ಜಿಲ್ಲೆಯಲ್ಲಿ 8089 ಅಭ್ಯರ್ಥಿಗಳು । ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ
ಕನ್ನಡಪ್ರಭ ವಾರ್ತೆ ಉಡುಪಿಉನ್ನತ ಶಿಕ್ಷಣಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆಯು ಏ.೧೬ ಮತ್ತು ೧೭ರಂದು ನಡೆಯಲಿದ್ದು, ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಪರೀಕ್ಷಾ ಪಾವಿತ್ರ‍್ಯತೆಯನ್ನು ಕಾಪಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕಿರಣದ ಕೇಸ್ವಾನ್ ವಿಡಿಯೋ ಸಭಾಂಗಣದಲ್ಲಿ ನಡೆದ ೨೦೨೫ ನೇ ಸಾಲಿನ ಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ೮೦೮೯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ ಉಡುಪಿಯಲ್ಲಿ ೧೨, ಕಾರ್ಕಳ ೫ ಹಾಗೂ ಕುಂದಾಪುರದಲ್ಲಿ ತಲಾ ೬ ಸೇರಿದಂತೆ ಒಟ್ಟು ೨೩ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.ಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಯಾವುದೇ ರೀತಿಯ ವಾಚ್‌ಗಳು, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಲಾಗಿದ್ದು, ಪರೀಕ್ಷೆಗಳು ಆರಂಭವಾಗುವ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರದಲ್ಲಿ ಹಾಜರಿರುವಂತೆ ಹಾಗೂ ತಮ್ಮ ಪರೀಕ್ಷಾ ಪ್ರವೇಶ ಪತ್ರದ ಜೊತೆ ಯಾವುದಾದರೊಂದು ಗುರುತಿನ ಚೀಟಿಯನ್ನು (ಕಾಲೇಜಿನ ಗುರುತಿನ ಚೀಟಿ, ಬಸ್ ಪಾಸ್, ಡ್ರೆವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್ ಸೇರಿದಂತೆ ಮತ್ತಿತರ ಪರೀಕ್ಷಾ ಪ್ರಾಧಿಕಾರ ಸೂಚಿಸಿರುವ ಗುರುತಿನ ಚೀಟಿ) ತರುವಂತೆ ತಿಳಿಸಿದರು.
ಪ್ರತೀ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರನ್ನು, ಕೊಠಡಿ ಮೇಲ್ವಿಚಾರಕನ್ನು ನೇಮಿಸಲಾಗುವುದು ಎಂದ ಅವರು, ಎಲ್ಲ ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಸಿಸಿ ಕ್ಯಾಮರ ಅಳವಡಿಸಲಾಗುತ್ತದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀ. ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಿ, ಸೂಕ್ತ ಪೊಲೀಸ್ ಭದ್ರತೆ ನೀಡಲಾಗುವುದು ಎಂದರು.ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗದಂತೆ ಎಚ್ಚರವಹಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಉಪ ಕಾರ್ಯದರ್ಶಿ ಶ್ರೀನಿವಾಸ್ ರಾವ್, ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ, ಕಾಲೇಜು ಪ್ರಾಂಶುಪಾಲರು ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.