ಕನ್ನಡಪ್ರಭ ವಾರ್ತೆ ಉಡುಪಿ
ಅಂಬೇಡ್ಕರ್ ಅವರನ್ನು ಅವಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ. ಟಿ. ರವಿ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬ್ರಹ್ಮಗಿರಿಯ ಆಸ್ಕರ್ ಫರ್ನಾಂಡಿಸ್ ವೃತ್ತದ ಬಳಿ ಶುಕ್ರವಾರ ಪ್ರತಿಭಟನೆ ನಡೆಯಿತು.ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಅಂಬೇಡ್ಕರ್ ಬಿಜೆಪಿಗೆ ನುಂಗಲಾರದ ಬಿಸಿ ತುತ್ತಾಗಿದ್ದಾರೆ. ಬಿಜೆಪಿಗೆ ಕೇವಲ ಅಧಿಕಾರದ ಕುರ್ಚಿಯನ್ನೇರಲು ಅಂಬೇಡ್ಕರ್ ಅವರ ಸಂವಿಧಾನ ಬೇಕು, ಆದರೆ ಪಾಲನೆ ಮಾಡುವುದಕ್ಕೆ ಸಂವಿಧಾನ ಬೇಡ. ಆದ್ದರಿಂದಲೇ ಬಿಜೆಪಿ ಸರ್ಕಾರ ಸಂವಿಧಾನಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.
ಬಿಜೆಪಿಯವರು ಬಾಯಲ್ಲಿ ಮಹಿಳೆಯರನ್ನು ಸಹೋದರಿ, ಮಾತೆ ಎನ್ನುತ್ತಾರೆ. ಆದರೆ ನಿಜವಾಗಿ ಅವರ ಮನಸ್ಸಲ್ಲಿ ಏನಿದೆ ಎಂಬುದನ್ನು ಸಿ. ಟಿ. ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾತನಾಡುತ್ತಾ ಬಹಿರಂಗ ಮಾಡಿದ್ದಾರೆ ಎಂದವರು ಹೇಳಿದರು.ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಟ್ಟು ಅವರನ್ನು ಬಂಧಿಸಬೇಕು, ಸಿ.ಟಿ. ರವಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ, ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಮೊದಲು ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಆಸ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್, ಪಕ್ಷದ ಪ್ರಮುಖರಾದ ಗೋಪಾಲ ಪೂಜಾರಿ, ಉದಯಕುಮಾರ್ ಶೆಟ್ಟಿ ಮುನಿಯಾಲು, ದಿನೇಶ್ ಹೆಗ್ಡೆ ಮೊಳಹಳ್ಳಿ, ಕಿಶನ್ ಹೆಗ್ಡೆ ಕೊಳ್ಕೆಬೈಲು, ರಮೇಶ್ ಕಾಂಚನ್, ಹರೀಶ್ ಕಿಣಿ, ನವೀನ್‌ಚಂದ್ರ ಶೆಟ್ಟಿ, ಗೀತಾ ವಾಗ್ಳೆ, ಡಾ. ಸುನಿತಾ ಶೆಟ್ಟಿ, ಸರಸು ಬಂಗೇರ, ಗಣೇಶ್ ನೆರ್ಗಿ, ಅಬ್ದುಲ್ ಅಜೀಜ್ ಮುಂತಾದವರಿದ್ದರು.