ಉಡುಪಿ: ನೀಟ್ ಪರೀಕ್ಷೆಯ ಪ್ರಶ್ನಾಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಧಿಸಿದಂತೆ ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬ್ರಹ್ಮಗಿರಿ ಸರ್ಕಲ್ ನಲ್ಲಿ ಮಂಗಳವಾರ ರಸ್ತೆ ತಡೆ ಪ್ರತಿಭಟನೆ ನಡೆಯಿತು.ಬ್ರಹ್ಮಗಿರಿ ಸರ್ಕಲ್ ಬಳಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಕೇಂದ್ರ ಶಿಕ್ಷಣ ಸಚಿವರ ವಿರುದ್ಧ ತೀವ್ರ ಆಕ್ರೋಶ ಘೋಷಣೆಗಳನ್ನು ಕೂಗಿದರು. ನಂತರ ಪ್ರತಿಭಟನಾಕಾರರು ಕೆಲಕಾಲ ರಸ್ತೆ ತಡೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಗೊಂದಲದ ವಾತಾವರಣ ನಿರ್ಮಾಣವಾಯಿತು. ನಂತರ ಪೊಲೀಸರು ಪ್ರಮುಖ ನಾಯಕರನ್ನು ವಶಕ್ಕೆ ಪಡೆದು ಕರೆದೊಯ್ದರು.ಪ್ರತಿಭಟನೆಯಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್, ಪಕ್ಷದ ಪ್ರಮುಖರಾದ ರಮೇಶ್ ಕಾಂಚನ್, ಹರೀಶ್ ಕಿಣಿ, ವೆರೋನಿಕಾ ಕರ್ನೇಲಿಯೋ, ಅಣ್ಣಯ್ಯ ಶೇರಿಗಾರ್, ಮುರಳಿ ಶೆಟ್ಟಿ, ಕುಶಲ ಶೆಟ್ಟಿ ಇಂದ್ರಾಳಿ, ಪ್ರಖ್ಯಾತ್ ಶೆಟ್ಟಿ, ರೋಶನಿ ವಲಿವೆರಾ, ಇಸ್ಮಾಯಿಲ್ ಅತ್ರಾಡಿ ಮುಂತಾದವರು ಭಾಗವಹಿಸಿದ್ದರು.