ನಾಳೆ ತುಮಕೂರು ವಿವಿ 17ನೇ ಘಟಿಕೋತ್ಸವ

KannadaprabhaNewsNetwork |  
Published : Aug 06, 2024, 12:35 AM IST
ಹೆಚ್.ಜಿ. ಚಂದ್ರಶೇಖರ್ | Kannada Prabha

ಸಾರಾಂಶ

ತುಮಕೂರು ವಿಶ್ವವಿದ್ಯಾನಿಲಯದ 17ನೇ ವಾರ್ಷಿಕ ಘಟಿಕೋತ್ಸವ

ಕನ್ನಡಪ್ರಭ ವಾರ್ತೆ ತುಮಕೂರು ತುಮಕೂರು ವಿಶ್ವವಿದ್ಯಾನಿಲಯದ 17ನೇ ವಾರ್ಷಿಕ ಘಟಿಕೋತ್ಸವ ಆ.7ರಂದು ಬೆಳಿಗ್ಗೆ 11.30 ಕ್ಕೆ ಕುಲಪತಿಗಳ ಕಚೇರಿ ಮುಂಭಾಗದ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತಿಳಿಸಿದರು.ವಿಶ್ವವಿದ್ಯಾನಿಲಯದ ಸರ್ ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಸೋಮವಾರ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು, ಘಟಿಕೋತ್ಸವದಲ್ಲಿ ಕ್ರೀಡೆ ಮತ್ತು ಸಂಸ್ಕೃತಿ ವಿಭಾಗದಲ್ಲಿ ಜಲಕ್ರೀಡಾ ಸಾಹಸಿಗ ಮತ್ತು ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿರುವ ಜಿಲ್ಲೆಯ ಸುಗ್ಗನಪಾಳ್ಯದ ಎಸ್.ಸಿ. ನಾಗಾನಂದಸ್ವಾಮಿ, ಸಮಾಜ ಸೇವಾ ವಿಭಾಗದಲ್ಲಿ ಕೈಗಾರಿಕೋದ್ಯಮಿ ಎಚ್.ಜಿ. ಚಂದ್ರಶೇಖರ್, ಆಧ್ಯಾತ್ಮಿಕ ಮತ್ತು ಸಾಮಾಜಿಕ ಸೇವಾ ವಿಭಾಗದಲ್ಲಿ ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಸೇರಿ 3 ಮಂದಿಗೆ ಗೌರವ ಡಾಕ್ಟರೇಟ್ ಹಾಗೂ 36 ಅಭ್ಯರ್ಥಿಗಳಿಗೆ ಪಿಎಚ್ ಡಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.ಕರ್ನಾಟಕದ ರಾಜ್ಯಪಾಲರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯದ ಉನ್ನತ ಶಿಕ್ಷಣ ಸಚಿವ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಮಕುಲಾಧಿಪತಿ ಡಾ. ಎಂ.ಸಿ. ಸುಧಾಕರ್ ಉಪಸ್ಥಿತರಿರುವರು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ವಿಶ್ರಾಂತ ಅಧ್ಯಕ್ಷ ಡಾ. ಎ.ಎಸ್. ಕಿರಣ್ ಕುಮಾರ್ ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.ಈ ಬಾರಿ ಘಟಿಕೋತ್ಸವದಲ್ಲಿ 3 ಅಭ್ಯರ್ಥಿಗಳಿಗೆ ಡಿಲಿಟ್ ಪದವಿ, 1758 ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಹಾಗೂ 10,230 ವಿದ್ಯಾರ್ಥಿಗಳಿಗೆ ಸ್ನಾತಕ ಪದವಿ ಸೇರಿದಂತೆ ಒಟ್ಟು11988 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದರು.ವಿಶ್ವವಿದ್ಯಾನಿಲಯದ ಎಲ್ಲಾ ಸ್ನಾತಕೋತ್ತರ ಪದವಿಗಳಿಗೆ ತಲಾ ಐದು ರ್‍ಯಾಂಕ್‌, ಪದವಿಗಳಿಗೆ ತಲಾ 10, ಬಿಎಫ್‌ಎ, ಬಿವಿಎ, ಬಿಎ ಇಂಟಿಗ್ರೇಟೆಡ್ ಕನ್ನಡ ಪಂಡಿತ್‌ಗೆ ತಲಾ 1 ರ್‍ಯಾಂಕ್ ಘೋಷಿಸಲಾಗಿದ್ದು, ಒಟ್ಟು 74 ವಿದ್ಯಾರ್ಥಿಗಳಿಗೆ 98 ಚಿನ್ನದ ಪದಕ ಹಾಗೂ 8 ನಗದು ಬಹುಮಾನಗಳನ್ನು ಘಟಿಕೋತ್ಸವದಲ್ಲಿ ಪ್ರದಾನ ಮಾಡಲಿದೆ ಎಂದು ತಿಳಿಸಿದರು.ವಿಶ್ವವಿದ್ಯಾನಿಲಯದ ಶೈಕ್ಷಣಿಕ ಪ್ರಗತಿ ಮಾಹಿತಿ ಹಂಚಿಕೊಂಡ ಅವರು, ಕಡಿಮೆ ಶುಲ್ಕದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯವು ವಿದ್ಯಾರ್ಥಿ ಸ್ನೇಹಿ ಪರೀಕ್ಷೆಗಳನ್ನು ನಡೆಸುತ್ತಿದೆ. ನಿರ್ದಿಷ್ಟ ಅವಧಿಯೊಳಗೆ ಎಲ್ಲಾ ವಿಶ್ವವಿದ್ಯಾನಿಲಯಗಳು ಶೈಕ್ಷಣಿಕ ವರ್ಷವನ್ನು ಮುಗಿಸುವಂತೆ ರಾಜ್ಯ ಸರ್ಕಾರದಿಂದ ನಿರ್ದೇಶನ ನೀಡಿದ್ದು, ಅದರಂತೆ ಸಕಾಲದಲ್ಲಿ ಪಠ್ಯಗಳನ್ನು ಪೂರ್ಣಗೊಳಿಸಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಉನ್ನತ ವ್ಯಾಸಂಗ ಹಾಗೂ ನೇಮಕಾತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪರೀಕ್ಷೆ ನಡೆದ ನಂತರ ಶೀಘ್ರವಾಗಿ ಫಲಿತಾಂಶ ನೀಡುವ ಉದ್ದೇಶದಿಂದ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು ರಜೆ ಇಲ್ಲದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ ಅವರು, ಸ್ಥಳದ ಅಭಾವವಿರುವುದರಿಂದ ಹೊಸ ಕೋರ್ಸ್‌ ಗಳನ್ನು ಪ್ರಾರಂಭಿಸಲು ಸಾಧ್ಯವಾಗುತ್ತಿಲ್ಲ ಎಂದರು. ಮಾಧ್ಯಮ ಗೋಷ್ಠಿಯಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವ(ಆಡಳಿತ)ರಾದ ನಾಹಿದಾ ಜಮ್ ಜಮ್, ಕುಲಸಚಿವ(ಪರೀಕ್ಷಾಂಗ)ರಾದ ಪ್ರೊ. ಕೆ. ಪ್ರಸನ್ನಕುಮಾರ್, ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಸಿಬಂತಿ ಪದ್ಮನಾಭ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನ್ಯಕೋಮಿನವನ ಜತೆ ಮದುವೆ: ಮೊಮ್ಮಗಳ ಶಿಶು ಕೊಂ*ದ ಅಜ್ಜಿ!
ಕಾಳಸಂತೆಯಲ್ಲಿ ಎಲ್ಪಿಜಿ ಸೇಲ್‌ ಮೇಲೆ ನಿಗಾ - ಅಧಿಕಾರಿಗಳಿಗೆ ಸಿಎಸ್‌ ಸೂಚನೆ