ಬ್ಯಾಡಗಿ: ಸಾರ್ವಜನಿಕ ವಾಹನಗಳ ಓಡಾಟಕ್ಕೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಮೋಟೆಬೆನ್ನೂರು ಗ್ರಾಮದ ಬಳಿ ಮೇಲ್ಸೇತುವೆ ಸಂಚಾರಕ್ಕೆ ಚಾಲನೆ ನೀಡಿದ್ದಾರೆ ಹೊರತು ಇದೊಂದು ಅಧಿಕೃತ ಉದ್ಘಾಟನೆ ಕಾರ್ಯಕ್ರಮವಲ್ಲ ಎಂದು ಬಿಜೆಪಿ ಶಿಷ್ಟಾಚಾರ ಉಲ್ಲಂಘನೆ ಆರೋಪಕ್ಕೆ ಶಾಸಕ ಬಸವರಾಜ ಶಿವಣ್ಣನವರ ಸ್ಪಷ್ಟನೆ ನೀಡಿದರು.ಕಳೆದ 4 ದಿನಗಳ ಹಿಂದಷ್ಟೇ ಮೋಟೆಬೆನ್ನೂರು ಗ್ರಾಮದ ಬಳಿಯಲ್ಲಿನ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆಯಲ್ಲಿ ಏಕಮುಖ ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಹಸಿರು ನಿಶಾನೆ ತೋರಿಸಿದ್ದರು. ಆದರೆ ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಅವರು, ಯಾರಿಗೂ ತಿಳಿಸದೇ ಕೇಂದ್ರ ಸರ್ಕಾರದ ಅನುದಾನದಲ್ಲಿ ನಿರ್ಮಿಸಿದ ಸೇತುವೆಯನ್ನು ಶಿಷ್ಟಾಚಾರ ಉಲ್ಲಂಘಿಸಿದ್ದಾಗಿ ಕಾಂಗ್ರೆಸ್ ಶಾಸಕರು ಹಾಗೂ ಸಚಿವರ ವಿರುದ್ಧ ಆರೋಪಿಸಿದ್ದರು.ಜನರ ಒತ್ತಡವಿತ್ತು: ಸಾರ್ವಜನಿಕ ವಾಹನಗಳ ಓಡಾಟಕ್ಕೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಉದ್ಘಾಟಿಸಿದ್ದಾಗಿಯೂ ಹಾಗೂ ಸ್ಥಳೀಯ ಗುತ್ತಿಗೆದಾರರು ಮತ್ತು ಸಾರ್ವಜನಿಕರ ಒತ್ತಡವೂ ಕೂಡ ಇತ್ತು. ಹೀಗಾಗಿ ಉದ್ಘಾಟಿಸಿದ್ದಾಗಿ ತಿಳಿಸಿದ್ದಾರೆ. ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರರು ಇದನ್ನು ನಮ್ಮ ಗಮನಕ್ಕೆ ತಂದು ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದ ಹಿನ್ನೆಲೆ ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇಲ್ಸೇತುವೆ ಏಕಮುಖ ರಸ್ತೆ ಸಂಚಾರಕ್ಕೆ ಚಾಲನೆ ನೀಡಲಾಗಿದೆ ಎಂದರು.ಸತ್ಯಕ್ಕೆ ದೂರ: ಸಚಿವ ಶಿವಾನಂದ ಪಾಟೀಲರು ಶಿಷ್ಟಾಚಾರ ಉಲ್ಲಂಘಿಸಿ ಬೇಜವಾಬ್ದಾರಿತನದಿಂದ ನಡೆದುಕೊಂಡಿದ್ದಾರೆ ಎನ್ನುವ ಬಿಜೆಪಿ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಅಪೂರ್ಣಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆಯನ್ನು ಪೂರ್ಣಗೊಳಿಸುವಂತೆ ನಾನೇ ಸ್ವತಃ ಹಾಲಿ ಮತ್ತು ಮಾಜಿ ಸಂಸದರಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದು ಮನವಿ ಮಾಡಿದ್ದೆ. ಅಲ್ಲದೇ ಹಲವು ಬಾರಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಗಮನಕ್ಕೂ ತಂದಿದ್ದಾಗಿ ತಿಳಿಸಿದರು.