ಕನ್ನಡಪ್ರಭ ವಾರ್ತೆ ತುಮಕೂರು
ಮುಖ್ಯಮಂತ್ರಿಗಳು ಜ.29 ರಂದು ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಉದ್ಘಾಟನೆಗೆ ಸಿದ್ಧವಿರುವ ಕಾಮಗಾರಿಗಳ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತುರ್ತು ಸಭೆ ಕರೆದು ಮುಖ್ಯಮಂತ್ರಿಗಳು ಚಾಲನೆ ನೀಡಲಿರುವ ಅಭಿವೃದ್ಧಿ ಕಾಮಗಾರಿಗಳ ಸ್ಥಳಕ್ಕೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ಉದ್ಘಾಟನೆಗೆ ಸಿದ್ಧವಾಗಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕೆಂದು ಸೂಚಿಸಿದರು.
ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು. ಸ್ಥಳೀಯ ಪಂಚಾಯಿತಿ ಜನಪ್ರತಿನಿಧಿ ಸೇರಿ ಎಲ್ಲಾ ಜನಪ್ರತಿನಿಧಿಗಳಿಗೆ ಆಹ್ವಾನ ಪತ್ರಿಕೆ ವಿತರಣೆ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಉದ್ಘಾಟನೆಗೆ ಸಿದ್ಧವಿರುವ ಕಾಮಗಾರಿಗೆ ಸಂಬಂಧಿಸಿದ ಇಲಾಖೆಗಳ ಸಚಿವರ ಹೆಸರುಗಳನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಬೇಕು ಎಂದು ನಿರ್ದೇಶಿಸಿದರು.ಮುಖ್ಯಮಂತ್ರಿಗಳ ಭೇಟಿ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಗುವ ಕಾಮಗಾರಿಗಳ ಅಡಿಗಲ್ಲು ಸೇರಿದಂತೆ ಕೈಗೊಂಡಿರುವ ಅಗತ್ಯ ಸಿದ್ಧತೆಗಳ ಬಗ್ಗೆ ಇಲಾಖಾವಾರು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಎಲ್ಲಾ ಇಲಾಖಾಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಫಲಾನುಭವಿಗಳ ಪಟ್ಟಿ ಹೊಂದಿರಬೇಕು ಎಂದು ತಿಳಿಸಿದರು.ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಗಣ್ಯ ವ್ಯಕ್ತಿಗಳಿಗಾಗಿ ಪ್ರತ್ಯೇಕ ಆಸನ ವ್ಯವಸ್ಥೆ, ಸಾರ್ವಜನಿಕರಿಗೆ ಆಸನ, ಮೊಬೈಲ್ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದರಲ್ಲದೆ, ಸಂಬಂಧಿಸಿದ ಅಧಿಕಾರಿಗಳು ಜನವರಿ ೨೮ರೊಳಗೆ ಎಲ್ಲಾ ವಿದ್ಯಾರ್ಥಿ ನಿಲಯ, ಶಾಲೆ, ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಯಾವುದೇ ದೂರು ಬಾರದಂತೆ ಮುಖ್ಯಮಂತ್ರಿಗಳ ಭೇಟಿ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ರೂಪಿಸಿ ಯಶಸ್ವಿಗೊಳಿಸಬೇಕೆಂದು ನಿರ್ದೇಶಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ಪಾಲಿಕೆ ಆಯುಕ್ತೆ ಅಶ್ವಿಜ ಸೇರಿದಂತೆ ಪಶುಸಂಗೋಪನೆ, ಕೃಷಿ, ತೋಟಗಾರಿಕೆ, ಲೋಕೋಪಯೋಗಿ ಇಲಾಖೆ, ಪ್ರವಾಸೋದ್ಯಮ, ರೇಷ್ಮೆ, ಟೂಡಾ, ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.