ’ದೊಂದಿಗೆ ಮಾತನಾಡಿದ ಪ್ರವೀಣ್‌ ಕುಮಾರ್‌ ಶೆಟ್ಟಿ, ಸಂಘಟನೆಯ ಕಾರ್ಯಕರ್ತರೊಂದಿಗೆ ಬುಧವಾರ ಸಭೆ ನಡೆಸಿದ್ದೇನೆ. ಸದ್ಯ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ನೀರಿನ ಕೊರತೆ ಏರ್ಪಡುವ ಸಾಧ್ಯತೆ ಕಡಿಮೆ. ಹೀಗಾಗಿ ಬಂದ್‌ಗೆ ನಮ್ಮ ಬೆಂಬಲ ಇಲ್ಲ. ಆದರೆ ಮಹದಾಯಿ, ಕಳಸಾ-ಬಂಡೂರಿ ಯೋಜನೆ ಜಾರಿಗೆ ಹೋರಾಟ ಮುಂದುವರಿಯಲಿದೆ ಎಂದರು.

ನಾವು ಹಿಂದೆ ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದ ಸಂದರ್ಭದಲ್ಲಿ ರಾಜ್ಯದ ಜಲಾಶಯಗಳು ತುಂಬಿರಲಿಲ್ಲ. ಮಳೆ ಕೊರತೆಯಾಗಿತ್ತು. ಸದ್ಯ ಅಂಥ ಪರಿಸ್ಥಿತಿ ಇಲ್ಲ. ಬಂದ್‌ ಅಗತ್ಯವೂ ಇಲ್ಲ. ಆದ್ದರಿಂದ ಬಂದ್‌ಗೆ ಬೆಂಬಲ ನೀಡದಿರಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

ಮಂಡ್ಯದಲ್ಲಿ ನಡೆಯುತ್ತಿದ್ದ ರೈತ ಹಿತರಕ್ಷಣಾ ವೇದಿಕೆ ಪ್ರತಿಭಟನೆಯಲ್ಲಿ ಬುಧವಾರ ಪಾಲ್ಗೊಂಡಿದ್ದ ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಸಾ.ರಾ.ಗೋವಿಂದು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಶಿವರಾಮೇಗೌಡ ಅವರು ಕೂಡ ನೈತಿಕ ಬೆಂಬಲ ಮಾತ್ರ ನೀಡುವುದಾಗಿ ತಿಳಿಸಿದ್ದಾರೆ.

ವಾಟಾಳ್ ನಾಗರಾಜ್ ಅವರ ಹೋರಾಟದ ಉದ್ದೇಶವನ್ನು ನಾವು ಗೌರವಿಸುತ್ತೇವೆ. ಆದರೆ, ಈಗಿನ ಪರಿಸ್ಥಿತಿಯಲ್ಲಿ ಬಂದ್ ಮಾಡುವುದು ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಬಹುದು. ಆದ್ದರಿಂದ ಎಲ್ಲ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ದಿನಗಳಲ್ಲಿ ಒಗ್ಗಟ್ಟಿನಿಂದ ಹೋರಾಟ ನಡೆಸೋಣ ಎಂದಿದ್ದು, ಈ ಬಂದ್‌ನಿಂದ ಸಂಪೂರ್ಣ ಅಂತರ ಕಾಯ್ದುಕೊಂಡಿದ್ದಾರೆ.ತ.ನಾಡಿಗೆ ನೀರು ಬಿಡುಗಡೆ ಆದೇಶ ಖಂಡಿಸಿ ರೈತರಿಂದ ಪ್ರತಿಭಟನೆ:

ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯುಸೆಕ್‌ನಂತೆ 15 ದಿನಗಳವರೆಗೆ ನೀರು ಹರಿಸುವಂತೆ ಸಿಡಬ್ಲ್ಯೂಆರ್‌ಸಿ ನೀಡಿರುವ ಆದೇಶ ಖಂಡಿಸಿ ಹಾಗೂ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡದಂತೆ ಒತ್ತಾಯಿಸಿ ರೈತರು ಹಾಗೂ ವಿವಿಧ ಸಂಘಟನೆಗಳು ಕಾವೇರಿ ಕೊಳ್ಳದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದರು.ಮಂಡ್ಯದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಧರಣಿ ಸತ್ಯಾಗ್ರಹ ನಡೆಸಿದ ರೈತ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಒತ್ತಾಯಿಸಿದರು. ರೈತ ಸಂಘ, ಕನ್ನಡ ಸಂಘಟನೆಗಳ ಕಾರ್‍ಯಕರ್ತರು ನಗರದ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಅರೆಬೆತ್ತಲೆ ಪ್ರತಿಭಟನೆ, ರಸ್ತೆ ತಡೆ ನಡೆಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚಾರಕ್ಕೆ ತಡೆಯೊಡ್ಡಿ, ಕಾವೇರಿ ನೀರು ನಿರ್ವಹಣಾ ಸಮಿತಿ ಮತ್ತು ಪ್ರಾಧಿಕಾರ ಹಾಗೂ ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ಬಿಜೆಪಿ ಕಾರ್ಯಕರ್ತರು ನಗರದ ಕಾವೇರಿ ಭವನದ ಬಳಿ ಇರುವ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಅಪ್ಪಿಕೋ ಚಳವಳಿ ನಡೆಸಿದರು. ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡದಂತೆ ರಾಜ್ಯದ ಮುಖ್ಯಮಂತ್ರಿಗೆ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿ ಕಾಳಿಕಾಂಬ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ತಂದ ನಿಂಬೆ ಹಣ್ಣಿನಿಂದ ಡಿಕೆಶಿ ಭಾವಚಿತ್ರಕ್ಕೆ ಇಳಿ ತೆಗೆದು, ಆದೇಶ ಪಾಲನೆ ಮಾಡದಂತೆ ಒತ್ತಾಯಿಸಿದರು.

ಮೈಸೂರಿನ ಅಶೋಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಕಾವೇರಿ ಕ್ರಿಯಾ ಸಮಿತಿಯ ಪದಾಧಿಕಾರಿಗಳು, ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ತಮಿಳುನಾಡು ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನ ಕಾಡಾ ಕಚೇರಿ ಎದುರು ರೈತ ಸಂಘದ ಪದಾಧಿಕಾರಿಗಳಿಂದ ಪ್ರತಿಭಟನೆ ನಡೆಯಿತು. ಇದೇ ವೇಳೆ, ಚಾಮರಾಜನಗರ, ರಾಮನಗರ ಸೇರಿ ಇತರೆಡೆಯೂ ಪ್ರತಿಭಟನೆಗಳು ನಡೆದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳೆವಿಮೆ ಪರಿಹಾರಕ್ಕಾಗಿ ಗುತ್ತಲದಲ್ಲಿ ಧರಣಿ ಕುಳಿತ ರೈತರು
ತುರ್ತಾಗಿ ಕಲಾಭವನ ತೆರೆಯುವಂತೆ ಕ್ರಮ: ಬೆಲ್ಲದ