ಹಂಪಿಗೆ ಹರಿದು ಬಂದ ಪ್ರವಾಸಿಗರ ದಂಡು

KannadaprabhaNewsNetwork | Published : Jun 30, 2025 12:34 AM

ವಿಶ್ವವಿಖ್ಯಾತ ಹಂಪಿ ಸ್ಮಾರಕಗಳ ವೀಕ್ಷಣೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಭಾನುವಾರ ವೀಕೆಂಡ್‌ ಹಿನ್ನೆಲೆ ಹಂಪಿಗೆ 20 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಆಗಮಿಸಿದ್ದರು.

ಕನ್ನಡಪ್ರಭ ವಾರ್ತೆ ಹೊಸಪೇಟೆ

ವಿಶ್ವವಿಖ್ಯಾತ ಹಂಪಿ ಸ್ಮಾರಕಗಳ ವೀಕ್ಷಣೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಭಾನುವಾರ ವೀಕೆಂಡ್‌ ಹಿನ್ನೆಲೆ ಹಂಪಿಗೆ 20 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಆಗಮಿಸಿದ್ದರು. ಹಂಪಿ ಸ್ಮಾರಕಗಳ ವೀಕ್ಷಣೆಗೆ ದೇಶ, ವಿದೇಶಿ ಪ್ರವಾಸಿಗರು ಆಗಮಿಸುತ್ತಿದ್ದು, ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಹರಿದು ಬರುತ್ತಿದ್ದಾರೆ.

ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇವಾಲಯ, ವಿಜಯ ವಿಠ್ಠಲ ದೇವಾಲಯ, ಕಲ್ಲಿನತೇರು, ಪುರಂದರದಾಸರ ಮಂಟಪ, ಕಮಲ ಮಹಲ್‌, ಮಹಾನವಮಿ ದಿಬ್ಬ, ಹಜಾರರಾಮ ದೇವಾಲಯ, ಕಡಲೆಕಾಳು, ಸಾಸಿವೆ ಕಾಳು ಗಣಪತಿ ಮಂಟಪಗಳು, ಶ್ರೀಕೃಷ್ಣ ದೇವಾಲಯ, ಅಚ್ಯುತರಾಯ ದೇವಾಲಯ, ಪಟ್ಟಾಭಿರಾಮ ದೇವಾಲಯ, ಸೀತೆ ಸೆರಗು, ವಾಲಿ, ಸುಗ್ರೀವ ಗುಹೆ, ಉಗ್ರ ನರಸಿಂಹ, ಬಡವಿ ಲಿಂಗ, ಕೋದಂಡರಾಮ ದೇವಾಲಯ, ಮಾಲ್ಯವಂತ ರಘುನಾಥ ದೇವಾಲಯ, ನೆಲಸ್ತರದ ಶಿವ ದೇವಾಲಯ, ಕಮಲಾಪುರದ ಪ್ರಾಚ್ಯವಸ್ತು ಸಂಗ್ರಹಾಲಯ ಸೇರಿದಂತೆ ವಿವಿಧ ಸ್ಮಾರಕಗಳು ಹಾಗೂ ಬಜಾರ್‌ಗಳನ್ನು ಪ್ರವಾಸಿಗರು ವೀಕ್ಷಿಸಿದರು.

ಜಿ-20 ಶೃಂಗಸಭೆ ಬಳಿಕ ಹಂಪಿ ಸ್ಮಾರಕಗಳ ವೀಕ್ಷಣೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಬೆಂಗಳೂರಿನಿಂದ ಟೆಕ್ಕಿಗಳ ದಂಡೇ ಹರಿದುಬರುತ್ತಿದ್ದು, ಹಂಪಿಯ ಐತಿಹಾಸಿಕ ಸ್ಮಾರಕಗಳನ್ನು ಕಂಡು ಸಂತಸಗೊಳ್ಳುತ್ತಿದ್ದಾರೆ. ಈ ಸ್ಮಾರಕಗಳನ್ನು ಮುಂದಿನ ಪೀಳಿಗೆಗೆ ಜತನದಿಂದ ಕಾಪಾಡಿರುವುದನ್ನು ಕಂಡು ಪ್ರವಾಸಿಗರು ಇನ್ನಷ್ಟು ಪುಳಕಿತಗೊಳ್ಳುತ್ತಿದ್ದಾರೆ.

ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಆಂಧ್ರಪ್ರದೇಶ, ಕೇರಳ, ದಿಲ್ಲಿ, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳಿಂದಲೂ ಪ್ರವಾಸಿಗರು ಹಂಪಿ ಸ್ಮಾರಕಗಳ ವೀಕ್ಷಣೆಗೆ ಆಗಮಿಸುತ್ತಿದ್ದಾರೆ. ಹಂಪಿಯ ವಿಜಯ ವಿಠಲ ದೇವಾಲಯ, ಕಲ್ಲಿನತೇರು ಹಾಗೂ ಶ್ರೀ ವಿರೂಪಾಕ್ಷೇಶ್ವರ ದೇವಾಲಯಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿದರು. ಪ್ರವಾಸಿಗರು ಖುಷಿ ಖುಷಿಯಾಗಿ ಸೆಲ್ಫಿ ತೆಗೆದುಕೊಂಡರು. ಈಗ ಮಳೆಗಾಲದ ವಾತಾವರಣ ಇರುವ ಹಿನ್ನೆಲೆ ಹಂಪಿ ಸ್ಮಾರಕಗಳ ವೀಕ್ಷಣೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಇದರಿಂದ ಪ್ರವಾಸೋದ್ಯಮ ಕೂಡ ಚೇತರಿಸಿದೆ. ದೇಶ, ವಿದೇಶಿ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಪೊಲೀಸರು ಕೂಡ ಭದ್ರತೆ ಹೆಚ್ಚಿಸಿದ್ದಾರೆ.