ಕಾರ್ಕಳ: ಉಡುಪಿ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದ ಊಟೋಪಚಾರ, ಫಲಾನುಭವಿಗಳನ್ನು ಕರೆತರಲು ಗ್ರಾಮ ಪಂಚಾಯಿತಿಗಳ ಸ್ವಂತ ನಿಧಿಯಿಂದ ತಲಾ ಗರಿಷ್ಠ 25 ಸಾವಿರ ರು. ವೆಚ್ಚ ಭರಿಸುವಂತೆ ಹೊರಡಿಸಿರುವ ಆದೇಶಕ್ಕೆ ಶಾಸಕ ವಿ. ಸುನಿಲ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯಿತಿಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹೇರುವ ಈ ಆದೇಶವನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.
ನೀರಿನ ಸಮಸ್ಯೆಗೆ ಅನುದಾನ ಬೇಕು: ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ವಿವಿಧ ತುರ್ತು ಅಗತ್ಯಗಳನ್ನು ಎದುರಿಸಲು ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅನುದಾನದ ಅಗತ್ಯವಿದೆ. ಈಗಾಗಲೇ ಅನುದಾನದ ಕೊರತೆಯಿಂದ ಅಭಿವೃದ್ಧಿ ಕಾಮಗಾರಿಗಳು ಕುಂಠಿತವಾಗುತ್ತಿದ್ದು, ಕುಡಿಯುವ ನೀರು, ಬೀದಿ ದೀಪ, ಸ್ವಚ್ಛತೆ, ರಸ್ತೆ ದುರಸ್ತಿ ಸೇರಿದಂತೆ ಮೂಲಭೂತ ಸೌಲಭ್ಯಗಳ ನಿರ್ವಹಣೆಗೆ ಪಂಚಾಯಿತಿಗಳ ಸ್ವಂತ ನಿಧಿ ಅತ್ಯಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ಆದೇಶ ಹೊರಡಿಸಿರುವುದು ಸರಿಯಾದ ಕ್ರಮವಲ್ಲ. ಗ್ರಾಮ ಪಂಚಾಯತ್‌ಗಳ ನಿಧಿ ಸ್ಥಳೀಯ ಅಭಿವೃದ್ಧಿ ಹಾಗೂ ಜನರ ಮೂಲಭೂತ ಸಮಸ್ಯೆಗಳಿಗೆ ಬಳಕೆಯಾಗಬೇಕು. ಗ್ಯಾರಂಟಿ ಸಮಾವೇಶಕ್ಕಾಗಿ ಪ್ರತ್ಯೇಕ ಸರ್ಕಾರಿ ಅನುದಾನ ಒದಗಿಸಿ, ಪಂಚಾಯಿತಿಗಳ ಸ್ವಂತ ನಿಧಿಯಿಂದ 25 ಸಾವಿರ ರು. ವೆಚ್ಚ ಭರಿಸುವಂತೆ ಹೊರಡಿಸಿರುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು ಎಂದು ಶಾಸಕ ವಿ. ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ.