ಕನ್ನಡಪ್ರಭ ವಾರ್ತೆ ಉಡುಪಿ
ದೇಶದ ಏಕೀಕರಣದ ಕಾರಣೀಕರ್ತ ಸರ್ದಾರ್ ವಲ್ಲಭಭಾಯಿ ಪಟೇಲರ 150ನೇ ಜನ್ಮದಿನಾಚರಣೆ ಅಂಗವಾಗಿ ನ.11ರಂದು ಆಯೋಜಿಸಿರುವ ಏಕತಾ ನಡಿಗೆ ಕಾರ್ಯಕ್ರಮ ಆಶಯಕ್ಕೆ ಧಕ್ಕೆಯಾಗದಂತೆ ಶಿಸ್ತುಬದ್ಧವಾಗಿ ಆಯೋಜಿಸಬೇಕು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಅವರು ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏಕತಾ ನಡಿಗೆ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಏಕತಾ ನಡಿಗೆಯು ನ.11ರಂದು ಬೆಳಗ್ಗೆ 7.30ಕ್ಕೆ ನಗರದ ಬೋರ್ಡ್ ಹೈಸ್ಕೂಲ್‌ನಿಂದ ಅಜ್ಜರಕಾಡು ಭುಜಂಗ ಪಾರ್ಕಿನ ಹುತಾತ್ಮರ ಸ್ಮಾರಕದ ವರೆಗೆ ನಡೆಯಲಿದೆ. ಭುಜಂಗ ಪಾರ್ಕಿನ ಗಾಂಧಿಕಟ್ಟೆಯಲ್ಲಿ ಪಟೇಲರ ಜೀವನ ಸಾಧನೆ ಕುರಿತು ತಜ್ಞರಿಂದ ಉಪನ್ಯಾಸ ಕಾರ್ಯಕ್ರಮ ಆಯೋಜಿಸಬೇಕು ಎಂದರು.ಏಕತಾ ನಡಿಗೆಯಲ್ಲಿ ನಗರದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಎನ್‌ಎಸ್‌ಎಸ್, ಎನ್‌ಸಿಸಿ ವಿದ್ಯಾರ್ಥಿಗಳು, ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು, ಸಂಘ-ಸಂಸ್ಥೆಗಳು, ಮಾಜಿ ಸೈನಿಕರು ಸೇರಿದಂತೆ ಮತ್ತಿತರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ದಾರ್ ಪಟೇಲರಿಗೆ ಗೌರವ ಸಲ್ಲಿಸಬೇಕು. ನಡಿಗೆ ಜಾಥಾಕ್ಕೆ ಕಲಾ ತಂಡ, ಶಾಲಾ ಮಕ್ಕಳಿಂದ ಬ್ಯಾಂಡ್‌ಗಳ ಮೂಲಕ ಇನ್ನಷ್ಟು ಮೆರುಗು ನೀಡಬೇಕು. ಜಾಥಾ ಹಾದುಹೋಗುವ ಮಾರ್ಗದುದ್ದಕ್ಕೂ ಸರ್ದಾರ್ ವಲ್ಲಭಭಾಯಿ ಪಟೇಲರ ಬಗ್ಗೆ ಜಯಘೋಷ ಮಾಡಬೇಕು ಎಂದು ಹೇಳಿದರು.ನಡಿಗೆ ಜಾಥಾದ ಜೊತೆ ಆರೋಗ್ಯ ಇಲಾಖೆಯ ವತಿಯಿಂದ ವೈದ್ಯಕೀಯ ಸಿಬ್ಬಂದಿಯನ್ನು ಒಳಗೊಂಡ ಆಂಬುಲೆನ್ಸ್ ವ್ಯವಸ್ಥೆಯನ್ನು ಸ್ಥಳದಲ್ಲಿ ನಿಯೋಜಿಸುವಂತೆ ಸಂಸದರು ತಿಳಿಸಿದರು.ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆ ಕುರಿತು ಚರ್ಚೆ ನಡೆಸಲಾಯಿತು. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಡಿಎಚ್‌ಒ ಡಾ. ಬಸವರಾಜ್ ಹುಬ್ಬಳ್ಳಿ, ಕಾರ್ಯಕ್ರಮ ಸಂಯೋಜಕ ಉಲ್ಲಾಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.