ಮಹಾಲಿಂಗಪುರ ಪಟ್ಟಣವನ್ನು ತಾಲೂಕು ಕೇಂದ್ರವೆಂದು ಘೋಷಿಸುವಂತೆ ಆಗ್ರಹಿಸಿ 1190ನೇ ದಿನವಾದ ಸೋಮವಾರ ಕರೆ ನೀಡಿದ್ದ ಬಂದ್ ಕರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು. ಪಟ್ಟಣದಲ್ಲಿ ವ್ಯಾಪಾರ ವಹಿವಾಟು, ವಾಹನ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಹೋರಾಟಗಾರರು ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಹೋರಾಟ ನಡೆಸಿದರು.
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ
ಪಟ್ಟಣವನ್ನು ತಾಲೂಕು ಕೇಂದ್ರವೆಂದು ಘೋಷಿಸುವಂತೆ ಆಗ್ರಹಿಸಿ 1190ನೇ ದಿನವಾದ ಸೋಮವಾರ ಕರೆ ನೀಡಿದ್ದ ಬಂದ್ ಕರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು. ಪಟ್ಟಣದಲ್ಲಿ ವ್ಯಾಪಾರ ವಹಿವಾಟು, ವಾಹನ ಸಂಚಾರ ಸಂಪೂರ್ಣ ಬಂದ್ ಆಗಿತ್ತು.
ಹೋರಾಟಗಾರರು ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಹೋರಾಟ ನಡೆಸಿದರು. ಹೋರಾಟ ಸ್ಥಳಕ್ಕೆ ಶಾಸಕ ಸಿದ್ದು ಸವದಿ, ತಹಸೀಲ್ದಾರ ಗಿರೀಶ ಸ್ವಾದಿ ಭೇಟಿ ನೀಡಿ, ಮನವಿ ಸ್ವೀಕರಿಸಿ ಬೆಂಬಲ ವ್ಯಕ್ತಪಡಿಸಿದರು. ಪಟ್ಟಣ ಹಾಗೂ ಸುತ್ತಲಿನ 16 ಹಳ್ಳಿಗಳ ಮುಖಂಡರಯ ಮತ್ತು ನಾಗರಿಕರು ಬಸವೇಶ್ವರ ವೃತ್ತದಿಂದ ಕಿತ್ತೂರು ರಾಣಿ ಚನ್ನಮ್ಮ ವೃತ್ತದವರೆಗೂ ಕಾಲ್ನಡಿಗೆ ಮೂಲಕ ಜಾಥಾ ನಡೆಸಿದರು. ಸಿದ್ದಪ್ಪ ಶಿರೋಳ ಅರೆಬೆತ್ತಲೆಯಾಗಿ ಮೈಮೇಲೆ ''''''''ಬೇಕೇ ಬೇಕು ಮಹಾಲಿಂಗಪುರ ತಾಲೂಕು ಆಗಲೇಬೇಕು'''''''' ಎಂದು ಬರೆದುಕೊಂಡು ಹೋರಾಟದಲ್ಲಿ ಪಾಲ್ಗೊಂಡು ಗಮನ ಸೆಳೆದರು.
ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಸಂಗಪ್ಪ ಹಲ್ಲಿ ಮಾತನಾಡಿ, ಪಟ್ಟಣವನ್ನು ತಾಲೂಕು ಕೇಂದ್ರವಾಗಿ ಘೋಷಿಸುವಂತೆ ಆಗ್ರಹಿಸಿ 35 ವರ್ಷಗಳಿಂದ ನಿರಂತರ ನಡೆಯುತ್ತಿದೆ. ಆಮರಣ ಉಪವಾಸ ಸತ್ಯಾಗ್ರಹ ನಡೆಸಿ ತಾಲೂಕು ಘೋಷಣೆಗೆ ಸರ್ಕಾರವನ್ನು ಆಗ್ರಹಿಸಲಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಭರವಸೆ ನೀಡಿ ಮಾಡದೇ ಹೋಯಿತು. ಆಗ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದ ನಿಯೋಗಕ್ಕೆ ಕಾಂಗ್ರೆಸ್ ಸರ್ಕಾರ ಬಂದರೆ ತಾಲೂಕು ಘೋಷಣೆ ಮಾಡುವ ಭರವಸೆ ನೀಡಿದ್ದರು. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಸಿದ್ದರಾಮಯ್ಯ ಅವರು ಸಿಎಂ ಆಗಿ ಎರಡು ವರ್ಷ ಕಳೆದರೂ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರು ಸ್ಥಳಕ್ಕೆ ಬರುವವರೆಗೂ ಧರಣಿ ನಿಲ್ಲಿಸುವುದಿಲ್ಲ ಎಂದು ಹೋರಾಟಗಾರರು ಪಟ್ಟು ಹಿಡಿದರು. ಬಳಿಕ ಸಚಿವರು ಫೋನ್ ಕರೆ ಮಾಡಿ ಪುರಸಭೆ ಅಧ್ಯಕ್ಷ ಯಲ್ಲನಗೌಡ ಪಾಟೀಲ ಅವರೊಂದಿಗೆ ಮಾತನಾಡಿ, ನಿಯೋಗ ಹೋಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸೋಣವೆಂದು ಭರವಸೆ ನೀಡಿದ್ದರಿಂದ ಧರಣಿ ಹಿಂಪಡೆಯಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.