ಕ್ಷಯರೋಗವು ಒಂದು ಸಾಂಕ್ರಾಮಿಕ ರೋಗವಾಗಿದ್ದು, ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ನಿರಂತರ ವೈದ್ಯಕೀಯ ಚಿಕಿತ್ಸೆ ಪಡೆದರೆ ಇದನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯ.
ಕನ್ನಡಪ್ರಭ ವಾರ್ತೆ ಗದಗ
ಕ್ಷಯರೋಗವು ಒಂದು ಸಾಂಕ್ರಾಮಿಕ ರೋಗವಾಗಿದ್ದು, ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ನಿರಂತರ ವೈದ್ಯಕೀಯ ಚಿಕಿತ್ಸೆ ಪಡೆದರೆ ಇದನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಅರುಂಧತಿ ಕುಲಕರ್ಣಿ ಹೇಳಿದರು.
ಜಿಲ್ಲೆಯ ಡಂಬಳ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಜಗದ್ಗುರು ತೋಂಟದಾರ್ಯ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ಐಟಿಐ) ಆಯೋಜಿಸಲಾಗಿದ್ದ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.
ಗದಗ ಜಿಲ್ಲೆಯಲ್ಲಿ ನ. 3ರಿಂದ 8ರವರೆಗೆ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಹಮ್ಮಿಕೊಳ್ಳಲಾಗಿದೆ. ಎರಡು ವಾರಕ್ಕಿಂತ ಹೆಚ್ಚು ಕಾಲ ಕೆಮ್ಮು, ಸಂಜೆ ವೇಳೆ ಜ್ವರ, ತೂಕದಲ್ಲಿ ತೀವ್ರ ಇಳಿಕೆ, ಕಫದಲ್ಲಿ ರಕ್ತ ಬೀಳುವುದು ಹಾಗೂ ಹಸಿವಾಗದಿರುವುದು ಕ್ಷಯರೋಗದ ಪ್ರಮುಖ ಲಕ್ಷಣಗಳು. ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಕಫ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸಾರ್ವಜನಿಕರು ಹಾಗೂ 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳು ರಕ್ತದಾನಕ್ಕೆ ಮುಂದಾಗಬೇಕು. ಇದೇ ವೇಳೆ ಎಸಿಎಫ್ ತಂಡಗಳು ಪ್ರತಿ ಮನೆಗೆ ಭೇಟಿ ನೀಡಿ ಆರೋಗ್ಯ ಶಿಕ್ಷಣ ನೀಡುವುದರ ಜತೆಗೆ, ಸಂಶಯಾಸ್ಪದ ರೋಗಲಕ್ಷಣ ಇರುವವರನ್ನು ಗುರುತಿಸಿ ತಪಾಸಣೆಗೆ ಒಳಪಡಿಸಬೇಕು ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಿಖಿಲ್ ಹೊಸಮನಿ ಅಧ್ಯಕ್ಷತೆ ವಹಿಸಿದ್ದರು. ಜಗದ್ಗುರು ತೋಂಟದಾರ್ಯ ಐಟಿಐ ಕಾಲೇಜಿನ ಪ್ರಾನ್ಸುಪಾಲ ಮಹೇಶ ಗೌಡರ ಪ್ರಾಸ್ತಾವಿಕವಾಗಿ ಮಾತನಾಡಿದರು.
ವೇದಿಕೆಯಲ್ಲಿ ಅಪರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಎಫ್. ಹನಕನಹಳ್ಳಿ, ಡಂಬಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಶಿಕ್ಷಣಾಧಿಕಾರಿ ಸಿದ್ದಪ್ಪ ಎನ್. ಲಿಂಗದಾಳ, ಮುಂಡರಗಿ ತಾಲೂಕು ಎಸ್‌ಟಿಎಸ್ ಪ್ರವೀಣ ರೆಡ್ಡಿ ಬಿದರಳ್ಳಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಿ.ಬಿ. ನಿಡಗುಂದಿ, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಆರ್.ಸಿ. ಉಪ್ಪಾರ, ಉಪಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ ಸಂಗಮದ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಎಸ್.ಎಸ್. ಬಾರಕೇರ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕಚೇರಿಯ ಎಫ್.ಪಿ. ಮೋದಿನವರ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.