ಡಿ.21ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ-ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.
ಉಡುಪಿ: ಡಿ. 21 ರಂದು ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಗ್ರಾಮಾಂತರ ಭಾಗದ 53,595 ಹಾಗೂ ನಗರ ಪ್ರದೇಶದ 13,545 ಸೇರಿ ಒಟ್ಟು 67,140 ಮಕ್ಕಳಿಗೆ ಲಸಿಕೆ ಹಾಕಲಾಗುತ್ತದೆ. ಅದಕ್ಕಾಗಿ ಒಟ್ಟು 660 ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ.ಅವರು ಗುರುವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ರ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ 5 ವರ್ಷದೊಳಗಿನ ಯಾವುದೇ ಮಕ್ಕಳು ಪಲ್ಸ್ ಪೊಲೀಯೋ ಲಸಿಕೆಯಿಂದ ತಪ್ಪಿ ಹೋಗದಂತೆ 21 ಟ್ರಾನ್ಸಿಟ್ ಬೂತು, 6 ಮೊಬೈಲ್ ಟೀಮ್, 2788 ಸಿಬ್ಬಂದಿ, 144 ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದರು.ಕಾರಣಾಂತರದಿಂದ ಲಸಿಕೆ ಪಡೆಯಲಾಗದ ಮಕ್ಕಳಿಗೆ ಗ್ರಾಮೀಣ ಭಾಗದಲ್ಲಿ ಡಿ. 22 ಮತ್ತು 23 ರಂದು ಹಾಗೂ ನಗರ ಭಾಗಗಳಲ್ಲಿ ಡಿ. 22 ರಿಂದ 24 ರವರೆಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು ಮನೆಮನೆಗೆ ತೆರಳಿ ಲಸಿಕೆ ಹಾಕಲಿದ್ದು, ಅವರಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.ರೈಲ್ವೆ, ಬಸ್ ನಿಲ್ದಾಣ ಸೇರಿದಂತೆ ಮತ್ತಿತರ ಜನನಿಬಿಡ ಪ್ರದೇಶಗಳಲ್ಲಿ ಡಿ. 21 ರಿಂದ 24 ರ ವರೆಗೆ ಟ್ರಾನ್ಸಿಸ್ಟ್ ಬೂತ್‌ಗಳನ್ನು ತೆರೆಯಲಾಗುತ್ತಿದ್ದು, ಇದರ ಸದುಪಯೋಗವನ್ನು ಪೋಷಕರು ಪಡೆದುಕೊಳ್ಳಬೇಕು ಎಂದರು.
ಸಭೆಯಲ್ಲಿ ಜಿ.ಪಂ. ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ಉಡುಪಿ ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಲತಾ ನಾಯಕ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.