ಕನ್ನಡಪ್ರಭ ವಾರ್ತೆ ತುಮಕೂರು
ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 16ರಂದು ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟ ಉದ್ಘಾಟಿಸುವರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಗೌರ ಉಪಸ್ಥಿತರಿರುವರು.
ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಹಾಗೂ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್, ವಿಧಾನ ಪರಿಷತ್ ಶಾಸಕ ಹಾಗೂ ಫೀಬಾ, ಏಷ್ಯಾ ಮತ್ತು ಕರ್ನಾಟಕ ಒಲಿಂಪಿಕ್ ಸಂಸ್ಥೆ ಅಧ್ಯಕ್ಷ ಡಾ: ಕೆ. ಗೋವಿಂದರಾಜ್ ಅವರು ಆಗಮಿಸುವರು.ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 22ರಂದು ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಘನ ಉಪಸ್ಥಿತಿಯಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು
ಪರಮೇಶ್ವರ್ ಅವರಿಂದ ಕರೆಯೋಲೆ:ಈ ಕ್ರೀಡಾಕೂಟ ತುಮಕೂರು ಇತಿಹಾಸದಲ್ಲೇ ಮೊದಲ ಬಾರಿಗೆ ಆಯೋಜಿಸಲಾಗುತ್ತಿದೆ. ಜಿಲ್ಲೆಯ ಯುವ ಜನರಿಗೆ ಇದು ಸ್ಫೂರ್ತಿಯಾಗಲಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ಹೇಳಿದ್ದಾರೆ.
ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಅಧಿಕೃತ ಪತ್ರ ಬರೆದಿರುವ ಅವರು, ಈ ಕ್ರೀಡಾಕೂಟದಲ್ಲಿ ವಿವಿಧ 27 ಕ್ರೀಡೆಗಳು ನಡೆಯುತ್ತಿದ್ದು, ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಸೇರಿದಂತೆ ಸುಮಾರು 9ಸಾವಿರ ಕ್ರೀಡಾಪಟುಗಳು ಈ ಕೂಟದಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕ ಒಲಿಂಪಿಕ್ ಸಂಸ್ಥೆ ಪ್ರತಿ ವರ್ಷ ಒಂದೊಂದು ಜಿಲ್ಲೆಯಲ್ಲಿ ಕರ್ನಾಟಕ ಕ್ರೀಡಾಕೂಟವನ್ನು ಆಯೋಜಿಸುತ್ತಾ ಬಂದಿದ್ದು, ಪ್ರಸಕ್ತ ಸಾಲಿನ ಕ್ರೀಡಾಕೂಟದ ಆತಿಥ್ಯ ವಹಿಸುವ ಅವಕಾಶವನ್ನು ತುಮಕೂರು ಜಿಲ್ಲೆಗೆ ನೀಡಿರುವುದು ನಮ್ಮೆಲ್ಲ ತುಮಕೂರು ಜಿಲ್ಲೆಯ ಕ್ರೀಡಾಸಕ್ತರಿಗೆ ಹಾಗೂ ನಾಗರಿಕರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದ್ದಾರೆ.2030 ರ ಕಾಮನ್ ವೆಲ್ತ್ ಕ್ರೀಡಾಕೂಟ ಭಾರತದಲ್ಲಿ ನಡೆಯುತ್ತಿದೆ ಎಂಬುದು ಸಂತಸದ ವಿಷಯ. ಅಂತೆಯೇ, 2036 ರ ಒಲಿಂಪಿಕ್ ಕ್ರೀಡಾಕೂಟಕ್ಕೂ ಭಾರತ ಆತಿಥ್ಯ ವಹಿಸುವ ಎಲ್ಲಾ ಸಾಧ್ಯತೆಗಳೂ ಇರುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಯುವ ಸಮುದಾಯವನ್ನು ಕ್ರೀಡೆಗಳಿಗೆ ಪ್ರೋತ್ಸಾಹಿಸುವ ಅಗತ್ಯವಿದೆ. ಇದಕ್ಕೆ ಪೂರಕವಾಗಿ ಇದೇ ಜನವರಿ 16 ರಿಂದ 22 ರವರೆಗೆ ನಡೆಯಲಿರುವ ಕರ್ನಾಟಕ ಕ್ರೀಡಾಕೂಟ ಸ್ಫೂರ್ತಿಯಾಗಲಿದೆ ಎಂದು ಹೇಳಿದ್ದಾರೆ.
ಜನವರಿ 16ರಿಂದ 22 ರವರೆಗೆ ನಡೆಯಲಿರುವ ಕರ್ನಾಟಕ ಕ್ರೀಡಾಕೂಟವು ತುಮಕೂರು ನಗರದ ವಿವಿಧ ಸ್ಥಳಗಳಲ್ಲಿ ನಡೆಯಲಿವೆ. ಅರ್ಚರಿ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಬ್ಯಾಸ್ಕೆಟ್ ಬಾಲ್, ಬಾಕ್ಸಿಂಗ್, ಕೆನೋಯಿಂಗ್ ಮತ್ತು ಕಯಾಕಿಂಗ್, ಸೈಕ್ಲಿಂಗ್, ಫೆನ್ಸಿಂಗ್, ಫುಟ್‌ಬಾಲ್, ಜಿಮ್ನಾಸ್ಟಿಕ್, ಹ್ಯಾಂಡ್‌ಬಾಲ್, ಜೂಡೋ, ಕಬ್ಬಡ್ಡಿ, ಖೋ-ಖೋ, ಲಾನ್ ಟೆನ್ನಿಸ್, ನೆಟ್‌ಬಾಲ್, ಟೇಬಲ್ ಟೆನ್ನಿಸ್, ಟೇಕ್ವಾಂಡೊ, ವಾಲಿಬಾಲ್, ವೇಯ್ಟ್ಲಿಫ್ಟಿಂಗ್, ರಸ್ಲಿಂಗ್, ಊಶೂ ಕ್ರೀಡೆಗಳು ವಿವಿಧ ಅಂಕಣಗಳಲ್ಲಿ ನಡೆಯಲಿದ್ದು, ಈ ಎಲ್ಲಾ ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ತಾವೂ ಕ್ರೀಡಾಸಕ್ತಿಯನ್ನು ಬೆಳೆಸಿಕೊಳ್ಳಬೇಕು. ಈ ಮೂಲಕ ರಾಜ್ಯ, ದೇಶಕ್ಕೆ ಕೀರ್ತಿ ತರಬೇಕು ಎಂದು ಅವರು ಆಶಿಸಿದ್ದಾರೆ.