ಕನ್ನಡಪ್ರಭ ವಾರ್ತೆ, ತುಮಕೂರುರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ತುಂಬುತ್ತಿರುವ ನೆನಪಿಗೆ ರಾಜ್ಯ ಸರ್ಕಾರ ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ಜನತೆಗೆ ಸಮರ್ಪಣೆ ಮಾಡುವ ವಿಶೇಷ ಕಾರ್ಯಕ್ರಮ ಸಾಧನೆಯ ಸೇವೆಗಳ ಸಮರ್ಪಣೆ ತುಮಕೂರಿನಲ್ಲಿ 19ರಂದು ನಡೆಯುತ್ತಿದ್ದು ಇದಕ್ಕಾಗಿ ಕಲ್ಪತರು ಜಿಲ್ಲೆ ಸಂಪೂರ್ಣವಾಗಿ ಸಜ್ಜಾಗಿದೆ. ಕಳೆದ 3 ವರ್ಷಗಳು ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳನ್ನು ರಾಜ್ಯದ ಜನತೆಗೆ ಅರ್ಪಿಸಲಾಗಿದ್ದು ಈ ಸಂಬಂಧ ಉತ್ತರದಾಯಿತ್ವವಾಗಿ ತುಮಕೂರು ಜಿಲ್ಲೆಯಲ್ಲಿ ಕಂದಾಯ ಇಲಾಖೆಯಲ್ಲಿ ಆಗಿರುವ ಅಭೂತಪೂರ್ವ ಅಭಿವೃದ್ಧಿ ಕಾರ್ಯಕ್ರಮವನ್ನು ಈ ಸಮಾವೇಶದ ಮೂಲಕ ಫಲಾನುಭವಿಗಳಿಗೆ ಹಕ್ಕುಪತ್ರ ಸವಲತ್ತುಗಳನ್ನು ನೀಡುವ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.ಗಿನ್ನಿಸ್ ದಾಖಲೆ.....ಈ ಸಾಧನೆಯಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದ್ದು, ಈ ಸಾಧನೆಗಾಗಿ ಗಿನ್ನಿಸ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ದಾಖಲೆ ಸೇರಿದ್ದು, ಮಂಗಳವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಈ ಸಾಧನೆಯ ಪ್ರಶಸ್ತಿಯನ್ನು ಪ್ರಧಾನ ಮಾಡಲು ಇಂಗ್ಲೆಡ್‌ನಿಂದ ಗಿನ್ನಿಸ್ ಸಂಸ್ಥೆಯವರು ಆಗಮಿಸಲಿದ್ದಾರೆ. ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ರಾಜ್ಯ ಸರ್ಕಾರದ ಎಲ್ಲಾ ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ.ತುಮಕೂರು ಜಿಲ್ಲೆಯ ಕಂದಾಯ ಇಲಾಖೆಯ ವಿವಿಧ ಕಾರ್ಯಕ್ರಮಗಳಡಿ ಇ-ಪೌತಿ ಆಂದೋಲನಾ - 1,06,000; ದರಖಾಸ್ತು ಪೋಡಿ - 24,256; ಕಂದಾಯ ಗ್ರಾಮ ಹಕ್ಕು ಪತ್ರ - 20,666 ಮತ್ತು ಪೋಡಿ ಮುಕ್ತ ಅಭಿಯಾನ – 1570 ಸೇರಿದಂತೆ ಒಟ್ಟು 1,52,492 ಫಲಾನುಭವಿಗಳಿಗೆ ಹಕ್ಕು ಪತ್ರ/ಆದೇಶ ಪತ್ರಗಳನ್ನು ವಿತರಣೆ ಮಾಡಲಾಗುತ್ತಿದೆ. ಅಲ್ಲದೆ, ರಾಜ್ಯದಲ್ಲಿಯೇ ದೊಡ್ಡ ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಒಟ್ಟು 600 ಹುದ್ದೆಗಳ ನೇಮಕಾತಿ ಆದೇಶವನ್ನು ಕಾರ್ಯಕ್ರಮದಲ್ಲಿ ನೀಡಲಾಗುವುದು.ಕಂದಾಯ ಇಲಾಖೆ ಹಾಗೂ ಪಂಚಾಯತಿ ಹಂತದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಸುಮಾರು 3 ಸಾವಿರ ಬಸ್ಸುಗಳಲ್ಲಿ ಫಲಾನುಭವಿಗಳು ಆಗಮಿಸುತ್ತಿದ್ದು, ಬಸ್ಸು ಹೊರಡುವ ಜಾಗದಲ್ಲಿಯೇ ಫಲಾನುಭವಿಗಳಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಫಲಾನುಭವಿಗಳ ಸುರಕ್ಷತೆ ದೃಷ್ಟಿಯಿಂದ ಕರೆತರಲು ಮತ್ತು ವಾಪಸ್ ಕರೆದುಕೊಂಡು ಹೋಗಲು ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಬಸ್ಸು ಹೊರಡುವ ಜಾಗದಿಂದ ಜಿಪಿಎಸ್ ವ್ಯವಸ್ಥೆ ಮೂಲಕ ಮಾರ್ಗದ ಮೇಲೆ ನಿಗಾವಹಿಸಲು ಸೂಚಿಸಲಾಗಿದೆ. ಜಿಲ್ಲೆಯಾದ್ಯಂತ ಸುಮಾರು 1,52,000ಕ್ಕೂ ಹೆಚ್ಚು ಫಲಾನುಭವಿಗಳೇ ಇದ್ದು, ಒಟ್ಟು ಸುಮಾರು 2 ಲಕ್ಷಕ್ಕೂ ಹೆಚ್ಚಿನ ಜನರು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಸುರಕ್ಷತೆ ದೃಷ್ಟಿಯಿಂದ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಹಾಗೂ ಕಾರ್ಯಕ್ರಮದ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ 15 ಅಂಬುಲೆನ್ಸ್‌ಗಳನ್ನು ನುರಿತ ವೈದ್ಯಕೀಯ ಸಿಬ್ಬಂದಿ, ಅಗ್ನಿಶಾಮಕ ವಾಹನಗಳನ್ನು ನಿಯೋಜನೆ ಮಾಡಲಾಗಿದೆ. ಕಾರ್ಯಕ್ರಮದ ಸ್ಥಳದಲ್ಲಿ ಆಯಾ ಗ್ಯಾಲರಿಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಮತ್ತು ಮಜ್ಜಿಗೆಯ ವ್ಯವಸ್ಥೆಯನ್ನು ಮಾಡಲಾಗಿದ್ದು, ಅದರ ನಿರ್ವಹಣೆಗಾಗಿ ವಿವಿಧ ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿ ನಿಯೋಜಿಸಲಾಗಿದೆ.