ರೈತ ಸಂಘಟನೆಗಳನ್ನು ಒಡೆಯಲು ರಾಜಕೀಯ ಪಕ್ಷಗಳ ಯತ್ನ

KannadaprabhaNewsNetwork |  
Published : Feb 01, 2024, 02:05 AM IST
22 | Kannada Prabha

ಸಾರಾಂಶ

ಬರಗಾಲದ ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಮಾಡಲು ಯಾರು ಮಾತನಾಡುತ್ತಿಲ್ಲ. ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರವೇ ರೈತರ ಸಾಲ ಮನ್ನಾ ಮಾಡಿದೆ. ಆದರೆ, ಕೇಂದ್ರ ಸರ್ಕಾರವು ಉದ್ಯಮಿಗಳ 12 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದ್ದು, ರೈತರ ಸಾಲ ಯಾಕೆ ಮನ್ನಾ ಮಾಡುತ್ತಿಲ್ಲ

- ರಾಜ್ಯ ರೈತ ಸಂಘಟನೆಗಳು ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆರೋಪ

----ಕನ್ನಡಪ್ರಭ ವಾರ್ತೆ ಮೈಸೂರು

ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸಿ ರೈತ ಸಂಘಟನೆಗಳನ್ನು ಒಡೆದು ರೈತ ಕುಲವನ್ನೇ ನಾಶ ಮಾಡಲು ರಾಜಕೀಯ ಪಕ್ಷಗಳು ಯತ್ನ ನಡೆಸುತ್ತಿವೆ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘ, ರಾಜ್ಯ ರೈತ ಸಂಘಟನೆಗಳು ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆರೋಪಿಸಿದರು.

ನಗರದ ಗನ್ ಹೌಸ್ ವೃತ್ತದ ಬಳಿಯ ವಿಶ್ವಮಾನವ ಉದ್ಯಾನವದಲ್ಲಿನಡೆದ ರೈತರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ಬರುತ್ತಿರುವ ಕಾರಣ ಎಲ್ಲಾ ರಾಜಕೀಯ ಪಕ್ಷಗಳು ಮತ ಬ್ಯಾಂಕ್ ಲೂಟಿ ಮಾಡಲು ಪೈಪೋಟಿ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.

ಬರಗಾಲದ ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಮಾಡಲು ಯಾರು ಮಾತನಾಡುತ್ತಿಲ್ಲ. ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರವೇ ರೈತರ ಸಾಲ ಮನ್ನಾ ಮಾಡಿದೆ. ಆದರೆ, ಕೇಂದ್ರ ಸರ್ಕಾರವು ಉದ್ಯಮಿಗಳ 12 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದ್ದು, ರೈತರ ಸಾಲ ಯಾಕೆ ಮನ್ನಾ ಮಾಡುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.

ಕಬ್ಬು ಬೆಳೆಗಾರರ ರೈತರ ಶೋಷಣೆ ನಿಲ್ಲಬೇಕಾದರೆ ಕಬ್ಬಿನ ಎಫ್ಆರ್ ಪಿ ದರ ರೈತನ ಹೊಲದಲ್ಲಿನ ದರ ಎಂದು ಬದಲಾಗಬೇಕು. ಸಕ್ಕರೆ ಕಾರ್ಖಾನೆಗಳು ಕಬ್ಬು ಕಟಾವು ಸಾಗಣಿಕೆ ದರ ಮನಬಂದಂತೆ ಕಾನೂನು ಬಾಹಿರವಾಗಿ ಕಡಿತ ಮಾಡಿರುವ ಹೆಚ್ಚುವರಿ ಹಣ ರೈತರಿಗೆ ವಾಪಸ್ ಕೂಡಿಸಲು ಸರ್ಕಾರಕ್ಕೆ ಧೈರ್ಯವಿದೆಯೇ? ರೈತರು 39 ದಿನ ಹೋರಾಟ ಮಾಡಿ ಟನ್ ಗೆ 150 ರೂ. ಹೆಚ್ಚುವರಿ ದರ ನಿಗದಿ ಮಾಡಿ ಆದೇಶ ಹೊರಡಿಸಿದ್ದರೂ ಸಕ್ಕರೆ ಕಾರ್ಖಾನೆಗಳು ಇನ್ನೂ ಹಣ ಪಾವತಿಸಿಲ್ಲ. ಸರ್ಕಾರಕ್ಕೆ ಹಣ ಕೂಡಿಸುವ ಅಥವಾ ಸಕ್ಕರೆ ಕಾರ್ಖಾನೆ ವಿರುದ್ಧ ಕ್ರಮ ಕೈಗೊಳ್ಳುವ ನೈತಿಕತೆ ಇಲ್ಲದಿದ್ದರೆ ಸರ್ಕಾರವೇ ರೈತರಿಗೆ ಪಾವತಿಸಬೇಕು ಎಂದು ಅವರು ಆಗ್ರಹಿಸಿದರು.

ರಾಜ್ಯದಲ್ಲಿ 800 ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಲಕ್ಷಾಂತರ ರೈತರು ಕೃಷಿ ತೊರೆದು ಗುಳೆ ಹೋಗುತ್ತಿದ್ದಾರೆ. ಗ್ರಾಮೀಣ ಬ್ಯಾಂಕ್ ಎನ್ನುವ ಹೆಸರಿನಲ್ಲಿರುವ ಕಾವೇರಿ ಗ್ರಾಮೀಣ ಬ್ಯಾಂಕ್ ಸಾಲ ಪಡೆದ ರೈತರಿಗೆ ದುಪ್ಪಟ್ಟು ಹಣ ಪಾವತಿಸುವಂತೆ ನೋಟಿಸ್ ನೀಡುವ ಮೂಲಕ ರೈತರ ಶೋಷಣೆ ಮಾಡುತ್ತಿದೆ. ಎಲ್ಲದರ ವಿರುದ್ಧ ರೈತರು ಜಾಗೃತರಾಗಿ ಸಂಘಟಿತ ಹೋರಾಟ ನಡೆಸಬೇಕು ಎಂದು ಅವರು ಕರೆ ನೀಡಿದರು.

ಕೃಷಿ ಸಾಲ ನೀತಿ ಬದಲಾಗಬೇಕು. ರೈತರು ಕೃಷಿ ಮಾಡಲು ಬ್ಯಾಂಕುಗಳು ಬಡ್ಡಿ ರಹಿತ ಸಾಲ ನೀಡುವಂತೆ ಆಗಬೇಕು. ಸಕ್ಕರೆ ಕಾರ್ಖಾನೆಗಳು ಸಕ್ಕರೆ ಇಳುವರಿ ತೋರಿಸುವ ಮಾನದಂಡ ಬದಲಾಗಬೇಕು. ಇಳುವರಿ ಮೋಸ ತೂಕದಲ್ಲಿ ಮೋಸ ತಪ್ಪಿಸಲು ವೈಜ್ಞಾನಿಕ ಮಾನದಂಡ ಅಳವಡಿಸಬೇಕು. ಕೃಷಿಗೆ ಬಳಸುವ ಕೀಟನಾಶಕ ರಸಗೊಬ್ಬರ, ಹನಿ ನೀರಾವರಿ ಉಪಕರಣಗಳು, ಟ್ರಾಕ್ಟರ್ ಬಿಡಿ ಭಾಗಗಳ ಜಿಎಸ್ಟಿ ತೆರಿಗೆ ರದ್ದುಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

ಸಭೆಯ ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ, ಕೃಷಿ ಭೂಮಿಯಲ್ಲಿ ಹಾದು ಹೋಗುವ 220 ಕೆ.ವಿ. ಸಾಮರ್ಥ್ಯದ ವಿದ್ಯುತ್ ಕಂಬ ಹಾಗೂ ತಂತಿ ಮಾರ್ಗ ಹಾದು ಹೋಗುವ ಭೂಮಿಗೆ ಹೆಚ್ಚಿನ ಪರಿಹಾರ ನೀಡಬೇಕು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್, ಪಿ. ಸೋಮಶೇಖರ್, ಕಿರಗಸೂರು ಶಂಕರ, ಸಿದ್ದೇಶ್, ವೆಂಕಟೇಶ, ವಿಜೇಂದ್ರ, ಕೆಂಡಗಣ್ಣಸ್ವಾಮಿ, ಪಟೇಲ್ ಶಿವಮೂರ್ತಿ, ಕಮಲಮ್ಮ, ರೂಪ, ಕೂಡನಳ್ಳಿ ರಾಜಣ್ಣ, ಸುರೇಶ, ಮಂಜುನಾಥ, ರೇವಣ್ಣ, ಸತೀಶ್, ಸುಂದರಪ್ಪ, ನೀಲಕಂಠಪ್ಪ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದು 2028ರವರೆಗೂ ಸಿಎಂ, ಇಳಿಸಲು ಆಗೋಲ್ಲ: ಜಮೀರ್‌
ಫೆ.೮ರಂದು ಶ್ರೀ ರಾಮಲಿಂಗೇಶ್ವರ ಮಠ ಲೋಕಾರ್ಪಣೆ