ಹಳಿಯಾಳ: ಆಡಳಿತದಲ್ಲಿ ತಂತ್ರಜ್ಞಾನ ಅಳವಡಿಸಿಕೊಂಡ ಮೇಲೆ ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿದೆ. ಭ್ರಷ್ಟತೆಗೆ ಪೂರ್ಣವಿರಾಮ ನೀಡಬೇಕಾಗಿದೆ, ಆಡಳಿತದಲ್ಲಿ ಪಾರದರ್ಶಕತೆ ತರಬೇಕಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.
ರಾಜಕೀಯದಲ್ಲಿ ನಮ್ಮಲ್ಲಿ ಸಾಕಷ್ಟು ಭಿನ್ನಾಭಿಪ್ರಾಯಗಳು ಇರುತ್ತವೆ. ಆದರೆ ಅದರ ದುಷ್ಪರಿಣಾಮಗಳು ಅಭಿವೃದ್ಧಿ ಮೇಲೆ ಬೀಳಬಾರದು. ದೇಶದಲ್ಲಿ ಹೆಚ್ಚುತ್ತಿರುವ ದ್ವೇಷ, ಮತ್ಸರ, ಮತೀಯ-ಧಾರ್ಮಿಕ ಕಲಹಗಳು ಕೊನೆಯಾಗಬೇಕಾಗಿದೆ ಎಂದರು.
ಸಾವಿರಾರು ದೇಶಭಕ್ತರ ಹೋರಾಟ, ತ್ಯಾಗ, ಪರಿಶ್ರಮಗಳ ಫಲವನ್ನು ನಾವಿಂದೂ ಅನುಭವಿಸುತ್ತಿದ್ದು, ಇಂದು ನಮ್ಮ ಕೈಯಲ್ಲಿರುವ ಸ್ವಾತಂತ್ರ್ಯದ ದೀವಿಗೆಯನ್ನು ಮುಂದಿನ ತಲೆಮಾರಿಗೆ ಜಾಗರೂಕತೆಯಿಂದ ತಲುಪಿಸುವ ಅತ್ಯಂತ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ಹೊಣೆಗಾರಿಕೆ ಅರಿತು ನಾವು ಮುನ್ನಡೆಯಬೇಕಾಗಿದೆ ಎಂದರು.ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಬಡತನ, ನಿರಕ್ಷರತೆ ಮತ್ತು ನಿರುದ್ಯೋಗ, ಬೆಲೆಯೇರಿಕೆ ಸಮಸ್ಯೆಗಳ ನಿವಾರಣೆಗೆ ಪಕ್ಷಾತೀತವಾಗಿ ಹೋರಾಟ ಮಾಡುವ ಅವಶ್ಯಕತೆಯಿದೆ ಎಂದರು.
ಸ್ವಾತಂತ್ರ್ಯೋತ್ಸವ ನಿಮಿತ್ತ ಶಾಲಾ-ಕಾಲೇಜು ಮಕ್ಕಳಿಗಾಗಿ ಆಯೋಜಿಸಿದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಹಾಗೂ ಪಾಕಿಸ್ತಾನ ಯುದ್ಧದಲ್ಲಿ ಭಾಗವಹಿಸಿ ಮಾಜಿ ಯೋಧ ಡಿಸೋಜಾ ಅವರನ್ನು ಸನ್ಮಾನಿಸಲಾಯಿತು.
ಸಂಭ್ರಮಾಚರಣೆ: ತಾಲೂಕಿನೆಲ್ಲೆಡೆ ಸ್ವಾತಂತ್ರ್ಯೋತ್ಸವದ ನಿಮಿತ್ತ ವಿವಿಧ ಸ್ಫರ್ಧೆಗಳು , ಸಾಂಸ್ಕೃತಿಕ ಸಮಾರಂಭಗಳು ನಡೆದವು.