ಶೀಘ್ರವೇ ಮಂಡ್ಯ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಕೇಂದ್ರ ಸಚಿವ ಎಚ್‌ಡಿಕೆ ಸೂಚನೆ

KannadaprabhaNewsNetwork |  
Published : Aug 19, 2025, 01:00 AM IST
(ಎಚ್.ಡಿ.ಕುಮಾರಸ್ವಾಮಿ- ಅವರ ಹೆಸರಿನಲ್ಲೇ ಫೋಟೋ ಇದೆ) | Kannada Prabha

ಸಾರಾಂಶ

ಕೆಲ ತಿಂಗಳ ಹಿಂದೆ ಉತ್ತಮ ಮಳೆಯಾಗಿ ಜಲಾಶಯ ಭರ್ತಿ ಆಗಿತ್ತು. ಆಗ ಕೆರೆಗಳಿಗೆ ನೀರು ತುಂಬಿಸುವಂತೆ ತಿಳಿಸಲಾಗಿತ್ತು. ಮಂಡ್ಯ ದಿಶಾ ಸಭೆಯಲ್ಲಿಯೂ ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿತ್ತು. ಆದರೆ, ತಮ್ಮ ಭಾಗದ ಕೆರೆಗಳನ್ನು ತುಂಬಿಸಿಲ್ಲ ಎಂದು ಹಲವಾರು ಕಡೆಗಳಿಂದ ರೈತರು ತಮ್ಮ ಗಮನಕ್ಕೆ ತಂದಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಐತಿಹಾಸಿಕ ಕೃಷ್ಣರಾಜಸಾಗರ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ಒಳಹರಿವು ಹರಿದುಬರುತ್ತಿದ್ದು, ಅಪಾರ ಪ್ರಮಾಣದ ನೀರನ್ನು ನದಿಗೆ ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಅದಷ್ಟು ಬೇಗ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವಂತೆ ಕೇಂದ್ರ ಸಚಿವ ಹಾಗೂ ಮಂಡ್ಯ ಸಂಸದ ಎಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪತ್ರಿಕಾ ಮಾಧ್ಯಮಗಳಲ್ಲಿ ಈ ಬಗ್ಗೆ ವರದಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅವರೊಂದಿಗೆ ದೆಹಲಿಯಿಂದ ದೂರವಾಣಿ ಕರೆ ಮಾಡಿ ಮಾತನಾಡಿದ ಕೇಂದ್ರ ಸಚಿವರು, ತಕ್ಷಣವೇ ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವಂತೆ ನಿರ್ದೇಶನ ನೀಡಿದರು.

ಕೆಲ ತಿಂಗಳ ಹಿಂದೆ ಉತ್ತಮ ಮಳೆಯಾಗಿ ಜಲಾಶಯ ಭರ್ತಿ ಆಗಿತ್ತು. ಆಗ ಕೆರೆಗಳಿಗೆ ನೀರು ತುಂಬಿಸುವಂತೆ ತಿಳಿಸಲಾಗಿತ್ತು. ಮಂಡ್ಯ ದಿಶಾ ಸಭೆಯಲ್ಲಿಯೂ ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿತ್ತು. ಆದರೆ, ತಮ್ಮ ಭಾಗದ ಕೆರೆಗಳನ್ನು ತುಂಬಿಸಿಲ್ಲ ಎಂದು ಹಲವಾರು ಕಡೆಗಳಿಂದ ರೈತರು ತಮ್ಮ ಗಮನಕ್ಕೆ ತಂದಿದ್ದಾರೆ. ಹೀಗಾಗಿ ಈವರೆಗೆ ಯಾವ ಯಾವ ಕೆರೆಗಳನ್ನು ತುಂಬಿಸಿಲ್ಲವೋ ಆ ಕೆರೆಗಳಿಗೆ ತಕ್ಷಣವೇ ನೀರು ತುಂಬಿಸಲು ಕ್ರಮ ವಹಿಸಿ ಎಂದು ಕೇಂದ್ರ ಸಚಿವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

ಕನ್ನಡಪ್ರಭ ವಾರ್ತೆ ಮಂಡ್ಯ

ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯದ ಒಳ ಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪ್ರಸ್ತುತ ಜಲಾಶಯದಿಂದ 80 ಸಾವಿರ ಕ್ಯುಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.

ಸೋಮವಾರ ಮಧ್ಯಾಹ್ನ 12 ಗಂಟೆ ವೇಳೆಗೆ ಜಲಾಶಯದಿಂದ 80 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಯ ಬಿಡಲಾಗಿದೆ. ಒಳ ಹರಿವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಸಮಯದಲ್ಲಾದರೂ 1.20 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಹರಿಯಬಿಡುವ ಸಾಧ್ಯತೆಗಳಿರುವುದಾಗಿ ನೀರಾವರಿ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ನದಿಗೆ ಹೆಚ್ಚಿನ ಪ್ರಮಾಣದ ನೀರನ್ನು ಹರಿಯಬಿಟ್ಟಿರುವುದರಿಂದ ನದಿ ಪಾತ್ರದ ಸಾರ್ವಜನಿಕರು ಸ್ವಯಂ ಮುಂಜಾಗ್ರತೆ ವಹಿಸುವುದು. ನದಿ ಪಾತ್ರ ಅಥವಾ ತಗ್ಗು ಪ್ರದೇಶಗಳಿಗೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ರೈತರು, ನದಿ ಪಾತ್ರ ಹಾಗೂ ತಗ್ಗು ಪ್ರದೇಶಗಳಲ್ಲಿರುವ ಜಮೀನುಗಳಿಗೆ ಕೃಷಿ ಚಟುವಟಿಕೆಗೆ ಹೋಗದಂತೆ ಹಾಗೂ ಜಾನುವಾರುಗಳನ್ನು ಬಿಡದಂತೆ ಸೂಚಿಸಲಾಗಿದೆ. ನದಿ ಪಾತ್ರ, ಸೇತುವೆ, ಇನ್ನಿತರ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವುದು, ನೀರಿನಲ್ಲಿ ಈಜುವುದು ಹಾಗೂ ಸೆಲ್ಫಿ ತೆಗೆದುಕೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

ತಾಲೂಕು ಆಡಳಿತದಿಂದ ಈಗಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ಕೈಗೊಂಡಿರುವ ವ್ಯಾಪಕ ಪ್ರಚಾರ ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಅಳವಡಿಸಿರುವ ಸೂಚನಾ ಫಲಕಗಳನ್ನು ಗಮನಿಸುವಂತೆ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಸಾರ್ವಜನಿಕರಿಗೆ ತಿಳಿಸಿದ್ದಾರೆ. ಸದ್ಯ 124.80 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ 124.54 ಅಡಿ ನೀರನ್ನು ಕಾಯ್ದಿರಿಸಿಕೊಳ್ಳಲಾಗಿದೆ. 40.710 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ