ಪ್ರತಿಯೊಂದು ಅರ್ಜಿಯ ಸಮಸ್ಯೆ ಗಂಭೀರವಾಗಿ ಪರಿಗಣಿಸಿ, ಪರಿಹಾರ ಒದಗಿಸಿ

KannadaprabhaNewsNetwork |  
Published : Sep 13, 2026, 02:00 AM IST
ಚಿತ್ರದುರ್ಗ ಸಚಿವ | Kannada Prabha

ಸಾರಾಂಶ

ಸಚಿವ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಪರಶುರಾಂಪುರದಲ್ಲಿ ಹೋಬಳಿಮಟ್ಟದ ಪ್ರಜಾಸೇವಾ ಆಂದೋಲನ ಸಭೆ ಸಚಿವ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಪರಶುರಾಂಪುರದಲ್ಲಿ ಹೋಬಳಿಮಟ್ಟದ ಪ್ರಜಾಸೇವಾ ಆಂದೋಲನ ಸಭೆ

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ಸಾರ್ವಜನಿಕರಿಂದ ಸ್ವೀಕರಿಸುವ ಅರ್ಜಿಗಳನ್ನು ಕೇವಲ ರಿಜಿಸ್ಟ್ರೇಷನ್ ಉದ್ದೇಶಕ್ಕಾಗಿ ಸೀಮಿತಗೊಳಿಸಬಾರದು. ಇಲ್ಲಿ ಚರ್ಚೆಯಾಗುವ ಮತ್ತು ಸಲ್ಲಿಕೆಯಾಗುವ ಪ್ರತಿಯೊಂದು ಅರ್ಜಿಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರ ಒದಗಿಸಬೇಕು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚಳ್ಳಕೆರೆ ತಾಲೂಕಿನ ಪರಶುರಾಂಪುರದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಶನಿವಾರ ಪ್ರಜಾಸೇವಾ ಇಲಾಖೆಯಿಂದ ಹಮ್ಮಿಕೊಂಡಿದ್ದ ಹೋಬಳಿಮಟ್ಟದ ‘ಪ್ರಜಾಸೇವಾ ಆಂದೋಲನ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಬರಗಾಲದ ವಾತಾವರಣವಿದ್ದು, ರೈತರು ಹಾಗೂ ಸಾರ್ವಜನಿಕರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಸಾರ್ವಜನಿಕರೊಡನೆ ಸೌಜನ್ಯದಿಂದ ನಡೆದುಕೊಂಡು ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸಬೇಕು ಎಂದರು.

ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಹಮ್ಮಿಕೊಂಡಿರುವ ‘ಪ್ರಜಾಸೇವಾ ಆಂದೋಲನ’ ಯಾವುದೇ ಕಾರಣಕ್ಕೂ ತಾತ್ಕಾಲಿಕವಲ್ಲ. ಇದು ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ನಿರಂತರವಾಗಿ ನಡೆಯಲಿದೆ ಎಂದು ತಿಳಿಸಿದ ಅವರು, ತಾಲೂಕು ಹಾಗೂ ಹೋಬಳಿ ಮಟ್ಟದ ಅಧಿಕಾರಿಗಳು ತಮ್ಮ ಕಾರ್ಯವೈಖರಿ ಮತ್ತು ಮನಸ್ಥಿತಿ ಬದಲಾಯಿಸಿಕೊಳ್ಳಬೇಕು. ಎರಡನೇ ಶನಿವಾರ, ನಾಲ್ಕನೇ ಶನಿವಾರ ಅಥವಾ ರಜಾದಿನಗಳ ನೆಪವೊಡ್ಡಿ ಸಾರ್ವಜನಿಕ ಸೇವೆಯಿಂದ ದೂರ ಉಳಿಯಬಾರದು. ಹಳ್ಳಿಗಳಿಂದ ತಮ್ಮ ದಿನನಿತ್ಯದ ಕೆಲಸ ಕಾರ್ಯಗಳನ್ನು ಬಿಟ್ಟು ಬರುವ ಜನಸಾಮಾನ್ಯರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯ. ತಹಸೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರತಿ ಶನಿವಾರ ನಿರಂತರವಾಗಿ ನಡೆಯುವ ಈ ಸಭೆಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ಜನರ ಕುಂದುಕೊರತೆಗಳನ್ನು ಆಲಿಸಬೇಕು ಎಂದು ಸಚಿವರು ಸೂಚನೆ ನೀಡಿದರು.

ನಾನು ಚಳ್ಳಕೆರೆ ಕ್ಷೇತ್ರದಲ್ಲಿ ಮೂರನೇ ಬಾರಿಗೆ ಶಾಸಕನಾಗಿ ಆಯ್ಕೆಯಾಗಿದ್ದು, ಕ್ಷೇತ್ರಾದ್ಯಂತ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸತತ ಸಭೆ ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಕೋವಿಡ್ ಆತಂಕದ ಸಂದರ್ಭದಲ್ಲೂ ಪಂಚಾಯಿತಿ ಮಟ್ಟದಲ್ಲಿ ಇಂತಹ ಸಭೆಗಳನ್ನು ನಡೆಸಿ ಜನರಿಗೆ ಆಸರೆಯಾಗಿದ್ದೆವು. ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ತಲುಪಿಸಲು ಇಂತಹ ಜನಸಂಪರ್ಕ ಸಭೆಗಳು ಅತ್ಯಂತ ಪೂರಕವಾಗಿವೆ ಎಂದು ನೆನಪಿಸಿಕೊಂಡರು.

ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರವು ಜನರ ಮನೆಬಾಗಿಲಿಗೆ ಆಡಳಿತ ತಲುಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿದ್ದು, ಪ್ರತಿಯೊಬ್ಬ ಅಧಿಕಾರಿಯೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಪ್ರಜಾಸೇವಾ ಆಂದೋಲನವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಉಪ ವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ಜನರ ಸಮಸ್ಯೆಗಳನ್ನು ಜನರ ಮನೆ ಬಾಗಿಲಿಗೆ ಹೋಗಿ ಪರಿಹರಿಸುವ ಉದ್ದೇಶದಿಂದ ಪ್ರಜಾಸೇವಾ ಅಭಿಯಾನ ಮಾಡಲಾಗುತ್ತಿದೆ. ಸ್ಥಳದಲ್ಲಿಯೇ ಅಥವಾ ಒಂದು ವಾರದೊಳಗೆ ಅಹವಾಲು ಸ್ವೀಕರಿಸಿದ ಅರ್ಜಿಗಳಿಗೆ ಪರಿಹಾರ ಸಿಗುವಂತೆ ಮಾಡುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಸ್ವೀಕರಿಸಲಾದ 79ಕ್ಕೂ ಹೆಚ್ಚು ಅರ್ಜಿಗಳನ್ನು ಸಚಿವ ಟಿ.ರಘುಮೂರ್ತಿ ಅವರು ಸಾರ್ವಜನಿಕರ ಸಮ್ಮುಖದಲ್ಲೇ ಪರಿಶೀಲಿಸಿ ಸೂಕ್ತ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಬಾಬು, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್, ತಹಸೀಲ್ದಾರ್ ರೆಹಾನ್ ಪಾಷಾ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್, ತಾಲೂಕು ಪಂಚಾಯಿತಿ ಇಒ ಶಶಿಧರ್, ತಾಲೂಕು ಆರೋಗ್ಯಾಧಿಕಾರಿ ಡಾ.ಕಾಶೀ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

---

(ಫೋಟೋ ಕಳುಹಿಸಿದೆ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಕರು ಉತ್ತಮ ವ್ಯಕ್ತಿತ್ವ ರೂಪಿಸುವ ಶಿಲ್ಪಿಗಳು: ಪ್ರದೀಪ್
ವಿಕಸಿತ ಭಾರತ ಆನ್‌ಲೈನ್‌ ರಸಪ್ರಶ್ನೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳಿ