ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡುವಲ್ಲಿ ಯುವ ಮತದಾರರ ಪಾತ್ರ ಮಹತ್ವದ್ದಾಗಿರುತ್ತದೆ. ಯಾವುದೇ ಆಮಿಷಗಳಿಗೆ ಒಳಗಾಗದೆ ಜಾಗೃತ ಮತದಾರರಾಗಬೇಕು.
ಕಾರವಾರ: ಜಿಲ್ಲಾದ್ಯಂತ ಮತದಾನ ಜಾಗೃತಿಗಾಗಿ ಜಿಲ್ಲಾ ಸ್ವೀಪ್ ಸಮಿತಿ ನೇತೃತ್ವದಲ್ಲಿ ಹತ್ತು ಹಲವು ವೈವಿಧ್ಯಮಯ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದ್ದು, ಕಳೆದ ವಿಧಾನಸಭಾ ಚುನಾವಣೆಗಿಂತ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮತದಾರರು ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
ಇಲ್ಲಿನ ಜಿಪಂ ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಜಿಲ್ಲೆಯಲ್ಲಿ ಪಾರರ್ದಶಕ ಮತ್ತು ನ್ಯಾಯ ಸಮ್ಮತವಾದ ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. 85 ವರ್ಷ ಮೇಲ್ಪಟ್ಟ ಹಿರಿಯ ನೋಂದಾಯಿತ ನಾಗರಿಕರು ಹಾಗೂ ಅಂಗವಿಕಲ ಮತದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಚುನಾವಣಾ ಕರ್ತವ್ಯನಿರತ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಮತದಾರರನ್ನು ಜಾಗೃತಗೊಳಿಸಲಾಗುತ್ತಿದೆ ಎಂದರು.ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರಕುಮಾರ ಕಾಂದೂ ಮಾತನಾಡಿ, ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡುವಲ್ಲಿ ಯುವ ಮತದಾರರ ಪಾತ್ರ ಮಹತ್ವದ್ದಾಗಿರುತ್ತದೆ. ಯಾವುದೇ ಆಮಿಷಗಳಿಗೆ ಒಳಗಾಗದೆ ಜಾಗೃತ ಮತದಾರರಾಗಬೇಕು.
ಕುಟುಂಬದ ಸದಸ್ಯರಿಗೆ ಮತ್ತು ಅಕ್ಕಪಕ್ಕದ ಮನೆಯವರಿಗೆ ಕಡ್ಡಾಯ ಮತದಾನದ ಮಹತ್ವವನ್ನು ಮನವರಿಕೆ ಮಾಡಿಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಪ್ರೇರಣೆ ನೀಡಬೇಕು. ಸಮಾಜಕ್ಕೆ ಉತ್ತಮರೆನಿಸಬಹುದಾದ ನಾಯಕರನ್ನು ಆರಿಸುವಲ್ಲಿ ಪ್ರಜ್ಞಾವಂತ ಯುವ ಮತದಾರರು ನೆರವಾಗಬೇಕು ಎಂದರು.
ಜಿಪಂನಿಂದ ಆರಂಭಗೊಂಡ ಜಾಥಾವು ಡಾ. ಪಿಕಳೆ ರಸ್ತೆ, ಸುಭಾಸ್, ಸವಿತಾ ಸರ್ಕಲ್ ಮಾರ್ಗವಾಗಿ ಜಿಪಂ ಆವರಣದಲ್ಲಿ ಅಂತ್ಯಗೊಂಡಿತು. ಬಳಿಕ ಜಿಪಂ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ನಾ ಭಾರತ ಚುನಾವಣಾ ಜಾಗೃತಿ ಗೀತೆಯನ್ನು ಪ್ರದರ್ಶಿಸಲಾಯಿತು.
ಉಪ ವಿಭಾಗಾಧಿಕಾರಿ ಕನಿಷ್ಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್ ಬಿ.ವಿ., ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.