ಉಜಿರೆ: ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

KannadaprabhaNewsNetwork |  
Published : Jul 15, 2025, 11:45 PM IST
ದಿನ | Kannada Prabha

ಸಾರಾಂಶ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿಜನಸಂಖ್ಯೆಯಲ್ಲಿ ಭಾರತವು ಚೀನಾ ದೇಶವನ್ನು ಮೀರಿಸಿರುವುದು ಗಂಭೀರವಾಗಿ ಆಲೋಚಿಸಬೇಕಾದ ಸಂಗತಿ ಎಂದು ಪುತ್ತೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ದೀಪಕ್ ರೈ ಕಳವಳ ವ್ಯಕ್ತಪಡಿಸಿದರು.ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಚೀನಾ ನಮ್ಮ ದೇಶಕ್ಕಿಂತ ಎರಡೂವರೆ ಪಟ್ಟು ದೊಡ್ಡ ದೇಶ. ಆದರೆ ಅದನ್ನು ಹಿಂದೆ ಹಾಕಿ ನಾವು ಮುಂದೆ ಬಂದಿದ್ದೇವೆ. ವಿಶ್ವ ಜನಸಂಖ್ಯೆ 820 ಕೋಟಿಯಲ್ಲಿ ಭಾರತದ ಜನಸಂಖ್ಯೆ 146 ಕೋಟಿ ಆಗಿದೆ. ಇದು ಹೆಮ್ಮೆ ಪಡುವ, ಸಂಭ್ರಮಿಸುವ ಸಂಗತಿಯಲ್ಲ. ಹೆಚ್ಚುತ್ತಿರುವ ಜನಸಂಖ್ಯಾ ಸ್ಫೋಟವನ್ನು ನಿಯಂತ್ರಿಸುವುದು ಅನಿವಾರ್ಯ ಎಂದು ಅವರು ಹೇಳಿದರು.

ಜನಸಂಖ್ಯೆ ಹೆಚ್ಚುತ್ತಿರುವುದರಿಂದ ಸಂಪನ್ಮೂಲ ಕೂಡ ಹೆಚ್ಚು ಬೇಕಾಗುತ್ತದೆ. ಭೂಮಿಯಿಂದ ಪರಿಸರದಿಂದ ಸಂಪನ್ಮೂಲಗಳನ್ನು ಪಡೆಯುವ ಮಾನವ ಅರಣ್ಯನಾಶ ಮತ್ತು ಗಣಿಗಾರಿಕೆಯಲ್ಲಿ ತೊಡಗಿದ್ದಾನೆ. ಗಣಿಗಾರಿಕೆ ಆದಂತಹ ಜಾಗದಲ್ಲಿ ಕೃಷಿ ಮಾಡಲು ಸಾಧ್ಯವೇ ಇಲ್ಲ. ಇದರಿಂದ ಆಹಾರ ಉತ್ಪತ್ತಿಯೂ ಕಡಿಮೆಯಾಗುತ್ತದೆ‌. ಪ್ರಾಣಿಗಳ ವಾಸಸ್ಥಳವನ್ನು ನಾವು ಅತಿಕ್ರಮಿಸಿರುವುದರಿಂದ ಅವುಗಳು ಆಹಾರ ಅರಸಿ ನಾಡಿಗೆ ಬರುತ್ತಿವೆ. ಹವಾಮಾನ ವೈಪರೀತ್ಯ ಹೆಚ್ಚುತ್ತಿದೆ. ಪ್ರವಾಹದಿಂದ ಸಂಪನ್ಮೂಲಗಳು ನಾಶವಾಗುತ್ತಿವೆ. ಮನುಷ್ಯನ ಆಸೆಗಳಿಗೆ ಕೊನೆಯಿಲ್ಲದಂತಾಗಿದೆ. ಯುದ್ಧಗಳಲ್ಲಿ ಬಾಂಬ್ ಬಳಕೆಯಿಂದ ಭೂಮಿ ತನ್ನ ಫಲವತ್ತತೆ ಕಳೆದುಕೊಳ್ಳುತ್ತಿದೆ ಎಂದವರು ವಿಶ್ಲೇಷಿಸಿದರು.

ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ವಿಶ್ವನಾಥ ಪಿ. ಉದ್ಘಾಟಿಸಿ ಮಾತನಾಡಿ, ಜನಸಂಖ್ಯೆ ಹೆಚ್ಚಳ ಸಮಸ್ಯೆಯೇ ಅಲ್ಲ ಆದರೆ, ಜನರಿಗೆ ಬೇಕಾದ ವ್ಯವಸ್ಥೆ ಆಗದೆ ಇರುವುದೇ ಸಮಸ್ಯೆ. ಹಾಗಾಗಿ ಈ ಕುರಿತು ಅರಿವು ಮೂಡಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಗಣರಾಜ ಕೆ. ಮಾತನಾಡಿದರು. ಬೆಳ್ತಂಗಡಿ ತಾಲೂಕು ಆರೋಗ್ಯ ಅಧಿಕಾರಿ ಡಾ. ಸಂಜಾತ್ ಆರ್.ಬಿ. ಅಧ್ಯಕ್ಷತೆ ವಹಿಸಿ ಮಾತನಾಡಿದರು.ವಿಶ್ವ ಜನಸಂಖ್ಯಾ ದಿನದ ಪ್ರಯುಕ್ತ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಆಯೋಜಿಸಿದ್ದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ, ಆಶಾ ಕಾರ್ಯಕರ್ತರಿಗೆ ಆಯೋಜಿಸಲಾಗಿದ್ದ ಪ್ರಹಸನ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಹೆಚ್ಚು ಫಲಾನುಭವಿಗಳನ್ನು ಆರೋಗ್ಯ ಕೇಂದ್ರಗಳಿಗೆ ಕರೆತರುವಲ್ಲಿ ಯಶಸ್ವಿಯಾದ ಪ್ರಾಥಮಿಕ ಆರೋಗ್ಯ ಕೇಂದ್ರ ಕಾರ್ಯಕರ್ತರನ್ನು ಗೌರವಿಸಲಾಯಿತು.

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಬೆಳ್ತಂಗಡಿ ತಾ.ಸಾ. ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ರಮೇಶ್, ಬೆಳ್ತಂಗಡಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಮೇಲ್ವಿಚಾರಕಿ ಲೀಲಾವತಿ, ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವಿನಿತಾ, ತಾಲೂಕು ಆರೋಗ್ಯ ವಿಭಾಗದ ಸಿಬ್ಬಂದಿ ಅಮ್ಮಿ ಮತ್ತಿತರರು ಉಪಸ್ಥಿತರಿದ್ದರು.

ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಅಜಯ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಎಚ್. ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!