ತುಮಕೂರಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

KannadaprabhaNewsNetwork |  
Published : Nov 30, 2024, 12:45 AM IST
ಮೆರವಣಿಗೆ ಮೂಲಕ ಆಗಮಿಸಿದ ಸಮ್ಮೇಳನಾಧ್ಯಕ್ಷ ಅಗ್ರಹಾರ ಕೃಷ್ಣಮೂರ್ತಿ | Kannada Prabha

ಸಾರಾಂಶ

ಕಲ್ಪತರುನಾಡು, ಶೈಕ್ಷಣಿಕ ನಗರಿ ತುಮಕೂರಿನಲ್ಲಿ ಎರಡು ದಿನಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಲಾಗಿರುವ ಅಕ್ಷರ ನುಡಿ ಜಾತ್ರೆಗೆ ವಿಧ್ಯುಕ್ತ ಚಾಲನೆ ದೊರೆಯಿತು. 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರಧ್ವಜಾರೋಹಣ, ನಾಡಧ್ವಜಾರೋಹಣ ಹಾಗೂ ಕಸಾಪ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.

ಕನ್ನಡಪ್ರಭ ವಾರ್ತೆ ತುಮಕೂರುಕಲ್ಪತರುನಾಡು, ಶೈಕ್ಷಣಿಕ ನಗರಿ ತುಮಕೂರಿನಲ್ಲಿ ಎರಡು ದಿನಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಲಾಗಿರುವ ಅಕ್ಷರ ನುಡಿ ಜಾತ್ರೆಗೆ ವಿಧ್ಯುಕ್ತ ಚಾಲನೆ ದೊರೆಯಿತು.ನಗರದಲ್ಲಿ ಕನ್ನಡದ ಸಾಹಿತ್ಯ ತೇರು ಎಳೆಯಲು ನಡೆದಿರುವ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರಧ್ವಜಾರೋಹಣ, ನಾಡಧ್ವಜಾರೋಹಣ ಹಾಗೂ ಕಸಾಪ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು. ನಗರದ ಟೌನ್‌ಹಾಲ್ ವೃತ್ತದಲ್ಲಿರುವ ಮಹಾನಗರ ಪಾಲಿಕೆ ಆವರಣದಲ್ಲಿ 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಅಗ್ರಹಾರ ಡಾ. ಕೃಷ್ಣಮೂರ್ತಿ ಅವರನ್ನು ಜಿಲ್ಲಾ ಕಸಾಪ ಅಧ್ಯಕ್ಷರಾದ ಕೆ.ಎಸ್. ಸಿದ್ದಲಿಂಗಪ್ಪ ಅವರು ಆತ್ಮೀಯವಾಗಿ ಬರ ಮಾಡಿಕೊಂಡರು. ಸಮ್ಮೇಳನಾಧ್ಯಕ್ಷ ಅಗ್ರಹಾರ ಡಾ. ಕೃಷ್ಣಮೂರ್ತಿ ಅವರನ್ನು ಜಿಲ್ಲಾ ಕಸಾಪ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಿ ಬೆಳ್ಳಿರಥದಲ್ಲಿ ಕೂರಿಸಲಾಯಿತು. ನಂತರ ತಾಯಿ ಭುವನೇಶ್ವರಿಗೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕನ್ನಡದ ಬಾವುಟ ತೋರಿಸುವ ಮೂಲಕ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡಲಾಯಿತು. ಟೌನ್‌ಹಾಲ್ ವೃತ್ತದಿಂದ ಆರಂಭವಾದ ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಕನ್ನಡ ಸಾಹಿತ್ಯ, ನಾಡು-ನುಡಿ, ಸಂಸ್ಕೃತಿ, ಪರಂಪರೆ, ಗ್ರಾಮೀಣ ಸೊಗಡನ್ನು ಬಿಂಬಿಸುವ ಜಾನಪದ ಕಲಾ ಮೇಳಗಳಾದ ಆನೆ ಕುಣಿತ, ಕೋಲಾಟ, ವೀರಗಾಸೆ, ನಂದಿಧ್ವಜ, ಡೊಳ್ಳುಕುಣಿತ, ಸೋಮನ ಕುಣಿತ, ನಾಸಿಕ್ ಡೋಲು, ನಾದಸ್ವರ, ಗಾರುಡಿ ಗೊಂಬೆ, ಕೋಳಿ ನೃತ್ಯ ಸೇರಿದಂತೆ ವಿವಿಧ ಕಲಾ ಪ್ರಕಾರಗಳಿಂದ ಅತ್ಯಾಕರ್ಷಕ ಪ್ರದರ್ಶನ ನಡೆಯಿತು.ಮೆರವಣಿಗೆ ಸಾಗಿದ ದಾರಿಯುದ್ದಕ್ಕೂ ಕನ್ನಡ ಡಿಂಡಿಮ, ಕನ್ನಡ ಕಹಳೆ ಮೊಳಗಿತು. ಮಹಾನಗರ ಪಾಲಿಕೆ ಆವರಣದಿಂದ ಆರಂಭವಾದ ಸಮ್ಮೇಳನಾಧ್ಯಕ್ಷರ ಮೆರವಣಿಗೆಯು ಬಿ.ಜಿ.ಎಸ್. ವೃತ್ತ, ಎಂ.ಜಿ. ರಸ್ತೆ, ಗುಂಚಿ ಸರ್ಕಲ್, ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಡಾ.ಅಂಬೇಡ್ಕರ್ ಬೀದಿ ಮಾರ್ಗವಾಗಿ ಸಾಹಿತ್ಯ ಸಮ್ಮೇಳನ ನಡೆಯುವ ಗಾಜಿನ ಮನೆಯಲ್ಲಿ ಭವ್ಯವಾಗಿ ಸಿದ್ದಗೊಳಿಸಿರುವ ಡಾ. ಶ್ರೀ ಶಿವಕುಮಾರ ಮಹಾಸ್ವಾಮೀಜಿ ವೇದಿಕೆಗೆ ತಲುಪಿತು.ಸಮ್ಮೇಳನಾಧ್ಯಕ್ಷರ ಮೆರವಣಿಗೆಯು ವೇದಿಕೆಗೆ ಬರುತ್ತಿದ್ದಂತೆ ನೆರೆದಿದ್ದ ಸಾಹಿತಿಗಳು, ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು ಹಾಗೂ ವಿದ್ಯಾರ್ಥಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತು.ಸಮ್ಮೇಳಾಧ್ಯಕ್ಷರ ಮೆರವಣಿಗೆಗೂ ಮುನ್ನ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಅವರು ರಾಷ್ಟ್ರಧ್ವಜಾರೋಹಣ, ತಹಸೀಲ್ದಾರ್ ರಾಜೇಶ್ವರಿ ಅವರು ನಾಡಧ್ವಜಾರೋಹಣ ಹಾಗೂ ಪರಿಷತ್ತಿನ ಧ್ವಜಾರೋಹಣವನ್ನು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ನೆರವೇರಿಸಿದರು.16ನೇ ಜಿಲ್ಲಾ ಕಸಾಪ ಸಮ್ಮೇಳನದಲ್ಲಿ ಕನ್ನಡ ನಾಡು-ನುಡಿ, ಸಾಹಿತ್ಯ, ಪರಂಪರೆ ಸೇರಿದಂತೆ ಕನ್ನಡ ಕಹಳೆ ಮೊಳಗಿತು. ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ, ಧನಿಯಕುಮಾರ್ ಸೇರಿದಂತೆ ಸಾಹಿತಿಗಳು, ವಿದ್ಯಾರ್ಥಿಗಳು, ಶಿಕ್ಷಕರು, ಕಸಾಪ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ