ಇಂದು ತಲಕಾವೇರಿಯಲ್ಲಿ ತೀರ್ಥೋದ್ಭವ

KannadaprabhaNewsNetwork |  
Published : Oct 17, 2025, 01:03 AM IST
ಚಿತ್ರ :  16ಎಂಡಿಕೆ1 : ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಸಿದ್ಧತೆ ಮಾಡಲಾಗಿರುವುದು.  | Kannada Prabha

ಸಾರಾಂಶ

ನಾಡಿನ ಜೀವನದಿ, ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದೆ. ಪವಿತ್ರ ತೀರ್ಥೋದ್ಭವಕ್ಕೆ ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ನಾಡಿನ ಜೀವನದಿ, ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದೆ. ಪವಿತ್ರ ತೀರ್ಥೋದ್ಭವಕ್ಕೆ ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ತಲಕಾವೇರಿ ಪವಿತ್ರ ತೀರ್ಥೋದ್ಭವ ವೀಕ್ಷಣೆಗೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕೆ ಅಗತ್ಯ ಬ್ಯಾರಿಕೇಡ್‌ಗಳ ನಿರ್ಮಾಣ ಮಾಡಲಾಗಿದೆ. ಭಕ್ತರು ತೀರ್ಥ ಪಡೆಯಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.ತೀರ್ಥೋದ್ಭವ ಸಂಬಂಧ ಮಡಿಕೇರಿ, ಭಾಗಮಂಡಲ, ತಲಕಾವೇರಿಗೆ ಹೋಗುವ ರಸ್ತೆ ಬದಿಯಲ್ಲಿ ಕಾಡನ್ನು ಕಡಿದು ಸುಗಮ ಸಾರಿಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.ಕನ್ನಡ ಮತ್ತು ಸಂಸ್ಕೃತಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ತಾಯಿ ಕಾವೇರಿ ಮಾತೆಯ ಭಕ್ತಿಗೀತೆಗಳ ಗೀತಾ ಗಾಯನ ಕಾರ್ಯಕ್ರಮ ನಡೆಯಲಿದ್ದು, ಈ ಸಂಬಂಧ ವೇದಿಕೆ ನಿರ್ಮಾಣ ಮಾಡಲಾಗಿದೆ. ಕೊಡಗು ಏಕೀಕರಣ ರಂಗದಿಂದ ಭಕ್ತರ ಪ್ರಸಾದ ವಿನಿಯೋಗಕ್ಕೆ ಅಗತ್ಯ ಸಿದ್ಧತೆಗಳು ನಡೆದಿವೆ.ಪರಿಸರ ಶುಚಿತ್ವ ಹಾಗೂ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕಂದಾಯ, ಪೊಲೀಸ್, ಪಂಚಾಯತ್ ರಾಜ್, ಸೆಸ್ಕ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹೀಗೆ ವಿವಿಧ ಇಲಾಖೆಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಆಗಬೇಕಿರುವ ಕೆಲಸಗಳನ್ನು ಕೈಗೊಂಡಿದ್ದಾರೆ. ಗಣ್ಯರು, ಅತಿಥಿಗಳು, ಪತ್ರಕರ್ತರು ತೆರಳಲು ಪ್ರತ್ಯೇಕ ಬ್ಯಾರಿಕೇಡ್ ಅಳವಡಿಸಲಾಗಿದೆ. ತಲಕಾವೇರಿಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಎಲ್‌ಇಡಿ ವಾಲ್‌ಗಳ ಅಳವಡಿಕೆ, ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ತಾತ್ಕಾಲಿಕ ಶೌಚಾಲಯ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.ಎಸ್‌ಪಿ ಹಾಗೂ ಎಎಸ್‌ಪಿ ಸೇರಿದಂತೆ ಮೂವರು ಡಿವೈಎಸ್‌ಪಿ, 8 ಪೊಲೀಸ್ ಇನ್‌ಸ್ಪೆಕ್ಟರ್‌, 21 ಪಿಎಸ್‌ಐ, 41 ಎಎಸ್‌ಐ, 238 ಹೆಡ್ ಕಾನ್‌ಸ್ಟೆಬಲ್‌, 52 ಡಬ್ಲ್ಯುಪಿಸಿ, 2 ಕೆಎಸ್‌ಆರ್‌ಪಿ, 4 ಡಿಎಆರ್ ಇತರರನ್ನು ನಿಯೋಜಿಸಿ, ಅಗತ್ಯ ಬಂದೋ ಬಸ್ತ್ ಮಾಡಲಾಗಿದೆ.ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.ಉಚಿತ ಬಸ್‌ ವ್ಯವಸ್ಥೆ:

ತಲಕಾವೇರಿ ಪವಿತ್ರ ಕುಂಡಿಕೆ ಬಳಿ ಹೂವಿನ ಅಲಂಕಾರ, ದೀಪಾಲಂಕಾರ ಮಾಡಲಾಗಿದೆ. ಭಾಗಮಂಡಲದಿಂದ ತಲಕಾವೇರಿಗೆ, ತಲಕಾವೇರಿಯಿಂದ ಭಾಗಮಂಡಲದ ವರೆಗೆ 25 ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸಲಿದ್ದು, ಈ ಮಾರ್ಗದಲ್ಲಿ ಭಕ್ತರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ಐಶ್ವರ್ಯ ತಿಳಿಸಿದರು.

ಸ್ವಚ್ಚ ಕೊಡಗು-ಸುಂದರ ಕೊಡಗು ಹೆಸರಿನಡಿ ಶುಚಿತ್ವಕ್ಕೆ ಒತ್ತು ನೀಡಲಾಗಿದ್ದು, ಭಕ್ತಾಧಿಗಳು ಸಹಕರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಕೋರಿದರು. ಪ್ರಧಾನ ಅರ್ಚಕ ಗುರುರಾಜ್ ಆಚಾರ್ ಮಾತನಾಡಿ, ಪವಿತ್ರ ತೀರ್ಥೋದ್ಭವದಂದು ಮಹಾ ಸಂಕಲ್ಪ, ಕುಂಕುಮಾರ್ಚನೆ ಸೇರಿದಂತೆ ಪೂಜಾ ವಿಧಿ ವಿಧಾನಗಳು ಬೆಳಗ್ಗೆಯಿಂದಲೇ ಆರಂಭವಾಗಲಿದೆ. ಸಂಜೆ ವೇಳೆಯಲ್ಲಿ ಮಹಾಪೂಜೆ ಹಾಗೂ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು. 12 ಜನರನ್ನು ಒಳಗೊಂಡ ಅರ್ಚಕರ ತಂಡ ಪೂಜಾ ವಿಧಿವಿಧಾನ ನಡೆಸಿಕೊಡಲಿದ್ದಾರೆ. ಅ.17ರಿಂದ ಒಂದು ತಿಂಗಳು ಪೂಜಾ ಕಾರ್ಯಗಳು ನಡೆಯಲಿವೆ. ಈ ಮಾಸದಲ್ಲಿ ಗಂಗೆ ಸ್ನಾನ ಮಾಡಿದರೆ ಪುಣ್ಯ ಬರುತ್ತದೆ ಎಂಬ ಪ್ರತೀತಿ ಇದೆ ಎಂದು ಗುರುರಾಜ್ ಆಚಾರ್ ವಿವರಿಸಿದರು.ತಕ್ಕ ಮುಖ್ಯಸ್ಥ ಕೋಡಿ ಮೋಟಯ್ಯ ಮಾತನಾಡಿ, ಪ್ರತೀ ವರ್ಷದಂತೆ ಈ ವರ್ಷವೂ ಸಹ ಶ್ರೀ ಕಾವೇರಿ ಪವಿತ್ರ ತೀರ್ಥೋದ್ಭವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಭಕ್ತರ ಅನುಕೂಲಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪೂಜಾ ವಿಧಿ ವಿಧಾನಗಳು ನಡೆಯಲಿವೆ ಎಂದು ತಿಳಿಸಿದರು.

ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದ ಇಒ ಚಂದ್ರಶೇಖರ್ ಮಾತನಾಡಿ, ಭಾಗಮಂಡಲ ಭಗಂಡೇಶ್ವರ ದೇವಾಲಯದಲ್ಲಿಯೂ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ತ್ರಿವೇಣಿ ಸಂಗಮದಲ್ಲಿ ಭಕ್ತರ ಅನುಕೂಲಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.----------------

ಸುವರ್ಣ ನ್ಯೂಸ್ ಲೈವ್

ತಲಕಾವೇರಿಯಲ್ಲಿ ಶುಕ್ರವಾರ ತೀರ್ಥೋದ್ಭವದ ಹಿನ್ನೆಲೆಯಲ್ಲಿ ಸುವರ್ಣ ನ್ಯೂಸ್ ವಾಹಿನಿಯಲ್ಲಿ ನೇರ ಪ್ರಸಾರ ಇರಲಿದ್ದು, ಭಕ್ತರು ನೇರ ಪ್ರಸಾರ ಮೂಲಕವೇ ಕಾವೇರಿ ತೀರ್ಥೋದ್ಭವವನ್ನು ಕಣ್ತುಂಬಿಸಿಕೊಳ್ಳಬಹುದಾಗಿದೆ.-----------------

ಉಪ ಮುಖ್ಯಮಂತ್ರಿ ಕೊಡಗು ಜಿಲ್ಲಾ ಪ್ರವಾಸಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅ.17ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ಅವರು ಮಧ್ಯಾಹ್ನ 12.30ಕ್ಕೆ ಭಾಗಮಂಡಲಕ್ಕೆ ಆಗಮಿಸಿ, ನಂತರ ಮಧ್ಯಾಹ್ನ 1.45 ಗಂಟೆಗೆ ತಲಕಾವೇರಿಯಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಅವರ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಬಿ.ಎಸ್.ಶ್ರೀಧರ್ ಅವರು ತಿಳಿಸಿದ್ದಾರೆ.ಮುಜರಾಯಿ ಸಚಿವರು ಭಾಗಿಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅ.17ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ನಡೆಯುವ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬ್ರಾಹ್ಮಣರು ನಮ್ಮನ್ನು ಗುಲಾಮ ಮಾಡಲು ಹಿಂದು ಧರ್ಮ ಹುಟ್ಟು ಹಾಕಿದ್ರು : ನಿವೃತ್ತ ಜಡ್ಜ್‌
ಇಂದಿನಿಂದ ಕಾವೇರಲಿದೆ ಉತ್ತರ ಕರ್ನಾಟಕದ ಚರ್ಚೆ-3 ದಿನ ವಿಧಾನಮಂಡಲದಲ್ಲಿ ಈ ಬಗ್ಗೆ ಕಲಾಪ