ಕೊಪ್ಪ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ನಿರಂಜನ್ ಮಾಹಿತಿ ಕನ್ನಡಪ್ರಭ ವಾರ್ತೆ, ಕೊಪ್ಪ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಕೊಪ್ಪ ನರಾ ಪುರ, ಅಖಿಲ ಕರ್ನಾಟಕ ಜನ ಜಾಗೃತಿ ಟ್ರಸ್ಟ್ (ರಿ.) ಬೆಳ್ತಂಗಡಿ ಮತ್ತು ಜಿಲ್ಲಾ ಜನಜಾಗೃತಿ ವೇದಿಕೆ ಸಂಯುಕ್ತಾಶ್ರಯದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವಿ.ಹೆಗ್ಗಡೆಯವರ ಆಶಯದಂತೆ ಅ.8ರ ಭಾನುವಾರ ಬಾಳಗಡಿಯ ಕನ್ನಡ ಭವನದಲ್ಲಿ ಗಾಂಧಿ ಸ್ಮೃತಿ ಮತ್ತು ವ್ಯಸನ ಮುಕ್ತರ ಸಮಾವೇಶ ನಡೆಯಲಿದೆ ಎಂದು ಕೊಪ್ಪ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ನಿರಂಜನ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಭಾನುವಾರ ಮಧ್ಯಾಹ್ನ 2 ಕ್ಕೆ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಅರವಿಂದ ಸೋಮಯಾಜಿ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಕೊಪ್ಪ ಉಪವಿಭಾಗದ ಪೊಲೀಸ್ ಉಪನಿರೀಕ್ಷಕ ಎಂ. ಅನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ. ಕೊಪ್ಪ ತಾಲೂಕು ತಹಸೀಲ್ದಾರ್ ಮಂಜುಳ ಬಿ. ಹೆಗಡಾಳ ಕೆಎಎಸ್ ರವರು ಮಹಾತ್ಮಾ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಪ್ರಕಾಶ್ ರಾವ್, ಚಿತ್ರದುರ್ಗ ಜಿಲ್ಲಾ ಜನಜಾಗೃತಿ ವೇದಿಕೆ ಯೋಜನಾಧಿಕಾರಿ ನಾಗರಾಜ್ ಕುಲಾಲ್ ಸೇರಿದಂತೆ ಮತ್ತಿತರ ಗಣ್ಯರ ಉಪಸ್ಥಿತರಿರಲಿದ್ದು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿರಂಜನ್ ವಿನಂತಿಸಿದ್ದಾರೆ.