ಹಾವೇರಿ: ನಮ್ಮಲ್ಲಿನ ತತ್ವ, ಸಿದ್ಧಾಂತಗಳಲ್ಲಿ ಭೇದಗಳಿದ್ದರೂ ಸಂವಿಧಾನದ ನೆಲೆಯಲ್ಲಿ ಪರಸ್ಪರ ಗೌರವ, ಸಹಬಾಳ್ವೆಯಿಂದ ನಡೆದುಕೊಂಡು ಬಂದಿರುವ ಪರಂಪರೆ ನಮಗಿದೆ. ಅಂಬೇಡ್ಕರ್ ಪ್ರತಿಪಾದಿಸಿರುವ ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದಲ್ಲಿ ನಂಬಿಕೆಯನ್ನು ಮರು ಸ್ಥಾಪಿಸಲು ನಾವು ಬದ್ಧರಾಗಿದ್ದೇವೆ. ಏಕತೆ ಮತ್ತು ಅಖಂಡತೆ ನಮ್ಮ ಮಂತ್ರವಾಗಬೇಕು ಎಂದು ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.
ಬರ ನಿರ್ವಹಣೆಗೆ ಆದ್ಯತೆ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕುವಾರು ಟಾಸ್ಕ್‌ಫೋರ್ಸ್ ಸಮಿತಿಗಳು ಕಾರ್ಯನಿರ್ವಹಿಸುತ್ತಿವೆ. ಹೋಬಳಿವಾರು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಬರನಿರ್ವಹಣೆಯ ನೋಡಲ್ ಅಧಿಕಾರಿಗಳಾಗಿ ನಿಯೋಜಿಸಲಾಗಿದೆ ಎಂದು ಹೇಳಿದರು.
ಬರ ಪರಿಹಾರ ಕಾರ್ಯಗಳಿಗಾಗಿ ಪ್ರಕೃತಿ ವಿಕೋಪ ನಿಧಿಯಡಿ ಜಿಲ್ಲೆಗೆ ಸರ್ಕಾರ ₹೧೨ ಕೋಟಿ ಅನುದಾನ ಬಿಡುಗಡೆ ಮಾಡಿದೆ. ಪ್ರಕೃತಿ ವಿಕೋಪ ನಿರ್ವಹಣೆಗೆ ಬಳಕೆ ಮಾಡಲು ತಹಸೀಲ್ದಾರಗಳಿಗೆ ತಲಾ ₹೫೦ ಲಕ್ಷಗಳಂತೆ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ ಜಿಲ್ಲೆಯ ೧೩ ಗ್ರಾಮಗಳಿಗೆ ನೀರಿನ ಸಮಸ್ಯೆ ಉದ್ಬವಿಸಿದ್ದು, ಈ ಗ್ರಾಮಗಳಿಗೆ ೨೧ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದರು.ಕುಡಿಯುವ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಮೂರು ಹಂತಗಳಲ್ಲಿ ಒಟ್ಟಾರೆ ೭೧೬ ಕಾಮಗಾರಿಗಳನ್ನು ಆರಂಭಿಸಿ, ಈಗಾಗಲೇ ೪೮೮ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಈ ಕಾಮಗಾರಿಗಳಿಗೆ ₹೭೫೩.೮೪ ಕೋಟಿ ಮಂಜೂರಾಗಿದ್ದು, ಈ ಪೈಕಿ ₹೪೪೪ ಕೋಟಿ ವೆಚ್ಚ ಮಾಡಲಾಗಿದೆ ಎಂದರು.
ಬರದ ಸನ್ನಿವೇಶದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ತುಂಗಾ ಮೇಲ್ದಂಡೆ ಯೋಜನೆಯಡಿ ೨೩೦ ಕೆರೆಗಳನ್ನು ತುಂಬಿಸಲಾಗಿದೆ. ಹೊಸದಾಗಿ ನಾಲ್ಕು ಕೆರೆ ತುಂಬಿಸುವ ಕಾಮಗಾರಿ ಜಾರಿಯಲ್ಲಿದ್ದು, ಈ ಪೈಕಿ ಒಂದು ಕೆರೆ ಕಾಮಗಾರಿ ಪೂರ್ಣಗೊಂಡಿದೆ. ಸಣ್ಣ ನೀರಾವರಿ ಇಲಾಖೆಯಡಿ ಬರುವ ೨೪೧ ಕೆರೆಗಳನ್ನು ತುಂಬಿಸಲಾಗಿದೆ. ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ೪೧ ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡಲಾಗಿದೆ. ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಈ ವರೆಗೆ ೩.೪೬ ಕೋಟಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ಹೇಳಿದರು.ಸನ್ಮಾನ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾ ವಾರ್ತಾಧಿಕಾರಿ ಡಾ. ಬಿ.ಆರ್. ರಂಗನಾಥ್, ಹಿರೇಕೆರೂರಿನ ಶಿವಕುಮಾರ ಎಂ.ಜಿ. ಹಾಗೂ ಶಿಗ್ಗಾಂವಿಯ ಪ್ರೇಮಕಿಶನ ಸು. ವಾಲ್ಮೀಕಿ, ವರದಿಗಾರರಾದ ವಿನಾಯಕ ಹುದ್ದಾರ ಹಾಗೂ ಎಸ್.ಆರ್. ನಂದಿಹಳ್ಳ ಅವರನ್ನು ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಿರುವ ಸಂವಿಧಾನ ಜಾಗೃತಿ ಜಾಥಾದ ಸ್ತಬ್ಧಚಿತ್ರ ಸಂಚಾರಕ್ಕೆ ಸಚಿವರು ಚಾಲನೆ ನೀಡಿದರು.ಇದಕ್ಕೂ ಮುನ್ನ ಪೊಲೀಸ್, ಹೋಮ್ ಗಾರ್ಡ್, ಅಬಕಾರಿ, ಎನ್‌ಎಸ್‌ಎಸ್, ಎನ್‌ಸಿಸಿ, ಸ್ಕೌಟ್ ಆ್ಯಂಡ್ ಗೈಡ್ಸ್ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ತಂಡಗಳಿಂದ ಆಕರ್ಷಕ ಪಥಸಂಚಲನ ಜರುಗಿತು. ಬಳಿಕ ವಿವಿಧ ಶಾಲಾ ಮಕ್ಕಳು ದೇಶ ಭಕ್ತಿಗೀತೆಗಳಿಗೆ ಆಕರ್ಷಕ ನೃತ್ಯ ಮಾಡಿದರು.
ಕಾರ್ಯಕ್ರಮದಲ್ಲಿ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಕೊಟ್ರೇಶಪ್ಪ ಬಸೇಗಣ್ಣಿ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ, ಜಿಪಂ ಸಿಇಒ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಚೆನ್ನಪ್ಪ ಇತರರು ಉಪಸ್ಥಿತರಿದ್ದರು.