ವಿಶೇಷ ವರದಿ
ಪ್ರಯಾಣಿಕರ ಅನುಕೂಲಕ್ಕಾಗಿ ನಿರ್ಮಿಸಿರುವ ಶೌಚಾಲಯವೇ ಬಳಕೆಗೆ ಬಾರದಿದ್ದರೆ ಹೇಗೆ?.
ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಬಸ್ ನಿಲ್ದಾಣದಲ್ಲಿ ಇಂತಹ ಸ್ಥಿತಿ ನಿರ್ಮಾಣವಾಗಿದ್ದು, ಸೂಕ್ತ ನಿರ್ವಹಣೆ ಇಲ್ಲದೆ ಸಾರ್ವಜನಿಕ ಸೌಲಭ್ಯಗಳು ಇದ್ದೂ ಇಲ್ಲದಂತಾಗಿವೆ. ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಗ್ರಾಮದ ಬಸ್ ನಿಲ್ದಾಣಕ್ಕೆ ಪ್ರತಿದಿನ ನೂರಾರು ಪ್ರಯಾಣಿಕರು, ಮಹಿಳೆಯರು, ವೃದ್ಧರು ಹಾಗೂ ವಿದ್ಯಾರ್ಥಿಗಳು ಆಗಮಿಸುತ್ತಾರೆ. ಆದರೆ, ಇಲ್ಲಿ ಸಾರ್ವಜನಿಕರಿಗಾಗಿ ಶೌಚಾಲಯ ನಿರ್ಮಿಸಿದ್ದರೂ ಅದರ ನಿರ್ವಹಣೆಗೆ ಸಿಬ್ಬಂದಿ ನೇಮಕ ಮಾಡಿಲ್ಲ. ಹೀಗಾಗಿ ಸ್ವಚ್ಛತೆ ಕಾಪಾಡುವುದು ಹಾಗೂ ಶೌಚಾಲಯವನ್ನು ಸಾರ್ವಜನಿಕರ ಬಳಕೆಗೆ ಯೋಗ್ಯವಾಗಿಡುವುದು ಸಾಧ್ಯವಾಗುತ್ತಿಲ್ಲ. ಅನಿವಾರ್ಯ ಸಂದರ್ಭದಲ್ಲಿ ಶೌಚಾಲಯ ಬಳಸಲು ಬರುವವರು ತೊಂದರೆ ಅನುಭವಿಸುವಂತಾಗಿದೆ.
ಸಾರ್ವಜನಿಕರ ಅಗತ್ಯ ಮನಗಂಡು ಲಕ್ಷಾಂತರ ರುಪಾಯಿ ವೆಚ್ಚದಲ್ಲಿ ನಿರ್ಮಿಸುವ ಸೌಲಭ್ಯಗಳು ಜನರ ನಿತ್ಯಬಳಕೆಗೆ ಸಿಗಬೇಕು. ಆದರೆ, ಈ ಬಸ್ ನಿಲ್ದಾಣದಲ್ಲಿ ಶೌಚಾಲಯದ ವ್ಯವಸ್ಥೆ ಇದ್ದರೂ ಅದನ್ನು ಸಮರ್ಪಕವಾಗಿ ನಿರ್ವಹಿಸುವ ವ್ಯವಸ್ಥೆಯಿಲ್ಲದಿರುವುದು ಆಡಳಿತದ ಕಾರ್ಯವೈಖರಿಯ ಬಗ್ಗೆ ಪ್ರಶ್ನೆ ಮೂಡಿಸಿದೆ.
ಪ್ರಯಾಣಿಕರ ಪರದಾಟ:
ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯಗಳನ್ನು ನಿರ್ಮಿಸುವುದಷ್ಟೇ ಆಡಳಿತದ ಜವಾಬ್ದಾರಿಯಲ್ಲ. ಅವುಗಳನ್ನು ನಿರಂತರವಾಗಿ ನಿರ್ವಹಿಸಿ ಸಾರ್ವಜನಿಕರಿಗೆ ಸಮರ್ಪಕವಾಗಿ ಬಳಕೆಯಾಗುವಂತೆ ನೋಡಿಕೊಳ್ಳುವುದೂ ಅಷ್ಟೇ ಮುಖ್ಯ. ಆದರೆ, ಬ್ಯಾಹಟ್ಟಿಯಲ್ಲಿ ನಿರ್ವಹಣೆಯ ಕೊರತೆಯಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.
ಬ್ಯಾಹಟ್ಟಿ ಗ್ರಾಪಂ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಶೌಚಾಲಯದ ಸ್ವಚ್ಛತೆ ಮತ್ತು ನಿರ್ವಹಣೆಗೆ ಸೂಕ್ತ ಸಿಬ್ಬಂದಿಯನ್ನು ನೇಮಿಸಬೇಕು. ಶೌಚಾಲಯವನ್ನು ಸಾರ್ವಜನಿಕರ ಬಳಕೆಗೆ ಯೋಗ್ಯವಾಗಿಸಬೇಕು. ಬಸ್ ನಿಲ್ದಾಣದ ಕಟ್ಟಡ ಹಾಗೂ ಸೂಚನಾ ಫಲಕಗಳಿಗೆ ಅಗತ್ಯ ನಾಮಫಲಕ ಅಳವಡಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.