ಕಡ್ಡಾಯ ಮತದಾನದ ಅಗತ್ಯತೆ ಕುರಿತು ಪದವಿ ವಿದ್ಯಾರ್ಥಿಗಳಿಗೆ ಜಾಗೃತಿ
ಕನ್ನಡಪ್ರಭ ವಾರ್ತೆ ಹಾಸನ
ಜಗತ್ತಿನ ಬಹುತೇಕ ರಾಷ್ಟ್ರಗಳು ಸಂವಿಧಾನ ಜಾರಿಗೆ ಬಂದ ಹಲವಾರು ವರ್ಷಗಳ ನಂತರ ಸಾರ್ವತ್ರಿಕ ಮತದಾನ ಪದ್ಧತಿಯನ್ನು ಜಾರಿಗೊಳಿಸಿವೆ. ಆದರೆ ಭಾರತದಲ್ಲಿ ಸಂವಿಧಾನ ಜಾರಿಗೆ ಬಂದ ದಿನದಿಂದಲೇ ಸಾರ್ವತ್ರಿಕ ವಯಸ್ಕರ ಮತದಾನ ಪದ್ಧತಿಯನ್ನು ಜಾರಿಗೊಳಿಸಲಾಗಿದೆ ಎಂದು ಹಾಸನ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಬಿ.ಆರ್. ಹೇಳಿದರು.ನಗರದಲ್ಲಿ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜಿನ (ಸ್ವಾಯುತ್ತ) ರಾಜ್ಯಶಾಸ್ತ್ರ ವಿಭಾಗ, ಹಾಸನ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಜಂಟಿಯಾಗಿ ಆಯೋಜಿಸಿದ ಕಾಲೇಜಿನ ಪದವಿ ವಿದ್ಯಾರ್ಥಿಗಳಿಗೆ ಕಡ್ಡಾಯ ಮತದಾನದ ಅಗತ್ಯತೆ ಮತ್ತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸ್ವಾತಂತ್ರ್ಯ ಬಂದು ೭೦ ದಶಕ ಕಳೆದಿದ್ದು ಸಾಕಷ್ಟು ಅಭಿವೃದ್ಧಿ ಸಾಧಿಸಿದ್ದೇವೆ. ಭಾರತದಲ್ಲಿ ಪ್ರತಿಯೊಬ್ಬರಿಗೂ ಪ್ರಜಾಪ್ರಭುತ್ವದ ಬಗ್ಗೆ ನಂಬಿಕೆ ಇದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ದೇಶದ ಶೇಕಡವಾರು ಮತದಾನದ ಪ್ರಮಾಣ ಶೇ ೬೭ ರಷ್ಟಿದ್ದರೆ, ಹಾಸನ ಜಿಲ್ಲೆಯಲ್ಲಿ ಶೇ ೭೭ ಕ್ಕಿಂತ ಹೆಚ್ಚು ಮತದಾನವಾಗಿದೆ. ಆದರೆ ಹಾಸನ ನಗರ ಮತ್ತು ಚನ್ನರಾಯಪಟ್ಟಣ ಪುರಸಭೆ ವ್ಯಾಪ್ತಿಯ ಸುಮಾರು ನೂರಕ್ಕೂ ಹೆಚ್ಚು ಮತ ಕೇಂದ್ರಗಳಲ್ಲಿ ದೇಶದ ಸರಾಸರಿ ಶೇಕಡವಾರು ಮತದಾನಕ್ಕಿಂತ ಕಡಿಮೆ ಇದೆ. ಹಾಗಾಗಿ ಹಾಸನ ಜಿಲ್ಲೆಯ ವಿದ್ಯಾರ್ಥಿಗಳು, ನಾಗರಿಕರು, ಮಾಧ್ಯಮಗಳು, ಸ್ವಯಂಸೇವಾ ಸಂಸ್ಥೆಗಳು ಮತದಾನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಮತದಾನದ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಹೇಳಿದರು.ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಬಿ ಇರ್ಷಾದ್ ಮಾತನಾಡಿ, ಶ್ರೀಮಂತ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಳವಡಿಸಿಕೊಂಡಿರುವ ಭಾರತೀಯರು ರಾಷ್ಟದಿಂದ ಸಾಕಷ್ಟು ಅನುಕೂಲ ಪಡೆದುಕೊಳ್ಳುತ್ತಿದ್ದಾರೆ. ಆದರೆ ದೇಶಕ್ಕಾಗಿ ತಾವು ಮಾಡಬೇಕಾದ ಜವಾಬ್ದಾರಿಯ ಬಗ್ಗೆ ಅರಿತುಕೊಳ್ಳಬೇಕಾಗಿದೆ. ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿಗೆ ಜಿಲ್ಲೆಯ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಈ ತಿಂಗಳ ೨೬ನೇ ತಾರೀಕು ನಡೆಯುವ ೧೮ನೇ ಸಾರ್ವತ್ರಿಕ ಚುನಾವಣೆಯಲ್ಲಿ ವಿದ್ಯಾರ್ಥಿಗಳು, ತಮ್ಮ ಮನೆಯವರು ಮತ್ತು ತಮ್ಮ ಊರಿನವರನ್ನು ಜಾಗೃತಗೊಳಿಸಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಕರೆ ನೀಡಿದರು.
ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಪರಪ್ಪ ಸ್ವಾಮಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಮತ್ತು ಸ್ವೀಪ್ ಸಂಯೋಜಕ ಕ್ಯಾಪ್ಟನ್ ಶ್ರೀನಿವಾಸ್ ಮತದಾನದ ಅರಿವು ಮತ್ತು ಜಾಗೃತಿ ಕುರಿತಂತೆ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಶೈಕ್ಷಣಿಕ ಡೀನ್ ರಾಜು ಡಿ.ಎಸ್., ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಗಿರೀಶ್, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪವನ್, ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾದ ಎಚ್.ಡಿ.ದೇವರಾಜ್, ಪೂರ್ಣಿಮಾ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.ಹಾಸನ ಕಾಲೇಜಿನ ಪದವಿ ವಿದ್ಯಾರ್ಥಿಗಳಿಗೆ ಮತದಾನದ ಕುರಿತು ಪ್ರಾತ್ಯಕ್ಷಿಕೆ ಮಾಡಿಸಲಾಯಿತು.