ಕೊಪ್ಪಳ: ಅ. 6 ರಂದು ಸಿಎಂ ಸಿದ್ದರಾಮಯ್ಯ ಕೊಪ್ಪಳ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಜನರು ಸೇರುವುದರಿಂದ ಕಾನೂನು ಸುವ್ಯವಸ್ಥೆ ಹಾಗೂ ಟ್ರಾಫಿಕ್ ನಿರ್ವಹಣೆಯಲ್ಲಿ ಯಾವುದೇ ಸಮಸ್ಯೆಗಳಾಗದಂತೆ ಪೊಲೀಸ್ ಅಧಿಕಾರಿಗಳು ಮುಂಜಾಗ್ರತೆ ಕ್ರಮ ವಹಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ ಹೇಳಿದರು.
ಅವರು ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅ. 6 ರಂದು ಮುಖ್ಯಮಂತ್ರಿಗಳ ಕೊಪ್ಪಳ ಜಿಲ್ಲಾ ಪ್ರವಾಸದ ಹಿನ್ನೆಲೆ ಪೊಲೀಸ್ ಇಲಾಖೆ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಅಧಿಕಾರಿಗಳಿಗೆ ನೀಡಿದ ಕೆಲಸ ಮುಂದೆ ನಿಂತು ಜವಾಬ್ದಾರಿಯಿಂದ ಮಾಡಬೇಕು. ನಮ್ಮ ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಸೇರಿದಂತೆ ಇತರೆ ಬೇರೆ ಬೇರೆ ಜಿಲ್ಲೆಗಳಿಂದ 2500 ಪೊಲೀಸ್ ಸಿಬ್ಬಂದಿ ಬರುತ್ತಾರೆ. ಅವರಿಗೆ ಉಳಿದುಕೊಳ್ಳಲು ಸಮುದಾಯ ಭವನ ಮತ್ತು ಕಲ್ಯಾಣ ಮಂಟಪಗಳಲ್ಲಿ ವ್ಯವಸ್ಥೆ ಮಾಡಬೇಕು. ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ವಾಹನಗಳ ಪಾಸ್ ಪಡೆಯಲು ಗುರುತಿನ ಚೀಟಿಯೊಂದಿಗೆ ಫೋಟೋ ಕೊಡಬೇಕು ಎಂದರು.
ಕೊಪ್ಪಳ ಕೇಂದ್ರ ಬಸ್ ನಿಲ್ದಾಣದಿಂದ ಕಾರ್ಯಕ್ರಮದ ಮುಖ್ಯ ವೇದಿಕೆವರೆಗಿನ ರಸ್ತೆಯ ಪಕ್ಕದಲ್ಲಿ ಸಾರ್ವಜನಿಕರು ವಾಹನಗಳನ್ನು ಪಾರ್ಕಿಂಗ್ ಮಾಡಬಾರದು. ಅಧಿಕಾರಿಗಳ ವಾಹನಗಳಿದ್ದರೆ ಪಾಸ್ ಪಡೆಯಬೇಕು. ಜೆಸ್ಕಾಂ, ನಗರಸಭೆ, ಪೊಲೀಸ್ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಕರ್ತವ್ಯಕ್ಕೆ ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕೆಂದು ಹೇಳಿದರು.ಸಭೆಯಲ್ಲಿ ಸಹಾಯಕ ಆಯುಕ್ತ ಕ್ಯಾ.ಮಹೇಶ್ ಮಾಲಗಿತ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ್, ಡಿವೈಎಸ್‌ಪಿ ಮುತ್ತಣ್ಣ ಸವರಗೋಳ, ಗಂಗಾವತಿ ಡಿವೈಎಸ್‌ಪಿ ಸಿದ್ದಲಿಂಗಪ್ಪಗೌಡ ಪಾಟೀಲ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ, ಕಿಮ್ಸ್ ನಿರ್ದೇಶಕ ವಿಜಯನಾಥ ಇಟಗಿ, ಜಿಲ್ಲಾ ವಾರ್ತಾಧಿಕಾರಿ ಡಾ. ಸುರೇಶ ಜಿ., ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಜುಮ್ಮನ್ನವರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.