ಬೆಂಗಳೂರು : ನಗರದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಮುಂದಿನ ಎರಡ್ಮೂರು ದಿನ ಅರೇಂಜ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸನ್ನದ್ಧರಾಗಿ ಕಾರ್ಯನಿರ್ವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಸಂಬಂಧ ಅಧಿಕಾರಿಗಳೊಂದಿಗೆ ನಡೆದ ಆನ್‌ಲೈನ್ ಸಭೆಯಲ್ಲಿ ಮಾತನಾಡಿದ ಅವರು, ನಾಗರಿಕರಿಗೆ ಯಾವುದೇ ಸಮಸ್ಯೆಗಳಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜಲಾವೃತವಾಗಿರುವ ಪ್ರದೇಶಗಳ ಬಳಿ ನಿಗಾವಹಿಸಬೇಕು. ಸಮಸ್ಯೆಯಾಗುವ ಸಂಭವವಿದ್ದರೆ ಸ್ಥಳೀಯ ನಿವಾಸಿಗಳನ್ನು ಕೂಡಲೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ವ್ಯವಸ್ಥೆ ಮಾಡಬೇಕೆಂದು ತಿಳಿಸಿದರು.
ಸಹಾಯವಾಣಿ ಸಂಖ್ಯೆ 1533ಗೆ ಕರೆ ಮಾಡಿ: ಮಳೆ ಸಮಸ್ಯೆಗಳಿಗೆ ಪಾಲಿಕೆಯ ಉಚಿತ ಸಹಾಯವಾಣಿ 1533 ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು. ನಗರದ 8 ವಲಯ ವ್ಯಾಪ್ತಿಯಲ್ಲಿ 8 ನಿಯಂತ್ರಣ ಕೊಠಡಿಗಳಿದ್ದು, ಪಾಲಿಕೆ ಕೇಂದ್ರ ಕಛೇರಿಯಲ್ಲಿ 1 ನಿಯಂತ್ರಣ ಕೊಠಡಿಗೆ ಕರೆ ಮಾಡಿ ದೂರು ನೀಡಬಹುದು ಎಂದು ಬಿಬಿಎಂಪಿ ತಿಳಿಸಿದೆ.
ರಸ್ತೆಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಿ: ರಸ್ತೆಗಳಲ್ಲಿ ನೀರು ನಿಲ್ಲುವುದರಿಂದ ಸಂಚಾರ ದಟ್ಟಣೆಯಾಗುವುದನ್ನು ತಪ್ಪಿಸಲು ಮೂಲಸೌಕರ್ಯ ವಿಭಾಗದ ಅಧಿಕಾರಿಗಳು ಎಲ್ಲ ಪ್ರಮುಖ ರಸ್ತೆಗಳಲ್ಲಿ ಪರಿಶೀಲಿಸಿ ನೀರು ನಿಲ್ಲದಂತೆ ಸೂಕ್ತ ಕ್ರಮ ವಹಿಸಬೇಕು. ಪಾಲಿಕೆ ಸಿಬ್ಬಂದಿಯ ಸಹಯೋಗದೊಂದಿಗೆ ತ್ಯಾಜ್ಯವನ್ನು ತೆರವುಗೊಳಿಸಿ ಸೈಡ್ ಡ್ರೈನ್‌ಗಳಿಗೆ ಸರಾಗವಾಗಿ ಮಳೆ ನೀರು ಹರಿದು ಹೋಗುವಂತೆ ನೋಡಿಕೊಳ್ಳಲು ನಿರ್ದೇಶನ ನೀಡಿದರು.
ದೂರುಗಳಿಗೆ ತಕ್ಷಣ ಸ್ಪಂದನೆ: ಮಳೆ ನೀರು ನಿಂತಿರುವ, ಜಲಾವೃತವಾಗಿರುವ, ಮರ, ರೆಂಬೆ-ಕೊಂಬೆಗಳು ಧರೆಗುರುಳಿರುವುದು ಸೇರಿದಂತೆ ಇನ್ನಿತರ ಸಮಸ್ಯೆಗಳ ಕುರಿತು ನಾಗರಿಕರಿಂದ ನಿಯಂತ್ರಣ ಕೊಠಡಿಗೆ ಬರುವ ದೂರುಗಳಿಗೆ ಕೂಡಲೆ ಸ್ಪಂದಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು. ರಾಜಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿದು ಹೋಗುವಂತೆ ನೋಡಿಕೊಳ್ಳಬೇಕು ಎಂದು ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದರು.
ಸಭೆಯಲ್ಲಿ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ. ಹರೀಶ್ ಕುಮಾರ್, ವಲಯ ಆಯುಕ್ತರು, ಪ್ರಧಾನ ಅಭಿಯಂತರರು, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.ಸ