ಉಡುಪಿ: ದೇಶಾದ್ಯಂತ ಉದ್ಯೋಗ ಸೃಷ್ಟಿಗೆ ವೇಗ ನೀಡುವ, ಉತ್ಪಾದನಾ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಮತ್ತು ಸಾಮಾಜಿಕ ಭದ್ರತೆಯ ವ್ಯಾಪ್ತಿಯನ್ನು ವಿಸ್ತರಿಸುವ ಉದ್ದೇಶ ಹೊಂದಿರುವ, 99,446 ಕೋಟಿ ರು. ವೆಚ್ಚದ ಪ್ರಧಾನಮಂತ್ರಿ ವಿಕಸಿತ ಭಾರತ್ ರೋಜಗಾರ್ ಯೋಜನೆಯಡಿ 2 ವರ್ಷಗಳಲ್ಲಿ 3.5 ಕೋಟಿಗೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಇದೆ, ಅದರಲ್ಲಿ ಈಗಾಗಲೇ ದೇಶಾದ್ಯಂತ 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿಸಲಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಪ್ರಧಾನಮಂತ್ರಿ ವಿಕಸಿತ ಭಾರತ ರೋಜಗಾರ್ ಯೋಜನೆಯಡಿ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ಯೋಜನೆಯ774 ಉದ್ಯೋಗಿಗಳಿಗೆ 48,58,475 ರು. ಮತ್ತು 199 ಸಂಸ್ಥೆಗಳಿಗೆ 3.18 ಕೋಟಿ ರು. ಗಳ ಪ್ರೋತ್ಸಾಹಧನವನ್ನು ನೀಡಲಾಗಿವೆ. ಆತ್ಮನಿರ್ಭರ ಭಾರತವನ್ನು ರೂಪಿಸುತ್ತಿರುವ ದುಡಿಯುವ ಕೈಗಳಿಗೆ ಈ ಯೋಜನೆ ಶಕ್ತಿ ತುಂಬಲಿದೆ ಎಂದರು.
ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ. ನರೇಂದ್ರ ಮೋದಿಯವರು ದೇಶದ ನೇತೃತ್ವ ವಹಿಸಿದ ಬಳಿಕ ದೇಶದಲ್ಲಿ ಹಲವು ಮಹತ್ತರ ಬದಲಾವಣೆಗಳಾಗಿವೆ. ಅಂದಾಜು 1.92 ಕೋಟಿ ಫಲಾನುಭವಿಗಳು ಈ ಯೋಜನೆಯಡಿಯಲ್ಲಿ ಮೊದಲ ಬಾರಿಗೆ ಉದ್ಯೋಗ ಕ್ಷೇತ್ರಕ್ಕೆ ಪ್ರವೇಶಿಸುತ್ತಿದ್ದಾರೆ. ಮೊದಲ ಬಾರಿಗೆ ಉದ್ಯೋಗಕ್ಕೆ ಸೇರುವ ಉದ್ಯೋಗಿಗಳು ಮೊದಲನೆ ತಿಂಗಳು 15,000 ರು. ವರೆಗೆ ಪ್ರೋತ್ಸಾಹಧನ ಪಡೆದರೆ, ಹೆಚ್ಚುವರಿ ಉದ್ಯೋಗವನ್ನು ಸೃಷ್ಟಿಸುವ ಉದ್ಯೋಗದಾತರು ಪ್ರತಿ ಹೆಚ್ಚುವರಿ ಉದ್ಯೋಗಿಗೆ ತಿಂಗಳಿಗೆ 3,000 ರು. ವರೆಗೆ ಪ್ರೋತ್ಸಾಹಧನ ಪಡೆಯುತ್ತಾರೆ. ಅಧಿಕಾರಿಗಳು ಪ್ರಾಮಾಣಿಕತೆಯಿಂದ ಈ ಯೋಜನೆಯನ್ನು ಅನುಷ್ಠಾನ ಮಾಡಬೇಕು ಎಂದರು.
ಪ್ರಧಾನಿ ಮಂತ್ರಿ ನರೇಂದ್ರ ಮೋದಿ ನವದೆಹಲಿಯ ವಿಜ್ಞಾನ ಭವನದಲ್ಲಿ ಸುಮಾರು 2,400 ಕೋಟಿ ರೂ ಮೌಲ್ಯದ ಪ್ರೋತ್ಸಾಹಧನವನ್ನು ಫಲಾನುಭವಿಗಳಿಗೆ ವಿತರಿಸಿದ ಕಾರ್ಯಕ್ರಮದ ನೇರ ವಿಕ್ಷಣೆ ಮಾಡಲಾಯಿತು.ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್, ಇ.ಪಿ.ಎಫ್.ಒ ಪ್ರಾದೇಶಿಕ ಆಯುಕ್ತ ಶಶಿಕಾಂತ್ ದಹಿಯಾ, ಕೆನರಾ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಎಚ್.ಕೆ ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು. ನೀತಾ ಉದಯಶಂಕರ್, ಜಯಶ್ರೀ ನಿರೂಪಿಸಿ, ವನಿತಾ ನಾಯ್ಕ್ ವಂದಿಸಿದರು.