ಶಿರ್ವ ಮಹಿಳಾ ಮಂಡಲಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

KannadaprabhaNewsNetwork | Published : Nov 4, 2024 12:23 AM

ಸಾರಾಂಶ

ಈ ಬಾರಿಯ ಕನ್ನಡ ರಾಜ್ಯೋತ್ಸವ ಆಚರಣೆಯ ಸಲುವಾಗಿ ನಡೆದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಸ್ವೀಕರಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಅವಿಭಾಜ್ಯ ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಮಹಿಳಾ ಮಂಡಲಗಳಲ್ಲೊಂದು ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿರುವ ಶಿರ್ವ ಮಹಿಳಾ ಮಂಡಲ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದೆ.

1962ರಲ್ಲಿ ಗ್ರಾಮೀಣ ಪ್ರದೇಶವಾದ ಶಿರ್ವದಲ್ಲಿ ಕೆಲವು ಸಮಾನ ಮನಸ್ಕ ಮಹಿಳೆಯರು ಶಾಂಭವಿ ಹೆಗ್ಡೆ ಅವರ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿರುವ ಈ ಮಹಿಳಾ ಮಂಡಲವು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ , ಆರೋಗ್ಯ ಹೀಗೆ ಎಲ್ಲ ರಂಗಗಳಲ್ಲೂ ಸೇವೆ ಸಲ್ಲಿಸುವ ಮೂಲಕ ಸುತ್ತಮುತ್ತಲಿನ ಪರಿಸರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ. ಮಹಿಳೆಯರು, ಮಕ್ಕಳು, ವೃದ್ಧರು, ಬಡವರು, ಅನಾರೋಗ್ಯ ಪೀಡಿತರು, ವಿದ್ಯಾರ್ಥಿಗಳು ಹೀಗೆ ಎಲ್ಲರ ಏಳಿಗೆಗಾಗಿ ಹತ್ತು ಹಲವಾರು ಯೋಜನೆಗಳನ್ನು ಹಾಕಿಕೊಂಡು ಜನಮಾನಸದಲ್ಲಿ ನೆಲೆ ನಿಂತಿದೆ.

ಶೈಕ್ಷಣಿಕ ಮಾಹಿತಿ ಕಾರ್ಯಾಗಾರಗಳು, ಆನ್‌ಲೈನ್ ಬೇಸಿಗೆ ಶಿಬಿರಗಳು, ಆಶಾ ಕಾರ್ಯಕರ್ತೆಯರಿಗೆ ಗೌರವ, ಅಂಗನವಾಡಿ ಪುಟಾಣಿಗಳಿಗಾಗಿ ನೃತ್ಯ ಸ್ಪರ್ಧೆಗಳು, ಆರೋಗ್ಯ ತಪಾಸಣಾ ಶಿಬಿರಗಳು, ಶಾಲಾ ಕಾಲೇಜುಗಳಲ್ಲಿ ಮಾದಕ ವ್ಯಸನ, ಸಾಮಾಜಿಕ ಪಿಡುಗುಗಳ ಮಾಹಿತಿ ಕಾರ್ಯಕ್ರಮಗಳ ಆಯೋಜನೆ ಹೀಗೆ ಒಂದಿಲ್ಲೊಂದು ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ.

ಸಂಘದ ಅಧ್ಯಕ್ಷೆ ಡಾ. ಸ್ಫೂರ್ತಿ ಶೆಟ್ಟಿ ಎಲ್ಲ ಸದಸ್ಯರನ್ನು ಒಗ್ಗೂಡಿಸಿಕೊಂಡು ಮಹಿಳಾ ಮಂಡಲವನ್ನು ಮುನ್ನಡೆಸುತ್ತ ಸಂಸ್ಥೆಯ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ. ಈ ಬಾರಿಯ ಕನ್ನಡ ರಾಜ್ಯೋತ್ಸವ ಆಚರಣೆಯ ಸಲುವಾಗಿ ನಡೆದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಸ್ವೀಕರಿಸಿದರು. ಸಂಸ್ಥೆಯ ಈ ಹಿಂದಿನ ಎಲ್ಲ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು, ಹಾಲಿ ಸದಸ್ಯರ ಶ್ರಮ ಹಾಗೂ ಸಹಕಾರ ಕಾರಣವಾಗಿದೆ ಎಂದು ಅಧ್ಯಕ್ಷರು ಹೇಳಿದ್ದಾರೆ.

Share this article