ಅಸಂಘಟಿತ ಕಾರ್ಮಿಕರ ನೋಂದಣಿ ಅಭಿಯಾನಕ್ಕೆ ಚಾಲನೆ

KannadaprabhaNewsNetwork |  
Published : May 07, 2025, 12:48 AM IST
ಡಿಸಿ ಚಾಲನೆ | Kannada Prabha

ಸಾರಾಂಶ

ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಸಂಘಟಿತ ಕಾರ್ಮಿಕರ ನೋಂದಣಿ ಅಭಿಯಾನಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ, ತುಮಕೂರು

ಕಾರ್ಮಿಕ ಇಲಾಖೆಯಿಂದ ಹಮ್ಮಿಕೊಂಡಿದ್ದ ಇ-ಶ್ರಮ್ ನೋಂದಣಿ, ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಯೋಜನೆಯಡಿ ಕಾರ್ಮಿಕರ ನೋಂದಣಿ ಹಾಗೂ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಸಂಘಟಿತ ಕಾರ್ಮಿಕರ ನೋಂದಣಿ ಅಭಿಯಾನಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಚಾಲನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅಸಂಘಟಿತ ವಲಯದ ಕಾರ್ಮಿಕರನ್ನು ವಿವಿಧ ಯೋಜನೆಗಳಡಿ ನೋಂದಾಯಿಸುವ ಸಲುವಾಗಿ ಹಮ್ಮಿಕೊಂಡಿದ್ದ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಸಂಘಟಿತ ವರ್ಗಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಹಮಾಲರು, ಚಿಂದಿ ಆಯುವವರು, ಗೃಹ ಕಾರ್ಮಿಕರು, ಟೈಲರ್, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿ ಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೋಟೋಗ್ರಾಫರ್‌ಗಳು, ಸ್ವತಂತ್ರ ಲೇಖನ ಬರಹಗಾರರು, ಬೀಡಿ ಕಾರ್ಮಿಕರು ಮತ್ತಿತರ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಿಕೊಂಡು ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದರು.

ಈ ಸ್ಮಾರ್ಟ್ ಕಾರ್ಡ್ ಹೊಂದಿದ ಅಸಂಘಟಿತ ಕಾರ್ಮಿಕರು ಮರಣ ಹೊಂದಿದಲ್ಲಿ ಅವರ ನಾಮ ನಿರ್ದೇಶಿತರಿಗೆ 1 ಲಕ್ಷ ರು.ಗಳ ಪರಿಹಾರ ಹಾಗೂ 50 ಸಾವಿರ ರು.ಗಳವರೆಗೆ ಆಸ್ಪತ್ರೆ ವೆಚ್ಚ ಮರುಪಾವತಿ ಸೌಲಭ್ಯ ದೊರೆಯಲಿದ್ದು, ಕಾರ್ಮಿಕರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ಕಾರ್ಮಿಕರ ಸುರಕ್ಷತೆ ದೃಷ್ಟಿಯಿಂದ ಇ-ಶ್ರಮ್ ನೋಂದಣಿ ಅಗತ್ಯ. ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ದತ್ತಾಂಶವನ್ನು ಸಿದ್ಧಪಡಿಸಲು ಅಭಿವೃದ್ಧಿಪಡಿಸಿರುವ ಇ-ಶ್ರಮ್ ಪೋರ್ಟಲ್‌ನಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆಗೆಲಸದವರು, ಚಾಲಕರು ಸೇರಿದಂತೆ ಕೇಂದ್ರ ಸರ್ಕಾರ ಗುರುತಿಸಿರುವ ಒಟ್ಟು 379 ವರ್ಗಗಳ ಕಾರ್ಮಿಕರು ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದರು

ಈ ನೋಂದಣಿ ಉಚಿತವಾಗಿದ್ದು, ಯಶಸ್ವಿ ನೋಂದಣಿ ನಂತರ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಗುರುತಿನ ಚೀಟಿಯನ್ನು ವಿತರಿಸಲಾಗುವುದು. ಈ ಗುರುತಿನ ಚೀಟಿಯು ದೇಶದಾದ್ಯಂತ ಜೀವಿತಾವಧಿಯವರೆಗೆ ಮಾನ್ಯತೆ ಹೊಂದಿರುತ್ತದೆ. ಇ-ಶ್ರಮ್ ಯೋಜನೆಗೆ ನೋಂದಾಯಿಸಿಕೊಂಡ ಕಾರ್ಮಿಕರು 1 ವರ್ಷದ ಅವಧಿಗೆ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯ ಪ್ರಯೋಜನ ಪಡೆಯಬಹುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಕಾರ್ಮಿಕ ಇಲಾಖೆಯ ನೋಂದಣಾ ಸಿಬ್ಬಂದಿ, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.

PREV

Recommended Stories

KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?