ಉಡುಪಿ: ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್.ಎಸ್. ಎಲ್. ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದ 41 ಶಾಲಾ ಕಾಲೇಜುಗಳಿಗೆ ಅಭಿನಂದನಾ ಸಮಾರಂಭ ಬೀಡಿನಗುಡ್ಡೆಯ ಯಕ್ಷಗಾನ ಕಲಾರಂಗ ಆಡಿಟೋರಿಯಂನಲ್ಲಿ ನಡೆಯಿತು.ಸಮಾರಂಭದ ಉದ್ಘಾಟಿಸಿದ ತುಮಕೂರಿನ ಶ್ರೀ ರಾಮಕೃಷ್ಣ ಆಶ್ರಮದ ಶ್ರೀ ಎಸ್. ವೀರೇಶಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿ, ಉತ್ತಮ ಸಂಸ್ಕಾರ ಹಾಗೂ ಮೌಲ್ಯಾಧಾರಿತ ಆದರ್ಶವ್ಯಕ್ತಿತ್ವ ರೂಪಿಸುವ ಏಕೈಕ ವೃತ್ತಿ ಶಿಕ್ಷಕ ವೃತ್ತಿಯಾಗಿದ್ದು, ಮೌಲ್ಯಾಧಾರಿತ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಕೊಡುಗೆ ಅನನ್ಯವಾಗಿದ್ದು ಇಂದಿನ ಸಮಾಜದಲ್ಲಿ ಶೈಕ್ಷಣಿಕವಾಗಿ ಉತ್ತಮ ಫಲಿತಾಂಶದ ಜೊತೆಗೆ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ತುಂಬುವ ಸಂಕಲ್ಪ ಮಾಡಬೇಕಿದೆ ಎಂದರು.ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸಾಧನೆಯನ್ನು ಗುರುತಿಸಿ ಗೌರವಿಸುವ ಶಾಸಕ ಯಶ್‌ಪಾಲ್ ಸುವರ್ಣ ಅವರ ಕಾರ್ಯ ಇತರರಿಗೂ ಪ್ರೇರಣೆಯಾಗಲಿ ಎಂದರು.ಉಡುಪಿ ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ವಿಶೇಷ ಮುತುವರ್ಜಿ ವಹಿಸಿದ ಶಿಕ್ಷಣ ಇಲಾಖೆಯ ಪರವಾಗಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್, ಮಾರುತಿ, ಡಯಟ್ ಪ್ರಾಂಶುಪಾಲ ಅಶೋಕ್ ಕಾಮತ್, ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ ಮತ್ತು ಉಮಾ ಅವರನ್ನು ಅಭಿನಂದಿಸಲಾಯಿತು.ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಕುಮಾರಿ ಕಲ್ಯಾಣಿ, ಕುಮಾರಿ ಅಶ್ವಿತ ಹಾಗೂ ನಿಶಲ್ ಪೂಜಾರಿ ಹಾಗೂ ಶೇ 100 ಫಲಿತಾಂಶ ಗಳಿಸಿದ ಶಾಲಾ ಕಾಲೇಜುಗಳಿಗೆ ನಗದು ಪುರಸ್ಕಾರ ಸಹಿತ ಸನ್ಮಾನಿಸಿ ಗೌರವಿಸಲಾಯಿತು.ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ಹಾಗೂ ನಿಕಟಪೂರ್ವ ಜಿಪಂ ಸದಸ್ಯ ಪ್ರತಾಪ್ ಹೆಗ್ಡೆ ಮಾರಾಳಿ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು.
ಶೈಕ್ಷಣಿಕ ಸಾಧನೆಯ ಮೂಲಕ ರಾಷ್ಟ್ರಕ್ಕೆ ಮಾದರಿಯಾಗುವ ಮೂಲಕ ಉಡುಪಿ ಜಿಲ್ಲೆಯ ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತ ನಿರ್ಮಾಣದ ಸಂಕಲ್ಪ ಸಾಕಾರಕ್ಕೆ ಮತ್ತಷ್ಟು ಶಕ್ತಿ ತುಂಬಿದೆ. ಆದ್ದರಿಂದ ಜಿಲ್ಲೆಯ ಶಿಕ್ಷಣ ವ್ಯವಸ್ಥೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ನಗದು ಪುರಸ್ಕಾರದೊಂದಿಗೆ ಶೇ 100 ಫಲಿತಾಂಶ ಪಡೆದ 41 ಶಾಲೆಗಳಿಗೆ ಗೌರವಿಸಿದ್ದೇವೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು