ಕನ್ನಡಪ್ರಭ ವಾರ್ತೆ ಬೆಂಗಳೂರು
ಗೃಹಲಕ್ಷ್ಮಿ ಯೋಜನೆಯನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ವಿಸ್ತರಿಸಲು ಗುರುವಾರ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಲಿಂಗತ್ವ ಅಲ್ಪಸಂಖ್ಯಾತರನ್ನು ಈ ಯೋಜನೆಗೆ ಪರಿಗಣಿಸುವಾಗ ಜಿಲ್ಲಾಧಿಕಾರಿಗಳಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತ ಗುರುತಿನ ಚೀಟಿಯನ್ನು ದಾಖಲೆಯಾಗಿ ಪರಿಗಣಿಸಲು ಸರ್ಕಾರ ತೀರ್ಮಾನಿಸಿದೆ.
ಇದರಿಂದ ರಾಜ್ಯದಲ್ಲಿರುವ ಸುಮಾರು 60 ಸಾವಿರ ಲಿಂಗತ್ವ ಅಲ್ಪಸಂಖ್ಯಾತರು ಕೂಡ ಗೃಹ ಲಕ್ಷ್ಮಿ ಯೋಜನೆಗೆ ಸರ್ಕಾರ ಅವಕಾಶ ನೀಡಿದಾಗ ಅರ್ಜಿ ಸಲ್ಲಿಸಿ ಯೋಜನೆಯ ಫಲಾನುಭವಿಗಳಾಗಬಹುದು.
ಇದರಿಂದ ವೈಯಕ್ತಿಕವಾಗಿ ಪ್ರತಿಯೊಬ್ಬರಿಗೂ ಮಾಸಿಕ 2 ಸಾವಿರ ರು. ಅನುದಾನ ದೊರೆಯಲಿದೆ ಎಂದು ಸಚಿವರೊಬ್ಬರು ಮಾಹಿತಿ ನೀಡಿದರು.
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ, ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ, ಕೊಪ್ಪಳದ ಹುಲಿಗೆಮ್ಮ ದೇವಾಲಯ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರಗಳ ರಚನೆಗೆ ಸಂಬಂಧಿಸಿದ ಮೂರು ವಿಧೇಯಕಗಳಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2024, ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ 2024, ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ 2024ಕ್ಕೆ ಒಪ್ಪಿಗೆ ನೀಡಿದ್ದು, ಈ ವಿಧೇಯಕಗಳನ್ನು ಹಾಲಿ ಬಜೆಟ್ ಅಧಿವೇಶನದಲ್ಲಿ ಮಂಡಿಸಿ ಸರ್ಕಾರ ಒಪ್ಪಿಗೆ ಪಡೆಯಲಿದೆ.