ಕನ್ನಡಪ್ರಭ ವಾರ್ತೆ ಹಾಸನ
ನಗರದ ವಿಜಯನಗರ ಬಡಾವಣೆಯಲ್ಲಿ ಭಾನುವಾರ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಸಂಘದ ಸದಸ್ಯರು, ಹಿರಿಯ ನಾಗರಿಕರು ಹಾಗೂ ನಿವಾಸಿಗಳು ಕೆ. ಸಿದ್ದೇಗೌಡ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಎರಡು ನಿಮಿಷ ಮೌನಾಚರಣೆ ಮೂಲಕ ಗೌರವ ನಮನ ಸಲ್ಲಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಬಿ.ಎಚ್. ನಾರಾಯಣಗೌಡ ಮಾತನಾಡಿ, ಕೆ. ಸಿದ್ದೇಗೌಡ ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಬಡಾವಣೆಯ ಸಮಗ್ರ ಅಭಿವೃದ್ಧಿಗೆ ಅಪಾರ ಶ್ರಮ ವಹಿಸಿದ್ದರು. ಮೂಲಸೌಕರ್ಯಗಳ ಅಭಿವೃದ್ಧಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಸಂಘವನ್ನು ಸಕ್ರಿಯವಾಗಿ ಮುನ್ನಡೆಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು. ಅವರ ಸರಳ ವ್ಯಕ್ತಿತ್ವ, ಜನಸ್ನೇಹಿ ನಡವಳಿಕೆ ಮತ್ತು ಸೇವಾ ಮನೋಭಾವ ಎಲ್ಲರಿಗೂ ಮಾದರಿಯಾಗಿದ್ದು, ಅವರ ಅಗಲಿಕೆ ಬಡಾವಣೆಗೆ ತುಂಬಲಾರದ ನಷ್ಟವಾಗಿದೆ. ಅವರು ಮಾಡಿದ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳು ಮುಂದಿನ ಪೀಳಿಗೆಗೂ ಪ್ರೇರಣೆಯಾಗಲಿದ್ದು, ಅವರ ಆದರ್ಶಗಳನ್ನು ಮುಂದುವರಿಸಿಕೊಂಡು ಬಡಾವಣೆಯ ಅಭಿವೃದ್ಧಿಗೆ ಸಂಘ ಬದ್ಧವಾಗಿದೆ ಎಂದು ತಿಳಿಸಿದರು.ಸಭೆಯಲ್ಲಿ ಉಪಸ್ಥಿತರಿದ್ದ ಸದಸ್ಯರು ಕೆ. ಸಿದ್ದೇಗೌಡ ಅವರೊಂದಿಗೆ ಕಳೆದ ನೆನಪುಗಳನ್ನು ಹಂಚಿಕೊಂಡು, ಸಮಾಜಮುಖಿ ಕಾರ್ಯಗಳ ಮೂಲಕ ಅವರು ಜನಮನದಲ್ಲಿ ಅಚ್ಚಳಿಯದ ಸ್ಥಾನ ಗಳಿಸಿದ್ದರು ಎಂದು ಸ್ಮರಿಸಿದರು.ಈ ಸಂದರ್ಭದಲ್ಲಿ ವಿಜಯನಗರ ಬಡಾವಣೆ ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಮಲ್ಲಿಕಾರ್ಜುನ್, ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಖಜಾಂಚಿ ಮೊಗಣ್ಣಗೌಡ, ಸಹ ಕಾರ್ಯದರ್ಶಿ ಬೇಟಚಾರ್ ಸೇರಿದಂತೆ ಸಂಘದ ಪದಾಧಿಕಾರಿಗಳು, ಹಿರಿಯ ನಾಗರಿಕರು ಹಾಗೂ ಬಡಾವಣೆಯ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.