-ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಸಚಿವ ಡಿ ಸುಧಾಕರ್ । ಕರ್ನಾಟಕದ ಉತ್ತರದ ತುದಿಯಿಂದ ದಕ್ಷಿಣದವರೆಗೆ ಮಾನವ ಸರಪಳಿ ಯಶಸ್ವಿ
------ಕನ್ನಡಪ್ರಭ ವಾರ್ತೆ ಹಿರಿಯೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ರಚಿಸುವ ಮೂಲಕ ರಾಜ್ಯ ಸರ್ಕಾರದಿಂದ ವಿನೂತನ ಪ್ರಯತ್ನ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ನಗರದ ಟಿಬಿ ವೃತ್ತದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ , ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಕರ್ನಾಟಕದ ಉತ್ತರದ ತುದಿಯಿಂದ ದಕ್ಷಿಣದ ತುದಿಯವರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರಜಾಪ್ರಭುತ್ವದ ಅರಿವು ಮೂಡಿಸುವಲ್ಲಿ ಏರ್ಪಡಿಸಿರುವ ಮಾನವ ಸರಪಳಿ ಕಾರ್ಯಕ್ರಮ ವಿನೂತನವಾದುದು. ಬೀದರ್ ನಿಂದ ಚಾಮರಾಜನಗರದ ವರೆಗಿನ ಅರ್ಥಪೂರ್ಣ ಪ್ರಜಾಪ್ರಭುತ್ವ ದಿನಾಚರಣೆ ಯಶಸ್ವಿಯಾಗಿದ್ದು, ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮೇಲಿನ ಕಣಿವೆ ಗ್ರಾಮದಿಂದ ಜಿಲ್ಲೆಯ ಗಡಿ ಭಾಗವಾಗಿರುವ ಜವನಗೊಂಡನಹಳ್ಳಿಯವರೆಗೂ 145 ಕಿಮೀ ಉದ್ದದವರೆಗೂ ಮಾನವ ಸರಪಳಿ ನಿರ್ಮಿಸಲಾಗಿದೆ. ಕಾರ್ಯಕ್ರಮದ ಯಶಸ್ಸಿಗೆ ಕೈ ಜೋಡಿಸಿದ ಶಿಕ್ಷಣ ಇಲಾಖೆ, ಖಾಸಗಿ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು, ಎನ್ ಜಿಓ ಗಳು, ಮಹಿಳಾ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ದಲಿತಪರ, ಕನ್ನಡಪರ ಸಂಘಟನೆಗಳು ಹಾಗೂ ಎಲ್ಲಾ ಸರ್ಕಾರಿ ಇಲಾಖೆಗಳಿಗೆ ಅಭಿನಂದನೆ ಸಲ್ಲುತ್ತವೆ ಎಂದರು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ, ರಾಜ್ಯದಲ್ಲಿ 25 ಲಕ್ಷ ಜನರಿಂದ 2500 ಕಿಮೀ. ಉದ್ದದ ಮಾನವ ಸರಪಳಿ ನಿರ್ಮಾಣ ಮಾಡಲಾಗಿದೆ. ಜಿಲ್ಲೆಯ ವಿವಿಧ ಭಾಗಗಳಿಂದ 500 ಕ್ಕೂ ಹೆಚ್ಚು ಬಸ್‍ಗಳಲ್ಲಿ 35 ಸಾವಿರ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಾಣದಲ್ಲಿ ಭಾಗವಹಿಸಿದ್ದಾರೆ. ಈ ಮೂಲಕ ಪ್ರಜಾಪ್ರಭುತ್ವದ ಮಹತ್ವವನ್ನು ಸಾರಲಾಗಿದೆ. ಮಾನವ ಸರಪಳಿ ಹಾದು ಹೊಗಿರುವ ಹಿರಿಯೂರು, ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲೂಕುಗಳಲ್ಲಿ ಏಕ ಕಾಲಕ್ಕೆ ಕಾರ್ಯಕ್ರಮ ಆಯೋಜಿಸುವ ಮೂಲಕ ಮಾನವ ಸರಪಳಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದರು.ಉದ್ಘಾಟನಾ ಸಮಾರಂಭಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಸೇರಿದಂತೆ ಎಲ್ಲಾ ಗಣ್ಯರು, ಅಧಿಕಾರಿಗಳು ಅಂಬೇಡ್ಕರ್ ವೃತ್ತದಲ್ಲಿನ ಡಾ. ಬಿ.ಆರ್. ಅಂಬೇಡರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಶಿವಣ್ಣ,ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ,ತಹಸೀಲ್ದಾರ್ ರಾಜೇಶ್ ಕುಮಾರ್, ಹಿರಿಯೂರು ನಗರಸಭೆ ಅಧ್ಯಕ್ಷ ಅಜಯ್ ಕುಮಾರ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಕಾಂಗ್ರೆಸ್ ಮುಖಂಡರಾದ ಕಂದಿಕೆರೆ ಜಗದೀಶ್,ಗೀತಾ ನಂದಿನಿ ಗೌಡ ಮುಂತಾದವರು ಉಪಸ್ಥಿತರಿದ್ದರು.
...... ಬಾಕ್ಸ್ .....ಗಮನ ಸೆಳೆದ ಬೃಹತ್ ಮಾನವ ಸರಪಳಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಜಿಲ್ಲೆಯಲ್ಲಿ ರಚಿಸಲಾದ 145 ಕಿ.ಮೀ ಉದ್ದದ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು. ಮೊಳಕಾಲ್ಮೂರು ತಾಲೂಕಿನ ಮೇಲಿನ ಕಣಿವೆ ಪ್ರದೇಶದಿಂದ ಪ್ರಾರಂಭವಾದ ಮಾನವ ಸರಪಳಿಯು ಚಳ್ಳಕೆರೆ ಮಾರ್ಗವಾಗಿ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯವರೆಗೂ ಮಾನವ ಸರಪಳಿ ರಚಿತವಾಗಿತ್ತು. ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲೂಕಿನ ವಿದ್ಯಾರ್ಥಿಗಳು, ನೌಕರರು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಜಿಲ್ಲೆಯ 1.50 ಲಕ್ಷ ಜನ ಈ ಮಾನವ ಸರಪಳಿಯಲ್ಲಿ ಭಾಗವಹಿಸಿದ್ದರು.......ಬಾಕ್ಸ್......
ಬಿಜೆಪಿ ಶಾಸಕ ಮುನಿರತ್ನ ಬಂಧನ ದ್ವೇಷದ ರಾಜಕಾರಣ ಎಂದಿರುವ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ ಆಗಿದೆ. ಯಾರು ತಪ್ಪು ಮಾಡಿರ್ತಾರೋ ಅವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.----
ಚಿತ್ರ 1,2 ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕಿನ ಟಿಬಿ ವೃತ್ತದಲ್ಲಿ ಮಾನವ ಸರಪಳಿ ಕಾರ್ಯಕ್ರಮವನ್ನು ಸಚಿವ ಡಿ ಸುಧಾಕರ್ ಉದ್ಘಾಟನೆ ಮಾಡಿ ಮಾತನಾಡಿದರು.