ಹಾನಗಲ್ಲ: ಶಾಸಕ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಮಂಗಳವಾರ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಎಸ್.ಎಂ.ಕೃಷ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮೌನಾಚರಣೆ ನಡೆಸುವ ಮೂಲಕ ಗೌರವ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ನಾಯಕನ ಗುಣಗಾನ ಮಾಡಿ, ಅವರ ಜನಕಲ್ಯಾಣದ ಕಾರ್ಯಕ್ರಮಗಳನ್ನು ಸ್ಮರಿಸಲಾಯಿತು. ನಗರ ಕಾಂಗ್ರೆಸ್ ಅಧ್ಯಕ್ಷ ಮತೀನ್ ಶಿರಬಡಗಿ, ರಾಜಕುಮಾರ ಶಿರಪಂತಿ, ಶಬ್ಬೀರ್ ಯಳವಟ್ಟಿ, ಅಶೋಕ ಜಾಧವ, ಬಸವರಾಜ ಡುಮ್ಮನವರ, ಉಮೇಶ ದೊಡ್ಡಮನಿ, ಪ್ರವೀಣ ಹಿರೇಮಠ, ರುದ್ರಗೌಡ ಬಡಿಗೇರ, ಗೌಸ್ ತಾಂಡೂರ, ಇರ್ಫಾನ್ ಸೌದಾಗರ, ಖಾಲಿದ್ ಶೇಷಗಿರಿ ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಎಸ್.ಎಂ.ಕೃಷ್ಣ ನಿಧನಕ್ಕೆ ಶಾಸಕ ಮಾನೆ ಸಂತಾಪ: ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಶಾಸಕ ಶ್ರೀನಿವಾಸ ಮಾನೆ ಸಂತಾಪ ಸೂಚಿಸಿದ್ದಾರೆ. ಹಿತ, ಮಿತ ಭಾಷಿಯಾಗಿದ್ದ ಅವರು 60 ವರ್ಷಗಳ ಕಾಲ ರಾಜಕಾರಣದಲ್ಲಿ ತಮ್ಮದೇ ಆದ ವಿಶೇಷ ಛಾಪು ಮೂಡಿಸಿದ್ದು, ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರ ಓರ್ವ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದಿದ್ದಾರೆ. ವರನಟ ಡಾ. ರಾಜಕುಮಾರ ಅವರನ್ನು ವೀರಪ್ಪನ್ ಅಪಹರಿಸಿದ್ದ ಸಂದರ್ಭದಲ್ಲಿ ಕ್ಷೇಮವಾಗಿ ವಾಪಸ್ ಕರೆದುಕೊಂಡು ಬರುವಲ್ಲಿ ಕೃಷ್ಣ ಅವರು ಮುಖ್ಯ ಪಾತ್ರ ವಹಿಸಿದ್ದರು. ಅವರ ಆಡಳಿತದ ಸಂದರ್ಭದಲ್ಲಿ ರಾಜ್ಯದಲ್ಲಿ ಬರಗಾಲ ಆವರಿಸಿದ್ದಾಗ ವೈಜ್ಞಾನಿಕವಾಗಿ ಮೋಡ ಬಿತ್ತನೆ ಮಾಡಿ ಮಳೆ ಬರಿಸಲು ಮುಂದಾಗಿದ್ದರು. ಭೂ ದಾಖಲೆಗಳ ಡಿಜಿಟಲೀಕರಣ, ಸರ್ಕಾರಿ ಶಾಲೆಗಳ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಆರಂಭಿಸಿ ಗಮನ ಸೆಳೆದಿದ್ದ ಎಸ್.ಎಂ.ಕೃಷ್ಣ ಅವರು ಬೆಂಗಳೂರನ್ನು ಸಿಲಿಕಾನ್ ಸಿಟಿಯನ್ನಾಗಿ ಮಾಡಿ, ಐಟಿ, ಬಿಟಿಯಲ್ಲಿ ಬಹುದೊಡ್ಡ ಕ್ರಾಂತಿ ಮಾಡಿದ್ದಾರೆ. ರಾಜ್ಯದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಸಾಕಷ್ಟು ಯೋಜನೆ, ಕಾರ್ಯಕ್ರಮ ರೂಪಿಸಿ, ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಶ್ರೇಯಸ್ಸು ಅವರಿಗೆ ಸಲ್ಲಬೇಕಿದೆ ಎಂದು ಶ್ರೀನಿವಾಸ ಮಾನೆ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.